ಬಿಕ್ಲು ಶಿವ ಕೊಲೆ: ಎ1 ಜಗ್ಗನಿಗೆ14 ದಿನ ನ್ಯಾಯಾಂಗ ಬಂಧನ

| Published : Sep 09 2025, 02:00 AM IST

ಸಾರಾಂಶ

ರೌಡಿ ಶೀಟರ್‌ ಶಿವಪ್ರಕಾಶ್‌ ಅಲಿಯಾಸ್‌ ಬಿಕ್ಲು ಶಿವ ಕೊಲೆ ಪ್ರಕರಣದ 1ನೇ ಆರೋಪಿ ಜಗದೀಶ್‌ ಅಲಿಯಾಸ್‌ ಜಗ್ಗನಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ರೌಡಿ ಶೀಟರ್‌ ಶಿವಪ್ರಕಾಶ್‌ ಅಲಿಯಾಸ್‌ ಬಿಕ್ಲು ಶಿವ ಕೊಲೆ ಪ್ರಕರಣದ 1ನೇ ಆರೋಪಿ ಜಗದೀಶ್‌ ಅಲಿಯಾಸ್‌ ಜಗ್ಗನಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.

ಆರೋಪಿಯ ಸಿಐಡಿ ಕಸ್ಟಡಿ ಸೋಮವಾರ ಅಂತ್ಯಗೊಂಡ ಹಿನ್ನೆಲೆಯಲ್ಲಿ ಸಿಐಡಿ ಅಧಿಕಾರಿಗಳು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಈ ವೇಳೆ ಸಿಐಡಿ ಪರ ವಕೀಲರು ಆರೋಪಿಯನ್ನು ಚಿಕ್ಕಬಳ್ಳಾಪುರ ಜೈಲಿಗೆ ಸ್ಥಳಾಂತರಿಸುವಂತೆ ಮನವಿ ಮಾಡಿದರು. ಇದಕ್ಕೆ ಆರೋಪಿ ಪರ ವಕೀಲರು ಆಕ್ಷೇಪಿಸಿದರು. ಬಳಿಕ ನ್ಯಾಯಾಲಯವು ಆರೋಪಿಯನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಪ್ರತ್ಯೇಕ ಸೆಲ್‌ನಲ್ಲಿ ಇರಿಸುವಂತೆ ಸೂಚಿಸಿ ಸೆ.22ರ ವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿತು.

ನಾಲ್ವರು 14 ದಿನ ಸಿಐಡಿ ಕಸ್ಟಡಿಗೆ:

ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧಿತ ಆರೋಪಿಗಳ ವಿರುದ್ಧ ಕೋಕಾ ಕಾಯ್ದೆ ಅಳವಡಿಸಿರುವ ಹಿನ್ನೆಲೆಯಲ್ಲಿ ಹೆಚ್ಚಿನ ವಿಚಾರಣೆ ಸಂಬಂಧ ಕಿರಣ್‌, ವಿಮಲ್‌ ಸೇರಿ ನಾಲ್ವರು ಆರೋಪಿಗಳನ್ನು ವಶಕ್ಕೆ ನೀಡುವಂತೆ ಸಿಐಡಿ ಪರ ವಕೀಲರು ಮನವಿ ಮಾಡಿದರು. ನ್ಯಾಯಾಲಯವು ಈ ನಾಲ್ವರನ್ನು ಸೆ.22ರವರೆಗೆ ಸಿಐಡಿ ವಶಕ್ಕೆ ನೀಡಿ ಆದೇಶಿಸಿತು.

ಪ್ರಕರಣದ ಹಿನ್ನೆಲೆ:

ಭೂ ವ್ಯಾಜ್ಯದ ಹಿನ್ನೆಲೆಯಲ್ಲಿ ಜು.15ರಂದು ದುಷ್ಕರ್ಮಿಗಳು ರೌಡಿ ಬಿಕ್ಲು ಶಿವನನ್ನು ಆತನ ಮನೆ ಬಳಿಯೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿದ್ದರು. ಈ ಸಂಬಂಧ ಶಿವನ ತಾಯಿ ನೀಡಿದ ದೂರಿನ ಮೇರೆಗೆ ಭಾರತಿ ನಗರ ಪೊಲೀಸ್‌ ಠಾಣೆಯಲ್ಲಿ ರೌಡಿ ಶೀಟರ್‌ ಜಗದೀಶ್‌ ಅಲಿಯಾಸ್ ಜಗ್ಗ, ಮಾಜಿ ಸಚಿವ ಬೈರತಿ ಬಸವರಾಜು ಸೇರಿ ಹಲವರ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಈ ಸಂಬಂಧ ಪೊಲೀಸರು 17 ಆರೋಪಿಗಳನ್ನು ಬಂಧಿಸಿದ್ದರು. ಬಳಿಕ ಈ ಪ್ರಕರಣ ಸಿಐಡಿಗೆ ವರ್ಗಾವಣೆಯಾಗಿತ್ತು. ಘಟನೆ ಬಳಿಕ 1ನೇ ಆರೋಪಿ ಜಗ್ಗ ವಿದೇಶಕ್ಕೆ ಪರಾರಿಯಾಗಿದ್ದ. ಇತ್ತೀಚೆಗೆ ದೆಹಲಿಯಲ್ಲಿ ಆತನನ್ನು ಬಂಧಿಸಿದ್ದ ಸಿಐಡಿ ಅಧಿಕಾರಿಗಳು 10 ದಿನ ಕಸ್ಟಡಿಗೆ ಪಡೆದುಕೊಂಡು ವಿಚಾರಣೆಗೆ ಒಳಪಡಿಸಿದ್ದರು.