ಸಾರಾಂಶ
ಬೆಂಗಳೂರು ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರನ್ ಆತ್ಮಹತ್ಯೆ ಪ್ರಕರಣದಲ್ಲಿ ಪರಿಶಿಷ್ಟ ಕಲ್ಯಾಣ ಸಚಿವರ ತಲೆದಂಡಕ್ಕೆ ಪಟ್ಟು ಹಿಡಿದಿರುವ ಬಿಜೆಪಿ ಮುಖಂಡರು, ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಜೂ.6ರ ಗಡುವು ನೀಡಿದ್ದಾರೆ. ಒಂದು ವೇಳೆ ರಾಜೀನಾಮೆ ನೀಡದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸುವ ಎಚ್ಚರಿಕೆಯನ್ನೂ ಕೊಟ್ಟಿದ್ದಾರೆ. ಇದೇ ವೇಳೆ, ಮುಖ್ಯಮಂತ್ರಿ ಸಿದ್ದರಾಮಯ್ಯ ನಿವಾಸಕ್ಕೆ ಗುರುವಾರ ಮುತ್ತಿಗೆ ಹಾಕಲೂ ಯತ್ನಿಸಿರುವ ಬಿಜೆಪಿ ಕಾರ್ಯಕರ್ತರು, ಮುಖಂಡರು ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸುವಂತೆ ಆಗ್ರಹಿಸಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಪ್ರತಿಪಕ್ಷ ನಾಯಕ ಆರ್.ಅಶೋಕ್, ಮಾಜಿ ಸಿಎಂ ಬೊಮ್ಮಾಯಿ, ಮುಖಂಡರಾದ ಡಾ.ಸಿ.ಎನ್.ಅಶ್ವತ್ಥ ನಾರಾಯಣ್ ಮತ್ತಿತರರು ಚಂದ್ರಶೇಖರನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕಾಂಗ್ರೆಸ್ ಹೈಕಮಾಂಡ್ ಕರ್ನಾಟಕವನ್ನು ಎಟಿಎಂನಂತೆ ಬಳಸಿಕೊಳ್ಳುತ್ತಿದೆ ಎಂದು ಕಿಡಿಕಾರಿದ್ದಾರೆ.ಚುನಾವಣೆ ವೇಳೆ ವರ್ಗಾವಣೆ:
ರಾಜ್ಯ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂಬುದಕ್ಕೆ ಚಂದ್ರಶೇಖರನ್ ಆತ್ಮಹತ್ಯೆ ಪ್ರಕರಣವೇ ಉತ್ತಮ ಉದಾಹರಣೆ. ವಾಲ್ಮೀಕಿ ನಿಗಮದಲ್ಲಿ ಕೋಟ್ಯಂತರ ರುಪಾಯಿ ಅವ್ಯವಹಾರವಾಗಿದೆ. ಸುಮಾರು 25 ಕೋಟಿ ಹಣವನ್ನು ಪಕ್ಕದ ರಾಜ್ಯಕ್ಕೆ ವರ್ಗಾವಣೆ ಮಾಡಲಾಗಿದೆ. ಇದಕ್ಕಾಗಿ ಹೊಸ ಅಕೌಂಟ್ ತೆರೆಯಲಾಗಿದೆ. ಕಾಂಗ್ರೆಸ್ ಸರ್ಕಾರ ಚುನಾವಣೆಗಾಗಿ ಕರ್ನಾಟಕವನ್ನು ಎಟಿಎಂ ರೀತಿ ಬಳಸುತ್ತಿದೆ. ಚುನಾವಣೆ ಸಂದರ್ಭದಲ್ಲಿ ಖಾತೆ ತೆರೆದು ಹೊರರಾಜ್ಯಕ್ಕೆ ಹಣ ಹೋಗಿದೆ. ಪ್ರಕರಣಕ್ಕೆ ಸಂಬಂಧಿಸಿ ಸಚಿವ ನಾಗೇಂದ್ರ ರಾಜೀನಾಮೆ ನೀಡಬೇಕು, ಸರ್ಕಾರ ಭಂಡತನ ಬಿಟ್ಟು ಚಂದ್ರಶೇಖರನ್ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ.
ಬೀದಿಗಿಳಿತೇವೆ:
ಇದೇ ವೇಳೆ ಸಚಿವ ನಾಗೇಂದ್ರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡದಿದ್ದರೆ ದಲಿತರ ಹಣ ನುಂಗಿದ ಕಾಂಗ್ರೆಸ್ ಎಂಬ ಬ್ಯಾನರ್‌ನಡಿ ರಾಜ್ಯಾದ್ಯಂತ ಬೀದಿಗಿಳಿದು ಪ್ರತಿಭಟನೆ ಮಾಡುತ್ತೇವೆ ಎಂದು ಎಚ್ಚರಿಸಿರುವ ಪ್ರತಿಪಕ್ಷ ನಾಯಕ ಆರ್.ಅಶೋಕ್, ರಾಮನ ಹೆಸರು ಕಂಡರೆ ಆಗದ ಕಾಂಗ್ರೆಸ್‌ಗೆ ಈಗ ವಾಲ್ಮೀಕಿ ಹೆಸರಿನ ನಿಗಮವನ್ನೂ ಕಂಡರಾಗುವುದಿಲ್ಲ. ಹೆಣ್ಣುಮಕ್ಕಳಿಗೆ ಸುರಕ್ಷತೆ ಗ್ಯಾರಂಟಿ ಇಲ್ಲವೆಂದು ಗೊತ್ತಿತ್ತು. ಈಗ ಅಧಿಕಾರಿಗಳಿಗೂ ಗ್ಯಾರಂಟಿ ಇಲ್ಲ ಎಂದು ಕಿಡಿಕಾರಿದ್ದಾರೆ.
