ವಿವಿಧ ಬೇಡಿಕೆ ಈಡೇರಿಕೆಗಾಗಿ 20 ರಂದು ಬೈಕ್ ರ್‍ಯಾಲಿ

| Published : Jan 19 2024, 01:47 AM IST

ವಿವಿಧ ಬೇಡಿಕೆ ಈಡೇರಿಕೆಗಾಗಿ 20 ರಂದು ಬೈಕ್ ರ್‍ಯಾಲಿ
Share this Article
  • FB
  • TW
  • Linkdin
  • Email

ಸಾರಾಂಶ

ಮಲ್ಲಿಕ್ಯಾತನಹಳ್ಳಿ ನಿವಾಸಿಗಳಿಗೆ ಹಕ್ಕುಪತ್ರ ನೀಡಬೇಕು. ಸೋಮನಹಳ್ಳಿಯ ಸರ್ವೇ ನಂ.88 ಹಾಗೂ 148 ರ ಹಿಡುವಳಿದಾರರಿಗೆ ಕಾಯಂ ಸಾಗುವಳಿ ನೀಡುವುದು ಸೇರಿ ಹಲವು ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಕನ್ನಡಪ್ರಭ ವಾರ್ತೆ ಮಳವಳ್ಳಿ

ಹಕ್ಕುಪತ್ರ ವಿತರಣೆ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಕರ್ನಾಟಕ ಪ್ರಾಂತ ರೈತ ಸಂಘದ ವತಿಯಿಂದ ಜ.20ರಂದು ಮಳವಳ್ಳಿಯಿಂದ ಮಂಡ್ಯದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಬೈಕ್ ಜಾಥಾ ಹಮ್ಮಿಕೊಳ್ಳಲಾಗಿದೆ.

ಪಟ್ಟಣದ ಕರ್ನಾಟಕ ಪ್ರಾಂತ ರೈತ ಸಂಘದ ಕಚೇರಿಯಲ್ಲಿ ತಾಲೂಕು ಅಧ್ಯಕ್ಷ ಎನ್.ಎಲ್.ಭರತ್ ರಾಜ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಳೆದ ೨೦ ವರ್ಷಗಳಿಂದ ತಾಲೂಕಿನಲ್ಲಿ ನಡೆದಿರುವ ಅಕ್ರಮ ಭೂ ಕಬಳಿಕೆ ಹಾಗೂ ಪರಭಾರೆ ಬಗ್ಗೆ ಸಮಗ್ರ ತನಿಖೆ ನಡೆಸಿ ಅಕ್ರಮ ಭೂಮಿಯನ್ನು ವಶಪಡಿಸಿಕೊಂಡು ಬಡ ರೈತರಿಗೆ ಹಂಚಬೇಕು ಎಂದು ಆಗ್ರಹಿಸಿದರು.

ತಾಲೂಕಿನ ಮಲ್ಲಿಕ್ಯಾತನಹಳ್ಳಿ ನಿವಾಸಿಗಳಿಗೆ ಹಕ್ಕುಪತ್ರ ನೀಡಬೇಕು. ಸೋಮನಹಳ್ಳಿಯ ಸರ್ವೇ ನಂ.88 ಹಾಗೂ 148 ರ ಹಿಡುವಳಿದಾರರಿಗೆ ಕಾಯಂ ಸಾಗುವಳಿ ನೀಡುವುದು ಸೇರಿ ಹಲವು ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದರು.

ಕಳೆದ ತಿಂಗಳು ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದ್ದ ವೇಳೆ, ಉಪವಿಭಾಗಾಧಿಕಾರಿಗಳು ಸ್ಥಳಕ್ಕಾಗಮಿಸಿ ಸಮಸ್ಯೆ ಪರಿಹರಿಸುವ ಭರವಸೆ ನೀಡಿದ್ದರು. ಆದರೆ, ಇಲ್ಲಿಯವರೆಗೂ ಯಾವುದೇ ಸಮಸ್ಯೆಗಳು ಬಗೆಹರಿದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾಧಿಕಾರಿ ಕುಮಾರ್ ಅವರೂ ಸಹ ಸಭೆ ನಡೆಸಿ ಸಮಸ್ಯೆಗಳನ್ನು ಬಗೆಹರಿಸಲು ಸೂಚಿಸಿದ್ದರೂ ಪ್ರಯೋಜನವಾಗಿಲ್ಲ. ಪ್ರಸ್ತುತ ಎದುರಾಗಿರುವ ಬರ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಆಗ್ರಹಿಸಿದರು.

ಕೆರೆ, ಕಟ್ಟೆ, ರಸ್ತೆ ಸೇರಿದಂತೆ ಸರ್ಕಾರದ ಆಸ್ತಿಗಳನ್ನು ರಕ್ಷಿಸಬೇಕು. ಬರಗಾಲ ಹಿನ್ನೆಲೆ ರಾಷ್ಟ್ರೀಯ ವಿಪತ್ತು ಪರಿಹಾರವನ್ನು ಘೋಷಿಸಬೇಕು. ಬರ ಪರಿಹಾರವನ್ನು ಕೇಂದ್ರ ಸರ್ಕಾರ ಬಿಡುಗಡೆಗೊಳಿಸಬೇಕು. ಉದ್ಯೋಗಖಾತ್ರಿ ಯೋಜನೆಯಡಿ ಬರುವ ಸಮಸ್ಯೆಗಳನ್ನು ನಿವಾರಿಸಬೇಕೆಂದು ಬೈಕ್ ರ್‍ಯಾಲಿ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ಮನವಿ ಪತ್ರ ಸಲ್ಲಿಸಲಾಗುವುದು ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಕಾರ್ಯದರ್ಶಿ ಎನ್.ಲಿಂಗರಾಜಮೂರ್ತಿ, ರಾಜ್ಯ ಸಮಿತಿ ಸದಸ್ಯರಾದ ಪ್ರಮೀಳಾ, ಶಿವಕುಮಾರ್, ಮಹದೇವು, ಪ್ರಕಾಶ್ ಉಪಸ್ಥಿತಿರಿದ್ದರು.