ಸಾರಾಂಶ
ಕೇಂದ್ರ ಸರ್ಕಾರ ‘ಸರಳೀಕೃತ ಜಿಎಸ್ಟಿ-2.0’ ವ್ಯವಸ್ಥೆಯನ್ನು ಜಾರಿ ಮಾಡಿರುವುದನ್ನು ಸ್ವಾಗತಿಸಿ ರಾಜ್ಯಾದ್ಯಂತ ಬಿಜೆಪಿ ಕಾರ್ಯಕರ್ತರು ಸೋಮವಾರ ಸಂಭ್ರಮಾಚರಣೆ ನಡೆಸಿದರು.
ಕನ್ನಡಪ್ರಭ ವಾರ್ತೆ ಬೆಂಗಳೂರುಕೇಂದ್ರ ಸರ್ಕಾರ ‘ಸರಳೀಕೃತ ಜಿಎಸ್ಟಿ-2.0’ ವ್ಯವಸ್ಥೆಯನ್ನು ಜಾರಿ ಮಾಡಿರುವುದನ್ನು ಸ್ವಾಗತಿಸಿ ರಾಜ್ಯಾದ್ಯಂತ ಬಿಜೆಪಿ ಕಾರ್ಯಕರ್ತರು ಸೋಮವಾರ ಸಂಭ್ರಮಾಚರಣೆ ನಡೆಸಿದರು.
ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್ ನೇತೃತ್ವದಲ್ಲಿ ಬೆಂಗಳೂರಿನ ಮಲ್ಲೇಶ್ವರಂನಲ್ಲಿನ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದ ಮುಂಭಾಗದಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಿದರು. ಜಿಎಸ್ಟಿ ಸರಳೀಕರಣಗೊಳಿಸಿದ ಮೋದಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಜೈಕಾರ ಕೂಗಿದರು.ಶಿವಮೊಗ್ಗದ ಶಿವಪ್ಪನಾಯಕ ವೃತ್ತದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಸಂಭ್ರಮಾಚರಣೆ ನಡೆಸಲಾಯಿತು. ಗಾಂಧಿ ಬಜಾರ್‌ನಲ್ಲಿನ ವರ್ತಕರಿಗೆ ಜಿಎಸ್‌ಟಿ ಬಗ್ಗೆ ಮಾಹಿತಿ ನೀಡಿ, ಪ್ರಧಾನಿ ಮೋದಿ ಪರ ಘೋಷಣೆ ಕೂಗಿ ಸಂಭ್ರಮಾಚರಣೆ ನಡೆಸಲಾಯಿತು.
ಮಂಗಳೂರಲ್ಲಿ ಪಿವಿಎಸ್ ಬಳಿಯ ಬಿಜೆಪಿ ಜಿಲ್ಲಾ ಕಚೇರಿ ಮುಂಭಾಗದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ನೇತೃತ್ವದಲ್ಲಿ ಸಂಭ್ರಮಾಚರಣೆ ನಡೆಯಿತು.ವಿಜಯಪುರದಲ್ಲಿ ಜೀವವಿಮಾ ನಿಗಮದ ಮುಖ್ಯ ಕಚೇರಿಯಲ್ಲಿ ನಡೆದ ಸಂಭ್ರಮಾಚರಣೆಯಲ್ಲಿ ಎಲ್‌ಐಸಿ ಪ್ರತಿನಿಧಿಗಳು ಕೂಡ ಪಾಲ್ಗೊಂಡಿದ್ದರು. ಬಳ್ಳಾರಿಯಲ್ಲಿ ಬೆಂಗಳೂರು ರಸ್ತೆಯ ಬ್ರೂಸ್‌ಪೇಟೆ ವೃತ್ತದಲ್ಲಿ ನಡೆದ ಸಂಭ್ರಮಾಚರಣೆಯಲ್ಲಿ ಜಿಲ್ಲಾಧ್ಯಕ್ಷ ಅನಿಲಕುಮಾರ್ ಮೊಕ, ಮಾಜಿ ಶಾಸಕ ಜಿ.ಸೋಮಶೇಖರ್ ರೆಡ್ಡಿ ಮತ್ತಿತರರು ಪಾಲ್ಗೊಂಡಿದ್ದರು.
ಇದೇ ವೇಳೆ, ಹುಬ್ಬಳ್ಳಿ, ಬಾಗಲಕೋಟೆ, ಕಲಬುರಗಿ, ಬೀದರ್, ಬೆಳಗಾವಿ, ರಾಯಚೂರು, ಮೈಸೂರು, ಮಂಡ್ಯ ಸೇರಿ ರಾಜ್ಯದ ಇತರೆಡೆಯೂ ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ ನಡೆಯಿತು.