ಅಧಿಕಾರಿ ಬರೆದಿರುವ ಡೆತ್‌ನೋಟಿನಲ್ಲಿ ಸಚಿವರ ಮೌಖಿಕ ಸೂಚನೆ ಎಂದು ಉಲ್ಲೇಖಿಸಿರುವ ಮೇಲೆ ಇನ್ನೇನು ಸಾಕ್ಷಿ ಬೇಕು? ಇಷ್ಟು ದೊಡ್ಡ ಹಗರಣ ದೊಡ್ಡವರ ಬಲ ಇಲ್ಲದೆ ನಡೆಯಲು ಸಾಧ್ಯವೇ? ನಿಗಮದ ವ್ಯವಸ್ಥಾಪಕ ನಿರ್ದೇಶಕ ಎಂ.ಡಿ.ಪದ್ಮನಾಭ್, ಲೆಕ್ಕಾಧಿಕಾರಿ ಪರಶುರಾಮ್, ಬ್ಯಾಂಕ್ ಅಧಿಕಾರಿ ಸ್ಮಿತಾ ಹೆಸರನ್ನೂ ಉಲ್ಲೇಖಿಸಿದ್ದಾರೆ. ಇದರ ಜೊತೆ ಎನ್.ನಾಗರಾಜ್ ಹೆಸರೂ ಪ್ರಸ್ತಾಪಿಸಲಾಗಿದೆ. ಹಾಗಿದ್ದರೆ ಎನ್.ನಾಗರಾಜ್ ಯಾರು? ಇವರಿಗೆ ಸಚಿವರಿಗೂ ಏನು ಸಂಬಂಧ? ಇಲ್ಲಿ ಒಂದು ಸಿಂಡಿಕೇಟ್ ರೂಪದಲ್ಲಿ ಹಗರಣ ನಡೆದಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಸಿಎಂ ಪೌರುಷ ಎಲ್ಲಿ ಹೋಯ್ತು?:
ಚಂದ್ರಶೇಖರನ್ ಆತ್ಮಹತ್ಯೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ನಿಲುವು ಸ್ಪಷ್ಟಪಡಿಸಬೇಕು. ಈ ರೀತಿಯ ಘಟನೆಗಳು ಆದಾಗ ಹಿಂದಿನ ಸರ್ಕಾರಗಳು ಹೇಗೆ ನಡೆದುಕೊಂಡಿವೆಯೋ ಅದೇ ರೀತಿ ನಡೆದುಕೊಳ್ಳಬೇಕು. ಸಚಿವ ನಾಗೇಂದ್ರ ರಾಜೀನಾಮೆ ಪಡೆಯಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಆಗ್ರಹಿಸಿದ್ದಾರೆ.
ಈ ಹಿಂದೆ ಗುತ್ತಿಗೆದಾರ ಸಾವಿನ ವಿಚಾರದಲ್ಲಿ ಸಚಿವರಾಗಿದ್ದ ಕೆ.ಎಸ್. ಈಶ್ವರಪ್ಪ ಅವರದ್ದು ತಪ್ಪಿರಲಿಲ್ಲ. ಆದರೂ ಈಶ್ವರಪ್ಪ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದರು. ಈಶ್ವರಪ್ಪ ವಿಚಾರದಲ್ಲಿ ಆಗ ವಿಪಕ್ಷ ನಾಯಕರಾಗಿದ್ದ ಸಿದ್ದರಾಮಯ್ಯ ತೋರಿಸಿದ ರೋಷಾವೇಷ ಈಗ ಏಕೆ ಕಾಣುತ್ತಿಲ್ಲ? ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇನ್ನು ಚಂದ್ರಶೇಖರನ್ ಆತ್ಮಹತ್ಯೆಗೆ ಸಂಬಂಧಿಸಿ ಸಚಿವ ನಾಗೇಂದ್ರ ರಾಜಿನಾಮೆ ನೀಡುವುದಷ್ಟೇ ಅಲ್ಲ, ಅವರ ಬಂಧನವೂ ಆಗಬೇಕು ಎಂದು ಪಟ್ಟುಹಿಡಿದಿರುವ ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ್, ಪ್ರಕರಣದ ನೈತಿಕ ಹೊಣೆ ಹೊತ್ತು ಹಣಕಾಸು ಖಾತೆಯ ಜವಾಬ್ದಾರಿ ಹೊತ್ತಿರುವ ಸಿಎಂ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.