ಸಾರಾಂಶ
ಕನ್ನಡಪ್ರಭ ವಾರ್ತೆ ಚಿಕ್ಕೋಡಿ
ಚಿಕ್ಕೋಡಿ ಪುರಸಭೆಯ ಎರಡನೇ ಅವಧಿಯ ಅಧ್ಯಕ್ಷರಾಗಿ ಬಿಜೆಪಿಯ ವೀಣಾ ಜಗದೀಶ ಕವಟಗಿಮಠ, ಉಪಾಧ್ಯಕ್ಷರಾಗಿ ಕಾಂಗ್ರೆಸ್‌ನ ಇರ್ಫಾನ್ ಬೇಪಾರಿ ಅವರು ಗುರವಾರ ಅವಿರೋಧವಾಗಿ ಆಯ್ಕೆಯಾದರು. ಈ ಮೂಲಕ ರಾಜಕೀಯ ಬದ್ಧವೈರಿಗಳಾಗಿದ್ದ ಬಿಜೆಪಿ ಮತ್ತು ಕಾಂಗ್ರೆಸ್ ಇಲ್ಲಿ ಆಡಳಿತಕ್ಕೆ ಒಂದಾಗಿರುವುದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.ತೀವ್ರ ಕುತೂಹಲ ಕೆರಳಿಸಿದ್ದ ಈ ಚುನಾವಣೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರು ಒಗ್ಗಟ್ಟಾಗಿ ಹೆಜ್ಜೆ ಹಾಕುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. 23 ಸದಸ್ಯ ಬಲ ಹೊಂದಿರುವ ಪುರಸಭೆಯಲ್ಲಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ತಲಾ ಒಂದೊಂದೇ ನಾಮಪತ್ರಗಳು ಸಲ್ಲಿಕೆಯಾಗಿದ್ದವು. ಹೀಗಾಗಿ ಚುನಾವಣಾಧಿಕಾರಿ, ತಹಶೀಲ್ದಾರ ಚಿದಂಬರ ಕುಲಕರ್ಣಿ ಅವಿರೋಧ ಆಯ್ಕೆಯನ್ನು ಘೋಷಿಸಿದರು.
20ನೇ ವಾರ್ಡ್‌ನ ವೀಣಾ ಕವಟಗಿಮಠ ಇದೇ ಮೊದಲ ಬಾರಿಗೆ ಚುನಾವಣೆಗೆ ಸ್ಪರ್ಧಿಸಿ ಬಿಜೆಪಿ ಅಭ್ಯರ್ಥಿಯಾಗಿ ಅಧ್ಯಕ್ಷರಾಗಿ ಆಯ್ಕೆಯಾದರು. 8ನೇ ವಾರ್ಡ್‌ನ ಇರ್ಫಾನ್ ಬೇಪಾರಿ ಕೂಡ ಕಾಂಗ್ರೆಸ್ಸಿನಿಂದ ಉಪಾಧ್ಯಕ್ಷರಾಗಿ ಆಯ್ಕೆಯಾದರು. ಮೊದಲ ಪ್ರಯತ್ನದಲ್ಲಿ ಅಧ್ಯಕ್ಷ-ಉಪಾಧ್ಯಕ್ಷ ಗದ್ದುಗೆ ಏರಿದ್ದು ವಿಶೇಷ.ಪುರಸಭೆಯಲ್ಲಿ ಒಟ್ಟು 23 ಸದಸ್ಯರ ಪೈಕಿ 13 ಬಿಜೆಪಿ ಸದಸ್ಯರು, 10 ಕಾಂಗ್ರೆಸ್ ಸದಸ್ಯರು ಇದ್ದಾರೆ. ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ-2 ಪ್ರಕಾಶ ಹುಕ್ಕೇರಿ, ಚಿಕ್ಕೋಡಿ-ಸದಲಗಾ ಶಾಸಕ ಗಣೇಶ ಹುಕ್ಕೇರಿ ಹಾಗೂ ಅಧ್ಯಕ್ಷರಾಗಿ ಆಯ್ಕೆಯಾಗಿರುವ ವೀಣಾ ಅವರ ಪತಿ, ಜಗದೀಶ ಕವಟಗಿಮಠ ಅವರ ತೆರೆಮರೆಯ ಕಸರತ್ತಿನಿಂದಾಗಿ ಕಾಂಗ್ರೆಸ್ ಮತ್ತು ಬಿಜೆಪಿ ಜಂಟಿಯಾಗಿ ಅಧಿಕಾರಕ್ಕೆ ಏರಿದವು.
ಪುರಸಭೆ ಮಾಜಿ ಅಧ್ಯಕ್ಷ ಹಾಗೂ ಕರ್ನಾಟಕ ಸಹಕಾರ ಮಹಾಮಂಡಳದ ಉಪಾಧ್ಯಕ್ಷ ಜಗದೀಶ ಕವಟಗಿಮಠ ಮಾತನಾಡಿ, ಚಿಕ್ಕೋಡಿ ಪಟ್ಟಣದ ಅಭಿವೃದ್ಧಿಗಾಗಿ ಪಕ್ಷಾತೀತವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಮಾಡಲಾಗಿದೆ ಎಂದರು.ಪುರಸಭೆ ಸದಸ್ಯರಾದ ಜಗದೀಶ ಕವಟಗಿಮಠ, ಪ್ರವೀಣ ಕಾಂಬಳೆ, ಸಂಜಯ ಕವಟಗಿಮಠ, ಶ್ಯಾಮ ರೇವಡೆ, ಅನೀಲ ಮಾನೆ, ತಾನಾಜಿ ಕದಮ, ರಾಮಾ ಮಾನೆ, ಸಂತೋಷ ಜೋಗಳೆ, ಬಾಬು ಮಿರ್ಜೆ ಸೇರಿದಂತೆ ಪುರಸಭೆಯ ಎಲ್ಲ ಮಹಿಳಾ ಸದಸ್ಯರು, ನಾಮನಿರ್ದೇಶನ ಸದಸ್ಯರು ಉಪಸ್ಥಿತರಿದ್ದರು.