ಸಾರಾಂಶ
ಕನ್ನಡಪ್ರಭ ವಾರ್ತೆ ಕಲಬುರಗಿ
ಬೆಳಗಾವಿಯಲ್ಲಿ ಇತ್ತೀಚೆಗೆ ನಡೆದ ಮಹಿಳೆಯ ಬೆತ್ತಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ನಗರದ ಸರ್ದಾರ್ ವಲ್ಲಭಭಾಯ್ ಪಟೇಲ್ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.ಸರ್ದಾರ್ ವಲ್ಲಭಭಾಯ್ ಪಟೇಲ್ ವೃತ್ತದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತ ಪಾದಯಾತ್ರೆ ಮೂಲಕ ಜಿಲ್ಲಾಧಿಕಾರಿ ಕಚೇರಿವರೆಗೂ ಆಗಮಿಸಿದ ಬಿಜೆಪಿ ಮುಖಂಡರು, ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಕಲಬುರಗಿ ಸಂಸದ ಡಾಕ್ಟರ್ ಉಮೇಶ್ ಜಾಧವ್, ಬೆಳಗಾವಿ ಘಟನೆ ಇಡೀ ದೇಶಕ್ಕೆ ನಾಚಿಕೆಗೇಡಿನ ಸಂಗತಿಯಾಗಿದೆ.ರಾಜ್ಯದಲ್ಲಿ ಮಹಿಳೆಯರಿಗೆ ಸುರಕ್ಷತೇ ಇಲ್ಲದಂತಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.ಬಿಜೆಪಿ ಗ್ರಾಮಾಂತರ ಅಧ್ಯಕ್ಷ ಶಿವರಾಜ್ ಪಾಟೀಲ್ ರದ್ದೇವಾಡಗಿ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದಲೂ ಮಕ್ಕಳ ಮೇಲೆ, ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣಗಳು ನಡೆಯುತ್ತಿದ್ದು, ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಮುಂಬರುವ ದಿನಗಳಲ್ಲಿ ಇಂತಹ ಪ್ರಕರಣಗಳು ಬೆಳಕಿಗೆ ಬಂದರೇ, ಸಚಿವರುಗಳಿಗ ಘೇರಾವ್ ಹಾಕಲಾಗುವುದು ಎಂದು ತಿಳಿಸಿದರು.
ವಿಧಾನ ಪರಿಷತ್ ಸದಸ್ಯ ಶಶೀಲ್ ನಮೋಶಿ ಮಾತನಾಡಿ, ಬೆಳಗಾವಿಯಲ್ಲಿ ಇಡೀ ರಾಜ್ಯವೇ ತಲೆ ತಗ್ಗಿಸುವ ಘಟನೆ ನಡೆದಿದ್ದು, ಮಹಿಳೆಯರ ಘನತೆಗೆ ಧಕ್ಕೆ ಉಂಟಾಗಿದೆ. ರಾಜ್ಯದಲ್ಲಿ ಮಹಿಳೆಯರಿಗೆ ಸುರಕ್ಷತೇ ಸಿಗಬೇಕು. ಹೆಣ್ಣು ಭ್ರೂಣ ಹತ್ಯೆಗಳು ನಿಲ್ಲಬೇಕು ಎಂದು ಆಗ್ರಹಿಸಿದರು.ಲಕ್ಷ್ಮೀ ಹೆಬ್ಬಾಳ್ಕರ್ ರಾಜಿನಾಮೆಗೆ ಆಗ್ರಹ: ಬೆಳಗಾವಿ ಘಟನೆ ಕುರಿತು ಮಹಿಳಾ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಯಾಕೇ ಮೌನ ವಹಿಸಿದ್ದಾರೆ.ಹೆಣ್ಣಿಗೆ ಕರ್ನಾಟಕದಲ್ಲಿ ಬೆಲೆ ಇಲ್ಲವಾಗಿದೆ.ರಾಜ್ಯದಲ್ಲಿ ಹೆಣ್ಣಿನ ಮೇಲೆ ಮೇಲಿಂದ ಮೇಲೆ ಅತ್ಯಾಚಾರಗಳು ನಡೆಯುತ್ತಲೇ ಇವೆ. ಹೀಗಾಗಿ ಲಕ್ಷ್ಮಿ ಹೆಬ್ಬಾಳ್ಕರ್ ಕೂಡಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಆಗ್ರಹಿಸಿದರು. ಮಹಿಳಾ ಮೋರ್ಚಾದ ಭಾಗೀರಥಿ ಗುನ್ನಾಪುರ್, ಬಿಜೆಪಿ ರಾಜ್ಯ ಉಪಾಧ್ಯಕ್ಷ ಮಾಲೀಕಯ್ಯಾ ಗುತ್ತೇದಾರ್, ಶಾಸಕ ಬಸವರಾಜ ಮತ್ತಿಮಡು, ಮಾಜಿ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ್, ಚಂದು ಪಾಟೀಲ್, ಶರಣಪ್ಪಾ ತಳವಾರ್, ಅಮರನಾಥ ಪಾಟೀಲ್, ಅಶೋಕ್ ಬಗಲಿ, ಉಮೇಶ್ ಪಾಟೀಲ್, ಸುರೇಶ್ ಸಜ್ಜನ್, ಗಿರಿರಾಜ್ ಯಳಮೇಲಿ, ಸುಧಾ ಹಾಲಕಾಯಿ,ಗೌರಿ ಚಿತಕೋಟಿ, ವಿಜಯಲಕ್ಷ್ಮಿ ಗೊಬ್ಬುರಕರ್, ಸವಿತಾ ಪಾಟೀಲ್, ಸಂತೋಷ ಹಾದಿಮನಿ ಸೇರಿದಂತೆ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.