ಸಾರಾಂಶ
ಕಾಂಗ್ರೆಸ್ ಕಚೇರಿಗೆ ಬಿಜೆಪಿ, ಸಿ.ಟಿ.ರವಿ ಮನೆಗೆ ಕಾಂಗ್ರೆಸ್ ಮುತ್ತಿಗೆ ಯತ್ನ । ಪ್ರತಿಭಟನಕಾರರನ್ನು ವಶಕ್ಕೆ ಪಡೆದ ಪೊಲೀಸರು
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಕೇಂದ್ರ ಗೃಹ ಸಚಿವ ಅಮಿತ್ ಷಾ ಅವರ ಹೇಳಿಕೆಯನ್ನು ತಿರುಚಲಾಗಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರೆ, ಬೆಳಗಾವಿ ಅಧಿವೇಶನದಲ್ಲಿ ವಿಧಾನ ಪರಿಷತ್‌ನಲ್ಲಿ ಸಿ.ಟಿ.ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಪದ ಬಳಸಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಸಿ.ಟಿ.ರವಿ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿರುವ ಘಟನೆ ಗುರುವಾರ ನಡೆಯಿತು.
ಕಾಂಗ್ರೆಸ್, ಅಮಿತ್ ಷಾ ಅವರ ಹೇಳಿಕೆಯನ್ನು ತಿರುಚಿ ಸುಳ್ಳು ಆರೋಪ ಮಾಡುತ್ತಿದೆ. ರಾಹುಲ್ ಗಾಂಧಿ ಅವರು ಈ ಕುತಂತ್ರದ ರೂವಾರಿ ಯಾಗಿದ್ದಾರೆ. ಉದ್ದೇಶಪೂರ್ವಕವಾಗಿ ಅಮಿತ್ ಷಾ ವಿರುದ್ಧ ಸುಳ್ಳು ಆರೋಪ ಮಾಡಲಾಗುತ್ತಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ನಾಲ್ಕು ತಂಡಗಳಾಗಿ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಕಾಂಗ್ರೆಸ್ ಕಚೇರಿಗೆ ಬಿಗಿ ಬಂದೋಬಸ್ತ್ ಒದಗಿಸಿದ್ದರು. ಅಲ್ಲದೆ ಒಂದು ತಂಡವನ್ನು ಕಾಂಗ್ರೆಸ್ ಕಚೇರಿ ಎದುರು ಪೊಲೀಸರು ವಶಕ್ಕೆ ಪಡೆದರೆ, ಕೆಲವರನ್ನು ಕಾಂಗ್ರೆಸ್ ಕಚೇರಿಯಿಂದ ನೂರು ಮೀಟರ್ ದೂರದಲ್ಲೇ ಹಾಗೂ ಇನ್ನುಳಿದವರನ್ನು ಬಿಜೆಪಿ ಕಚೇರಿ ಸಮೀಪವೇ ವಶಕ್ಕೆ ಪಡೆದರು.
ಕೇಂದ್ರ ಗೃಹ ಮಂತ್ರಿ ಅಮಿತ್ ಷಾ ಅವರ ಹೇಳಿಕೆಯನ್ನು ಸಾಮಾಜಿಕ ಜಾಲತಾಣದಲ್ಲಿ ತುಂಡರಿಸಿ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಆರೋಪಿಸಿದ ಬಿಜೆಪಿ ಕಾರ್ಯಕರ್ತರು ದಾರಿಯುದ್ದಕ್ಕೂ ಗೃಹ ಮಂತ್ರಿಗಳ ವಿರುದ್ಧ ಕಾಂಗ್ರೆಸ್ ಷಡ್ಯಂತ್ರ ರೂಪಿಸಿದೆ ಎಂದು ಘೋಷಣೆ ಕೂಗಿದರು.ಈ ವೇಳೆ ಬಿಜೆಪಿ ಕಾರ್ಯಕರ್ತರು ರಾಹುಲ್ ಗಾಂಧಿ ಭಾವಚಿತ್ರವನ್ನು ಹಿಡಿದು ರಾಹುಲ್ ಕಳ್ಳ ಎಂದು ಘೋಷಣೆ ಕೂಗಿದರು. ಈ ನಡುವೆ ಮಹಿಳಾ ಬಿಜೆಪಿ ಕಾರ್ಯಕರ್ತರು ದಿಢೀರನೆ ಕಾಂಗ್ರೆಸ್ ಕಚೇರಿಯತ್ತ ಧಾವಿಸಿದ ಕೂಡಲೇ ಪೊಲೀಸರು ಮಹಿಳಾ ಕಾರ್ಯಕರ್ತರನ್ನು ರಸ್ತೆ ಮಧ್ಯೆಯೇ ತಡೆದು ವಶಕ್ಕೆ ಪಡೆದರು.