ಬೀದರ್‌: ಎಸ್‌ಪಿ ವರ್ಗಾವಣೆ ಬೆನ್ನಲ್ಲೇ ಡಿಸಿ ಗೋವಿಂದರೆಡ್ಡಿ ವರ್ಗ

| Published : Jul 06 2024, 12:48 AM IST

ಬೀದರ್‌: ಎಸ್‌ಪಿ ವರ್ಗಾವಣೆ ಬೆನ್ನಲ್ಲೇ ಡಿಸಿ ಗೋವಿಂದರೆಡ್ಡಿ ವರ್ಗ
Share this Article
  • FB
  • TW
  • Linkdin
  • Email

ಸಾರಾಂಶ

ಬೀದರ್‌ ಜಿಲ್ಲಾಧಿಕಾರಿಯಾಗಿದ್ದ ಗೋವಿಂದರೆಡ್ಡಿ ಅವರು ಗದಗ ಜಿಲ್ಲಾಧಿಕಾರಿಗಳಾಗಿ ವರ್ಗವಾಗಿದ್ದು ಅವರು ನೂತನ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರಿಗೆ ಹೂಗುಚ್ಚ ನೀಡಿ ಬರಮಾಡಿಕೊಂಡರು

ಕನ್ನಡಪ್ರಭ ವಾರ್ತೆ ಬೀದರ್‌

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಚನ್ನಬಸವಣ್ಣ ಅವರ ವರ್ಗಾವಣೆಯಾದ ಬೆನ್ನಲ್ಲಿಯೇ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅವರ ವರ್ಗಾವಣೆ ಆದೇಶ ಹೊರಬಿದ್ದಿದ್ದು, ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಶಿಲ್ಪಾ ಶರ್ಮಾ ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದರು.

ಜಿಲ್ಲೆಯಲ್ಲಿ ಎಸ್‌ಪಿ ಚನ್ನಬಸವಣ್ಣ ಎಸ್‌ಎಲ್‌ ಹಾಗೂ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅನೇಕ ಸುಧಾರಣಾ ಕ್ರಮ ಕೈಗೊಂಡಿದ್ದರಲ್ಲದೆ ಸಾಮಾನ್ಯ ಜನರೊಂದಿಗೆ ಬೆರೆತು ಜನಾನುರಾಗಿ ಜಿಲ್ಲಾಧಿಕಾರಿ ಮತ್ತು ಎಸ್‌ಪಿ ಎಂದು ಖ್ಯಾತರಾಗಿದ್ದರು. ಬೀದರ್‌ ಜಿಲ್ಲಾಧಿಕಾರಿಯಾಗಿದ್ದ ಗೋವಿಂದರೆಡ್ಡಿ ಅವರು ಗದಗ ಜಿಲ್ಲಾಧಿಕಾರಿಗಳಾಗಿ ವರ್ಗವಾಗಿದ್ದು ಅವರು ನೂತನ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರಿಗೆ ಹೂಗುಚ್ಚ ನೀಡಿ ಬರಮಾಡಿಕೊಂಡರು.

ಶಿಲ್ಪಾ ಶರ್ಮಾ ಅವರು ಕರ್ನಾಟಕ ಕ್ಯಾಡರ್‌ 2015ರ ಐಎಎಸ್‌ ಬ್ಯಾಚ್‌ನ ಅಧಿಕಾರಿಯಾಗಿರುವ ಇವರು ಮೂಲತಃ ಹಿಮಾಚಲ ಪ್ರದೇಶದವರಾಗಿದ್ದಾರೆ. 2018ರಲ್ಲಿ ಇವರು ರಾಯಚೂರು ಜಿಲ್ಲೆಯಲ್ಲಿ ಸಹಾಯಕ ಆಯುಕ್ತರಾಗಿ ಕರ್ತವ್ಯ ನಿರ್ವಹಿಸಿ ನಂತರ ಯಾದಗಿರಿ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಕೆಲಸ ನಿರ್ವಹಣೆ ಮಾಡಿರುತ್ತಾರೆ. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನಿರ್ದೇಶಕರಾಗಿ ಹಾಗೂ ಪಂಚಾಯತ್‌ ರಾಜ್‌ ಇಲಾಖೆಯಲ್ಲಿ ಆಯುಕ್ತರಾಗಿ ಮತ್ತು ಕರ್ನಾಟಕ ವಿದ್ಯುತ್‌ ಕಾರ್ಖಾನೆ ಬೆಂಗಳೂರಿನಲ್ಲಿ ವ್ಯವಸ್ಥಾಪಕ ನಿರ್ದೆಶಕರಾಗಿಯೂ ಕರ್ತವ್ಯ ನಿರ್ವಹಿಸಿದ್ದಾರೆ.

ಬೀದರ್‌ ಜಿಲ್ಲೆ ನೂತನ ಜಿಲ್ಲಾಧಿಕಾರಿಗಳಾಗಿ ಅಧಿಕಾರ ಸ್ವೀಕರಿಸಿದ ನಂತರ ಮಾತನಾಡಿದ ಶಿಲ್ಪಾ ಶರ್ಮಾ, ಇಂದು ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸುತ್ತಿದ್ದೇನೆ. ಜಿಲ್ಲೆಯ ಅಭಿವೃದ್ಧಿಗೆ ಒತ್ತು ನೀಡಲಾಗುವುದು. ಇದಕ್ಕೆ ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಸಹಕಾರ ನೀಡಬೇಕು. ವಿವಿಧ ಇಲಾಖೆ ಎಲ್ಲಾ ಅಧಿಕಾರಿಗಳು ನಮ್ಮೊಂದಿಗೆ ಕೈ ಜೋಡಿಸಿ ಕೆಲಸ ಮಾಡಬೇಕು ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಜಿಲ್ಲೆಯ ವಿವಿಧ ಜನಪರ ಸಂಘಟನೆಗಳ ಪ್ರತಿನಿಧಿಗಳು, ಸಾರ್ವಜನಿಕರು ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು ಮತ್ತು ಜಿಲ್ಲಾಧಿಕಾರಿಗಳ ಕಛೇರಿ ಅಧಿಕಾರಿ ಮತ್ತು ಸಿಬ್ಬಂದಿ ನೂತನ ಜಿಲ್ಲಾಧಿಕಾರಿಗಳಿಗೆ ಹೂಗುಚ್ಚ ನೀಡಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ, ಬೀದರ್‌ ಸಹಾಯಕ ಆಯುಕ್ತರಾದ ಲವೀಶ್‌ ಒರ್ಡಿಯಾ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿ ಕಚೇರಿ ಇತರೆ ಅಧಿಕಾರಿ ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.