ಸಾರಾಂಶ
ಸೋಮವಾರಪೇಟೆ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ ಹಾಗೂ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಮಂಗಳವಾರ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಮಾಜಿ ಮುಖ್ಯಮಂತ್ರಿ ದೇವರಾಜು ಅರಸು ಜನ್ಮ ದಿನಾಚರಣೆ ಸಮಾರಂಭ ನಡೆಯಿತು.
ಕನ್ನಡಪ್ರಭ ವಾರ್ತೆ ಸೋಮವಾರಪೇಟೆ
ಸಮಾಜ ಸುಧಾರಕ ಡಿ.ದೇವರಾಜು ಅರಸು ಆದರ್ಶ ಗುಣಗಳನ್ನು ಎಲ್ಲರೂ ಪಾಲಿಸಬೇಕಿದೆ ಎಂದು ತಹಸೀಲ್ದಾರ್ ಶ್ರೀಧರ್ ಕಂಕನವಾಡಿ ಹೇಳಿದ್ದಾರೆ.ತಾಲೂಕು ಆಡಳಿತ, ತಾಲೂಕು ಪಂಚಾಯಿತಿ ಹಾಗೂ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಮಂಗಳವಾರ ಇಲ್ಲಿನ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ನಡೆದ ಮಾಜಿ ಮುಖ್ಯಮಂತ್ರಿ ದೇವರಾಜು ಅರಸು ಜನ್ಮ ದಿನಾಚರಣೆ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯ ಸಿಗಬೇಕು ಎಂದು ಪ್ರತಿಪಾದಿಸಿದ ಅರಸು ವ್ಯಕ್ತಿತ್ವ ರಾಜ್ಯದ ಜನರ ಹೃದಯದಲ್ಲಿ ಶಾಶ್ವತ ಸ್ಥಾನ ಸಿಗುವಂತೆ ಮಾಡಿದೆ ಎಂದರು.ಉಪ ವಲಯ ಅರಣ್ಯಾಧಿಕಾರಿ ಭವ್ಯ ಮಾತನಾಡಿ, ದಿ.ದೇವರಾಜು ಅರಸು ತಮ್ಮ ಪರಿಕಲ್ಪನೆಯ ಹಿಂದುಳಿದ ವರ್ಗಗಳ ಶೈಕ್ಷಣಿಕ ಅಭಿವೃದ್ದಿಗೆ ರಾಜ್ಯದಲ್ಲಿ ವಿದ್ಯಾರ್ಥಿನಿಲಯ ಪ್ರಾರಂಭಿಸಿದ್ದರು. ವಿದ್ಯಾರ್ಥಿನಿಲಯದಲ್ಲಿ ಇದ್ದು ವ್ಯಾಸಂಗ ಮಾಡಿದ ಅದೆಷ್ಟೋ ಸಂಖ್ಯೆಯ ಬಡವರ, ಶೋಷಿತರ, ದುರ್ಬಲ ವರ್ಗದ ಮಕ್ಕಳು ಇಂದು ಸಮಾಜದಲ್ಲಿ ಉನ್ನತ ಹುದ್ದೆಗಳನ್ನು ಅಲಂಕರಿಸಿದ್ದಾರೆ ಎಂದರು.
ತಾಲೂಕು ಪಂಚಾಯಿತಿ ಕಾರ್ಯನಿರ್ನಹಣಾಧಿಕಾರಿ ಪರಮೇಶ್ ಕುಮಾರ್ ಮಾತನಾಡಿ, ಇಂದಿನ ವಿದ್ಯಾರ್ಥಿನಿಲಯಗಳಲ್ಲಿ ಎಲ್ಲಾ ಅನುಕೂಲಗಳು ವಿದ್ಯಾರ್ಥಿಗಳಿಗೆ ಸಮರ್ಪಕವಾಗಿ ಸಿಗುತ್ತಿವೆ. ಉತ್ತಮ ವಿದ್ಯಾಬ್ಯಾಸವನ್ನು ಪಡೆಯುವ ಮೂಲಕ ಸರಕಾರದ ಯೋಜನೆಗಳನ್ನು ಉತ್ತಮ ರೀತಿಯಲ್ಲಿ ಬಳಸಿಕೊಳ್ಳಬೇಕೆಂದರು.ಆಲೂರು ಸಿದ್ದಾಪುರ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯದ ವಿದ್ಯಾರ್ಥಿಗಳಾದ ಪ್ರೀತಂ, ಸಾಕ್ಷಿ, ಮಹೇಶ್ ಹಾಗೂ ಸೋಮವಾರಪೇಟೆ ವಿದ್ಯಾರ್ಥಿನಿಲಯದ ವನಿತಾ ಅವರಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.
ಸೋಮವಾರ ಬೆಂಗಳೂರಿನಲ್ಲಿ ನಡೆದ ಹಾಕಿ ಪಂದ್ಯಾಟದಲ್ಲಿ ಜಯ ಗಳಿಸಿ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಅರ್ಹತೆ ಪಡೆದ ತಂಡದಲ್ಲಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಹಾಕಿ ತಂಡದಲ್ಲಿ ಪಾಲ್ಗೊಂಡಿದ್ದ ಸೋಮವಾರಪೇಟೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ದ್ವಿತೀಯ ದರ್ಜೆ ಸಹಾಯಕ ಮಂಜುನಾಥ್ ಅವರನ್ನು ಗೌರವಿಸಲಾಯಿತು.