ಕನ್ನಡಪ್ರಭ ವಾರ್ತೆ ವಿಜಯಪುರ

ಜೈವಿಕ ಇಂಧನವು ಭವಿಷ್ಯದ ಪ್ರಮುಖ ಇಂಧನದ ಮೂಲವಾಗಿದ್ದು, ದೇಶದಲ್ಲಿ ಜೈವಿಕ ಇಂಧನದ ಬಳಕೆ, ಉತ್ಪಾದನೆ ಹಾಗೂ ಸಂಶೋಧನೆಗೆ ಹೆಚ್ಚಿನ ವೇಗ ನೀಡಬೇಕಾಗಿದೆ ಎಂದು ಮಹಿಳಾ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ ಹೇಳಿದರು.

ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಸ್ನಾತಕ ಅಧ್ಯಯನ ವಿಭಾಗ, ಅರಣ್ಯ ಇಲಾಖೆ ಹಾಗೂ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಸಹಯೋಗದಲ್ಲಿ ಅಂತಾರಾಷ್ಟ್ರೀಯ ಜೈವಿಕ ಇಂಧನ ದಿನಾಚರಣೆ ಅಂಗವಾಗಿ ಜೈವಿಕ ಇಂಧನ ಅರಿವು ಹಾಗೂ ಸಸಿ ನೆಡುವ ಕಾರ್ಯಕ್ರಮವನ್ನು ವಿವಿಯ ಜೈವಿಕ ಇಂಧನ ಸಂಶೋಧನೆ, ಮಾಹಿತಿ ಹಾಗೂ ಪ್ರಾತ್ಯಕ್ಷಿಕ ಕೇಂದ್ರದ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಹಸಿರೀಕರಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಪ್ರತಿಯೊಬ್ಬರೂ ತಮ್ಮ ಹುಟ್ಟುಹಬ್ಬ ಸೇರಿದಂತೆ ವಿಶೇಷ ದಿನಗಳನ್ನು ಸಸಿ ನೆಡುವ ಮೂಲಕ ಆಚರಿಸಿಕೊಳ್ಳುವ ಅಭ್ಯಾಸ ಬೆಳೆಸಿಕೊಳ್ಳಬೇಕು. ಅಷ್ಟೇ ಅಲ್ಲದೇ ವಿಶ್ವವಿದ್ಯಾನಿಲಯದ ಆವರಣದಲ್ಲಿ ಪ್ರಸಕ್ತ ವರ್ಷ ಸುಮಾರು 3 ಸಾವಿರ ಸಸಿಗಳನ್ನು ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.ಮುಖ್ಯ ಅತಿಥಿ ಡಾ.ಬಾಬು ಸಜ್ಜನ ಮಾತನಾಡಿ, ಜೈವಿಕ ಇಂಧನ ಕ್ಷೇತ್ರದಲ್ಲಿರುವ ಖಾಸಗಿ ಹಾಗೂ ಸರ್ಕಾರಿ ವಲಯದ ಉದ್ಯೋಗ ಮತ್ತು ಸ್ವಯಂ ಉದ್ಯೋಗದ ಅವಕಾಶಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ಸಹಾಯಕ ಉಪ ಅರಣ್ಯ ಸಂರಕ್ಷಣಾಧಿಕಾರಿ ಸೆಲ್ವರಾಜ ಮಾತನಾಡಿ, ಜೈವಿಕ ಇಂಧನ ಕ್ಷೇತ್ರದಲ್ಲಿ ಇತ್ತೀಚೆಗೆ ನಡೆದಿರುವ ವಿವಿಧ ಸಂಶೋಧನೆಗಳು ಹಾಗೂ ಬೆಳವಣಿಗೆಗಳ ಕುರಿತು ವಿದ್ಯಾರ್ಥಿಗಳಿಗೆ ವಿವರಿಸಿದರು.

ವಿವಿ ಕುಲಸಚಿವ ಶಂಕರಗೌಡ ಸೋಮನಾಳ ಮಾತನಾಡಿ, ವಿದ್ಯಾರ್ಥಿನಿಯರಿಗಾಗಿ ಜೈವಿಕ ಇಂಧನ ವಿಷಯದ ಕುರಿತು ಕಿರು ರಸಪ್ರಶ್ನೆ ಕಾರ್ಯಕ್ರಮ ನಡೆಸಿಕೊಟ್ಟರು. ಕಾರ್ಯಕ್ರಮದ ಸಂಯೋಜಕ ಡಾ.ಬಾಬು.ಆರ್‌.ಎಲ್ ಸ್ವಾಗತಿಸಿ, ಪ್ರಾಸ್ತಾವಿಕ ನುಡಿಗಳನ್ನಾಡಿ, ನಿರೂಪಿಸಿದರು.


ಮಹಿಳಾ ಕೌಶಲ್ಯ ತಂತ್ರಜ್ಞಾನ ಪಾರ್ಕ್ ವಿಶೇಷಾಧಿಕಾರಿ ಪ್ರೊ.ರಾಜು ಬಾಗಲಕೋಟ, ಡಾ.ರಮೇಶ ಸೊನಕಾಂಬಳೆ, ಸ್ನಾತಕ ಅಧ್ಯಯನ ವಿಭಾಗದ ವಿದ್ಯಾರ್ಥಿನಿಯರು, ಅತಿಥಿ ಉಪನ್ಯಾಸಕರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು