ಸಾರಾಂಶ
ಕನ್ನಡಪ್ರಭ ವಾರ್ತೆ ಮಂಡ್ಯ
ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿ, ಸಿಬ್ಬಂದಿ ಬಯೋ ಮೆಟ್ರಿಕ್ ಮೂಲಕ ಹಾಜರಾತಿಯನ್ನು ಕಡ್ಡಾಯವಾಗಿ ದಾಖಲಿಸುವಂತೆ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್ ತಿಳಿಸಿದರು.ಮಂಗಳವಾರ ಜಿಲ್ಲಾ ಪಂಚಾಯ್ತಿ ಮಿನಿ ಸಭಾಂಗಣದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವರು ಆ.2 ರಂದು ಇಲಾಖಾ ವಿಷಯಗಳ ಕುರಿತು ಪ್ರಗತಿ ಪರಿಶೀಲಿಸಲು ಎಲ್ಲಾ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯನಿರ್ವಾಹಕ ಅಧಿಕಾರಿ, ಉಪವಿಭಾಗಗಳ ಸಹಾಯಕ ಕಾರ್ಯಪಾಲಕ ಅಭಿಯಂತರರು, ತಾಲೂಕು ಪಂಚಾಯ್ತಿಗಳ ಸಹಾಯಕ ನಿರ್ದೇಶಕರು ಹಾಗೂ ಜಿಪಂ ಶಾಖಾ ಮುಖ್ಯಸ್ಥರೊಂದಿಗೆ ಪೂರ್ವಭಾವಿಯಾಗಿ ಸಭೆ ನಡೆಸಿ ಮಾತನಾಡಿದರು.
ಇ-ಸ್ವತ್ತು ಮತ್ತು ಐಪಿಜಿಆರ್‌ಎಸ್ ಅರ್ಜಿಗಳ ವಿಲೇವಾರಿ ಬಗ್ಗೆ ಮಾಹಿತಿ ಪಡೆದು ಆದ್ಯತೆ ಮೇರೆಗೆ ಕಾಲಮಿತಿಯೊಳಗೆ ಇ-ಸ್ವತ್ತು ಹಾಗೂ ಸಾರ್ವಜನಿಕ ಕುಂದು ಕೊರತೆ ಅರ್ಜಿಗಳನ್ನು ನಿಯಮಾನುಸಾರ ವಿಲೇವಾರಿ ಮಾಡಲು ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಡಿಜಿಟಲ್ ಗ್ರಂಥಾಲಯಗಳ ನಿರ್ವಹಣೆ, ಇಲಾಖಾ ವಿಚಾರಣೆ ವಿವರ, 14 ಮತ್ತು 15ನೇ ಹಣಕಾಸಿನ ಪ್ರಗತಿ ಪರಿಶೀಲಿಸಿದರು.ಕಾವೇರಿ ಹಾಗೂ ಹೇಮಾವತಿ ನದಿ ಪಾತ್ರದಲ್ಲಿ ಮಳೆ ಪ್ರಮಾಣ ಹೆಚ್ಚಾಗಿದ್ದು, ನದಿಗಳ ಪಾತ್ರದಲ್ಲಿ ಬರುವ ಗ್ರಾಮ ಪಂಚಾಯ್ತಿಗಳಲ್ಲಿ ವಿಪತ್ತು ನಿರ್ವಹಣೆ ಸಂಬಂಧ ಅಗತ್ಯ ಕ್ರಮ ವಹಿಸುವಂತೆ ಈಗಾಗಲೇ ಸೂಚಿಸಲಾಗಿದ್ದು, ಅದರಂತೆ ಪ್ರವಾಹ ಪರಿಸ್ಥಿತಿ ಕಡಿಮೆಯಾಗುವವರೆಗೂ ಸಹ ನದಿ ಪಾತ್ರದ ಗ್ರಾಮ ಪಂಚಾಯ್ತಿಗಳಲ್ಲಿ ಎಚ್ಚರಿಕೆ ವಹಿಸಿ ಸಾರ್ವಜನಿಕರಿಗೆ ಈ ಬಗ್ಗೆ ಅರಿವು ಮೂಡಿಸುವಂತೆ ಪಿಡಿಓಗಳಿಗೆ ನಿರ್ದೇಶನ ನೀಡುವಂತೆ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ತಿಳಿಸಿದರು.
ಮಹಾತ್ಮಗಾಂಧಿ ನರೇಗಾ ಯೋಜನೆ, ಜಲ ಜೀವನ್ ಮಿಷನ್ ಯೋಜನೆ, ಸ್ವಚ್ಛ ಭಾರತ್ ಮಿಷನ್, ಬಾಪೂಜಿ ಸೇವಾ ಕೇಂದ್ರದ ವಿಷಯಗಳಿಗೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲಿಸಿ ನಿಗಧಿತ ಅವಧಿಯಲ್ಲಿ ಪ್ರಗತಿ ಸಾಧಿಸಲು ಹಾಗೂ ಕಾರ್ಯನಿರ್ವಾಹಕ ಅಧಿಕಾರಿಗಳ ಹಂತದಲ್ಲಿ ಗ್ರಾಪಂ ಪಿಡಿಒಗಳ ಸಭೆಯನ್ನು ಸಚಿವರ ನಿರ್ದೇಶನದಂತೆ ಪ್ರತಿ ಮಾಹೆಯ 4 ನೇ ತಾರೀಖಿನಂದು ಸಭೆ ನಡೆಸಿ ಸಂಬಂಧಿಸಿದಂತೆ ಗ್ರಾಮ ಪಂಚಾಯ್ತಿ ವಾರು ಪ್ರಗತಿ ಪರಿಶೀಲಿಸಿ. ಸಭಾ ನಡವಳಿ ಹಾಗೂ ಅನುಪಾಲನಾ ವರದಿಯನ್ನು ಎರಡು ದಿನಗಳೊಳಗಾಗಿ ಸಲ್ಲಿಸುವಂತೆ ತಿಳಿಸಿದರು.ಸಭೆಯಲ್ಲಿ ಜಿಪಂ ಯೋಜನಾ ನಿರ್ದೇಶಕ ಸಂಜೀವಪ್ಪ, ಉಪ ಕಾರ್ಯದರ್ಶಿ ಆನಂದ್, ಬಾಬು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.