ಧರಣಿ ವೇಳೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಹಣಕಾಸು ಅವ್ಯವಹಾರಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಕನ್ನಡಪ್ರಭ ವಾರ್ತೆ ಕಾರವಾರ
ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ಅವರನ್ನು ಸಂಪುಟದಿಂದ ವಜಾಗೊಳಿಸಬೇಕೆಂದು ಆಗ್ರಹಿಸಿ ಶಿರಸಿ-ಸಿದ್ದಾಪುರ ಕ್ಷೇತ್ರದ ಬಿಜೆಪಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು, ಜಿಲ್ಲಾ ರೈತ ಮೋರ್ಚಾ ಮತ್ತು ಅಲ್ಪಸಂಖ್ಯಾತರ ಮೋರ್ಚಾ ನೇತೃತ್ವದಲ್ಲಿ ಗುರುವಾರ ಕಾರವಾರದ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸಿದರು. ಇದರೊಂದಿಗೆ ಬಿಜೆಪಿಯ ಧರಣಿ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ.ಧರಣಿ ವೇಳೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಹಣಕಾಸು ಅವ್ಯವಹಾರಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಅನಂತಮೂರ್ತಿ ಹೆಗಡೆ ಮಾತನಾಡಿ, ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರನ್ 2024ರ ಮೇ 26ರಂದು ಆತ್ಮಹತ್ಯೆಗೂ ಮುನ್ನ ಬರೆದಿದ್ದಾರೆ ಎನ್ನಲಾದ ಡೆತ್‌ನೋಟ್‌ನಲ್ಲಿ ಸಚಿವ ನಾಗೇಂದ್ರ ಮೌಖಿಕವಾಗಿ ವಿವಿಧ ಖಾತೆಗಳಿಗೆ ಹಣ ವರ್ಗಾವಣೆ ಮಾಡುವಂತೆ ಆದೇಶಿಸಿದ್ದರು ಎಂಬ ಉಲ್ಲೇಖವಿದೆ ಎಂದು ಆರೋಪಿಸಿದರು. ಯಾವ ಖಾತೆಗಳಿಗೆ ಹಣ ವರ್ಗಾವಣೆಯಾಗಿದೆ ಎಂಬ ಮಾಹಿತಿಯನ್ನೂ ಅದರಲ್ಲಿ ದಾಖಲಿಸಲಾಗಿದೆ. ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಸಚಿವ ನಾಗೇಂದ್ರ ಅವರನ್ನು ಕೂಡಲೇ ಸಚಿವ ಸಂಪುಟದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದರು.ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಕೆ.ಜಿ. ನಾಯ್ಕ ಮಾತನಾಡಿದರು.
ಧರಣಿಯಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಚಂದ್ರು ಎಸಳೆ, ಶಿರಸಿ ನಗರ ಮಂಡಲ ಅಧ್ಯಕ್ಷ ಆನಂದ ಸಾಲೇರ, ಶಿರಸಿ ಬಿಜೆಪಿ ಗ್ರಾಮೀಣ ಅಧ್ಯಕ್ಷೆ ಉಷಾ ಹೆಗಡೆ, ಸಿದ್ದಾಪುರ ಮಂಡಲ ಅಧ್ಯಕ್ಷ ತಿಮ್ಮಪ್ಪ ಎಂ.ಕೆ., ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಜಾಯ್ಸನ್ ಡಿಸೋಜಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಶಾಂತ ನಾಯಕ, ಬಿಜೆಪಿ ಪ್ರಮುಖರಾದ ರಾಜು ಭಂಡಾರಿ, ಮಾಧ್ಯಮ ಸಹ ಸಂಚಾಲಕ ಕಿಶನ್ ಕಾಂಬಳೆ, ಕಾರವಾರ ನಗರ ಮಂಡಲ ಅಧ್ಯಕ್ಷ ನಾಗೇಶ ಕುರ್ಡೇಕರ, ರೈತ ಮೋರ್ಚಾ ಉಪಾಧ್ಯಕ್ಷರಾದ ಸುರೇಶ ನಾಯ್ಕ ಹಾಗೂ ಬಸಣ್ಣ ಕುರುಬಕಟ್ಟಿ, ಯಲ್ಲಾಪುರ ರೈತ ಮೋರ್ಚಾ ಅಧ್ಯಕ್ಷ ರಾಮಣ್ಣ ಚಿಕ್ಯಾನಮನೆ ಸೇರಿ ಶಿರಸಿ-ಸಿದ್ದಾಪುರ ಕ್ಷೇತ್ರದ ಹಾಗೂ ರೈತ ಮೋರ್ಚಾದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.