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ರವೀಂದ್ರ ಬೆಳವಾಡಿ, ಬಿ. ರಾಜಪ್ಪ, ಹಿರೇಮಗಳೂರು ಪುಟ್ಟಸ್ವಾಮಿ, ಕುರುವಂಗಿ ವೆಂಕಟೇಶ್, ಪುಷ್ಪರಾಜ್, ಮಧುಕುಮಾರ್ ರಾಜ್ ಅರಸ್, ಸಂತೋಷ್ ಕೋಟ್ಯಾನ್, ಅಂಕಿತಾ, ಜಸಂತಾ ಅನಿಲ್‌ಕುಮಾರ್, ಚೈತ್ರಾ ಗೌಡ ಹಾಗೂ ಕಾರ್ಯಕರ್ತರು ಇದ್ದರು.--- ಬಾಕ್ಸ್ ---ಸಿ.ಟಿ.ರವಿ ಮನೆಗೆ ಮುತ್ತಿಗೆಬೆಳಗಾವಿ ಅಧಿವೇಶನದ ವೇಳೆ ವಿಧಾನ ಪರಿಷತ್‌ನಲ್ಲಿ ಸಿ.ಟಿ.ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಶಬ್ಧ ಬಳಸಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಚಿಕ್ಕಮಗಳೂರಿನ ಬಸವನಹಳ್ಳಿ ಮುಖ್ಯರಸ್ತೆಯಲ್ಲಿರುವ ಸಿ.ಟಿ.ರವಿ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ಗುರುವಾರ ಸಂಜೆ ಯತ್ನಿಸಿದರು. ಈ ವೇಳೆ ಪೊಲೀಸರು ಪ್ರತಿಭಟನಕಾರರನ್ನು ವಶಕ್ಕೆ ಪಡೆದು ಕೆಲ ಕಾಲದ ಬಳಿಕ ಬಿಡುಗಡೆ ಮಾಡಿದರು.ಮಹಿಳಾ ಸಚಿವರ ವಿರುದ್ಧ ಅವಾಚ್ಯ ಶಬ್ಧ ಬಳಕೆ ಮಾಡಿರುವ ಸಿ.ಟಿ.ರವಿ ಅವರನ್ನು ವಿಧಾನ ಪರಿಷತ್ ಸದಸ್ಯ ಸ್ಥಾನದಿಂದ ವಜಾಗೊಳಿಸುವುದು ಮಾತ್ರವಲ್ಲದೆ ಕೂಡಲೇ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿದರು.
ವಿಧಾನ ಪರಿಷತ್ ಅನ್ನು ಚಿಂತಕರ ಚಾವಡಿ ಎನ್ನಲಾಗುತ್ತದೆ. ಆದರೆ ನಾಲ್ಕು ಬಾರಿ ಶಾಸಕರಾಗಿ, ಸಚಿವರಾಗಿ ಕಾರ್ಯನಿರ್ವಹಿಸಿರುವ ಸಿ.ಟಿ.ರವಿ ಅವರು ಅವಾಚ್ಯ ಪದ ಬಳಕೆ ಮಾಡಿರುವುದು ಬಿಜೆಪಿ ಸಂಸ್ಕೃತಿ ತೋರಿಸುತ್ತದೆ. ಹೀಗಾಗಿ ಯಾವುದೇ ಕಾರಣಕ್ಕೂ ಸಿ.ಟಿ.ರವಿ ಅವರಿಗೆ ವಿಧಾನ ಪರಿಷತ್‌ನಲ್ಲಿ ಮಾತನಾಡಲು ಅವಕಾಶ ನೀಡಬಾರದು ಎಂದು ಒತ್ತಾಯಿಸಿದರು.ಸಿ.ಟಿ.ರವಿ ಅವರು ಮುಂದಿನ ದಿನಗಳಲ್ಲಿ ಇದೇ ರೀತಿ ವರ್ತನೆ ತೋರಿದಲ್ಲಿ ಮಹಿಳೆಯರೇ ಸಿ.ಟಿ.ರವಿ ಅವರಿಗೆ ತಕ್ಕ ಪಾಠ ಕಲಿಸಲಿದ್ದಾರೆ. ಬಿಜೆಪಿ ನಾಯಕರು ಸಿ.ಟಿ.ರವಿ ಅವರನ್ನು ಸಮರ್ಥಿಸಿಕೊಳ್ಳುತ್ತಿರುವುದು ಬಿಜೆಪಿ ಸಂಸ್ಕಾರ ತೋರುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮುತ್ತಿಗೆ ವೇಳೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಪಿ.ಮಂಜೇಗೌಡ, ಸಿಡಿಎ ಅಧ್ಯಕ್ಷ ಮಹಮದ್ ನಯಾಜ್, ಪ್ರಮುಖರಾದ ಮಧು, ನಾಗೇಶ್, ಅಕ್ಮಲ್ ಹಾಗೂ ಕಾರ್ಯಕರ್ತರು ಇದ್ದರು.19 ಕೆಸಿಕೆಎಂ 5ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.
19 ಕೆಸಿಕೆಎಂ 6ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.