ಸಾರಾಂಶ
ಬೆಂಗಳೂರು : ವಕ್ಫ್ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಇದೇ 21 ಅಥವಾ 22 ರಂದು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಹೋರಾಟ ನಡೆಸಲಾಗುವುದು. ಅಲ್ಲದೇ, ಜನರಿಂದ ಅಹವಾಲು ಸ್ವೀಕಾರ ಮಾಡಲಿದ್ದೇವೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂಗೌಡ ಹೇಳಿದ್ದಾರೆ.
ಶನಿವಾರ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶೋಷಣೆಗೊಳಗಾದ ಸಹಸ್ರಾರು ಸಂಖ್ಯೆಯ ಸಾರ್ವಜನಿಕರು, ರೈತರನ್ನು ಬೆಳಿಗ್ಗೆಯಿಂದ ಸಂಜೆ ತನಕ ವೇದಿಕೆಗೆ ಬರಮಾಡಿಕೊಂಡು ಅಹವಾಲು ಸ್ವೀಕರಿಸುತ್ತೇವೆ. ಸಮಸ್ಯೆಯ ಗಂಭೀರತೆಯನ್ನು ಜಿಲ್ಲಾವಾರು ಪರಾಮರ್ಶೆ ಮಾಡುತ್ತೇವೆ ಎಂದು ತಿಳಿಸಿದರು.ಅಹವಾಲು ಸ್ವೀಕರಿಸಲು ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮೂರು ತಂಡಗಳನ್ನು ಪ್ರಕಟಿಸಿದ್ದಾರೆ. ಆ ತಂಡಗಳು ರಾಜ್ಯಾದ್ಯಂತ ಪ್ರತಿ ಜಿಲ್ಲೆಗಳ ಪ್ರವಾಸ ಮಾಡಲಿವೆ. ರೈತರು, ಮಠಮಾನ್ಯಗಳು ಮತ್ತು ಸಾರ್ವಜನಿಕರ ಸಮಸ್ಯೆಯನ್ನು ಆಲಿಸಲಿದೆ. ಅವರ ಸಮಸ್ಯೆಯನ್ನು ಮುಂಬರುವ ಬೆಳಗಾವಿ ಅಧಿವೇಶನದಲ್ಲಿ ಪ್ರಸ್ತಾಪಿಸುತ್ತೇವೆ. ನೈಜ ವರದಿಯನ್ನು ತರಲಿದ್ದೇವೆ. ಡಿಸೆಂಬರ್ ಮೊದಲ ವಾರದಿಂದ ಈ ಪ್ರವಾಸ ಇರಲಿದೆ ಎಂದು ಮಾಹಿತಿ ನೀಡಿದರು.
ಬೆಳಗಾವಿ ಅಧಿವೇಶನದ ವೇಳೆ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆಯನ್ನೂ ಆಯೋಜಿಸುತ್ತೇವೆ. 50ರಿಂದ 60 ಸಾವಿರ ಸಾರ್ವಜನಿಕರು, ರೈತರನ್ನು ಸೇರಿಸಿ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಪ್ರತಿಭಟನೆಯನ್ನು ಏರ್ಪಡಿಸುತ್ತೇವೆ. ಪ್ರತಿ ಜಿಲ್ಲೆ, ಹೋಬಳಿ, ಪಂಚಾಯಿತಿ ಮಟ್ಟದಲ್ಲಿ ವಕ್ಫ್ ಸಮಸ್ಯೆಗಳನ್ನು ಆಲಿಸುತ್ತಿದ್ದೇವೆ ಎಂದರು.ವಕ್ಫ್ ಆಸ್ತಿ ಸಂಬಂಧ ಇಡೀ ರಾಜ್ಯದಲ್ಲಿ ಸಮಸ್ಯೆ ಎದುರಾಗಿದೆ. ಆ ಸಮಸ್ಯೆಗೆ ತಾರ್ಕಿಕ ಅಂತ್ಯ ಹುಡುಕುವ ನಿಟ್ಟಿನಲ್ಲಿ ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರರ ನೇತೃತ್ವದಲ್ಲಿ ಕಳೆದ ಹತ್ತಾರು ದಿನಗಳಿಂದ ಪಕ್ಷದೊಳಗೆ ಆಂತರಿಕ ಚರ್ಚೆ ನಡೆಸಿ ವ್ಯವಸ್ಥಿತವಾಗಿ ಜನರನ್ನು ತಲುಪಿ, ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಪ್ರತಿ ಜಿಲ್ಲೆಯಲ್ಲೂ ಐವರ ತಂಡ ರಚಿಸಲಾಗಿದೆ. ಪ್ರತಿ ತಂಡದಲ್ಲಿ ಒಬ್ಬರು ವಕೀಲರೂ ಇದ್ದಾರೆ ಎಂದು ವಿವರಿಸಿದರು.