ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆಯ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ಅವರನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ನೇತೃತ್ವದ ಸಚಿವ ಸಂಪುಟದಿಂದ ತಕ್ಷಣ ಕೈಬಿಡುವಂತೆ ಆಗ್ರಹಿಸಿ ಬುಧವಾರ ಬಿಜೆಪಿ ಜಿಲ್ಲಾ ಘಟಕದ ನೇತೃತ್ವದಲ್ಲಿ ನಗರದ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಲಾಯಿತು.

ಹಾವೇರಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆಯ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ಅವರನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ನೇತೃತ್ವದ ಸಚಿವ ಸಂಪುಟದಿಂದ ತಕ್ಷಣ ಕೈಬಿಡುವಂತೆ ಆಗ್ರಹಿಸಿ ಬುಧವಾರ ಬಿಜೆಪಿ ಜಿಲ್ಲಾ ಘಟಕದ ನೇತೃತ್ವದಲ್ಲಿ ನಗರದ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಲಾಯಿತು.

ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಕಾರ್ಯಕರ್ತರು, ಸಚಿವ ನಾಗೇಂದ್ರ ವಜಾಕ್ಕೆ ಆಗ್ರಹಿಸಿದರು. ನಿಗಮದ ಹಣದ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಹೊಣೆಗಾರಿಕೆ ನಿಗದಿಪಡಿಸಿ, ಸಾರ್ವಜನಿಕರ ಹಣವನ್ನು ಸರ್ಕಾರದ ಬೊಕ್ಕಸಕ್ಕೆ ವಾಪಸ್ ತರಬೇಕು. ಪ್ರಕರಣಕ್ಕೆ ಸಂಬಂಧಿಸಿದ ಎಲ್ಲರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ನೇತೃತ್ವ ವಹಿಸಿದ್ದ ಬಿಜೆಪಿ ಜಿಲ್ಲಾಧ್ಯಕ್ಷ ವಿರೂಪಾಕ್ಷಪ್ಪ ಬಳ್ಳಾರಿ ಮಾತನಾಡಿ, ವಾಲ್ಮೀಕಿ ನಿಗಮದ ಹಣದ ಅಕ್ರಮ ವರ್ಗಾವಣೆ ರಾಜ್ಯದ ಜನರ ವಿಶ್ವಾಸಕ್ಕೆ ಧಕ್ಕೆ ತಂದಿರುವ ಗಂಭೀರ ಪ್ರಕರಣವಾಗಿದೆ. ಬಡವರು, ಪರಿಶಿಷ್ಟ ಪಂಗಡದ ಅಭಿವೃದ್ಧಿಗೆ ಬಳಕೆಯಾಗಬೇಕಿದ್ದ ಹಣ ದುರ್ಬಳಕೆಯಾಗಿರುವುದು ಖಂಡನೀಯ. ಪ್ರಕರಣದ ಸಂಪೂರ್ಣ ತನಿಖೆ ನಡೆಸಿ, ಅಕ್ರಮವಾಗಿ ವರ್ಗಾವಣೆಯಾದ ಪ್ರತಿಯೊಂದು ರುಪಾಯಿಯನ್ನೂ ಸರ್ಕಾರದ ಬೊಕ್ಕಸಕ್ಕೆ ಮರಳಿ ತರಬೇಕು. ಮುಖ್ಯವಾಗಿ ಪ್ರಕರಣದ ಮೂಲ ರೂವಾರಿಯಾಗಿರುವ ಬಿ. ನಾಗೇಂದ್ರ ಅವರನ್ನು ಡಿ.ಕೆ. ಶಿವಕುಮಾರ ಮತ್ತೆ ಸಂಪುಟಕ್ಕೆ ಸೇರಿಸಿಕೊಂಡಿದ್ದಾರೆ. ಹಣದ ಅಕ್ರಮ ಆರೋಪ ಎದುರಿಸುತ್ತಿರುವ ನಾಗೇಂದ್ರ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕೆಂದು ಆಗ್ರಹಿಸಿದರು.

ಮಾಜಿ ಶಾಸಕ ಶಿವರಾಜ ಸಜ್ಜನರ ಮಾತನಾಡಿ, ಜನರ ಕಲ್ಯಾಣಕ್ಕಾಗಿ ಮೀಸಲಿಟ್ಟ ಹಣದ ದುರ್ಬಳಕೆ ನಡೆದಿರುವ ಆರೋಪಗಳು ಸರ್ಕಾರದ ಆಡಳಿತ ವೈಖರಿಯನ್ನೇ ಪ್ರಶ್ನಿಸುವಂತಿವೆ. ನೈತಿಕ ಹೊಣೆ ಹೊತ್ತು ಬಿ. ನಾಗೇಂದ್ರ ಅವರು ರಾಜೀನಾಮೆ ನೀಡಬೇಕು. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ನೈತಿಕತೆ ಹಾಗೂ ಮಾನ-ಮರ್ಯಾದೆ ಇದ್ದರೆ ಕೂಡಲೇ ಅವರನ್ನು ಸಚಿವ ಸಂಪುಟದಿಂದ ಕೈಬಿಡಬೇಕು ಎಂದು ಆಗ್ರಹಿಸಿದರು.

ಮುಖಂಡ ಗವಿಸಿದ್ದಪ್ಪ ದ್ಯಾಮಣ್ಣವರ ಮಾತನಾಡಿ, ಪರಿಶಿಷ್ಟ ಪಂಗಡದ ಜನರ ಅಭಿವೃದ್ಧಿಗೆ ಮೀಸಲಾದ ಹಣ ಯಾವುದೇ ಕಾರಣಕ್ಕೂ ಬೇರೆ ಉದ್ದೇಶಕ್ಕೆ ಬಳಕೆಯಾಗಬಾರದು. ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವುದಾಗಿ ಹೇಳುವ ಸರ್ಕಾರ ಆರೋಪಗಳ ಬಗ್ಗೆ ಜನರಿಗೆ ಸ್ಪಷ್ಟ ಉತ್ತರ ನೀಡಬೇಕು. ಹಣ ವಾಪಸ್ ಪಡೆದು ಅರ್ಹ ಫಲಾನುಭವಿಗಳಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಶಹರ ಬಿಜೆಪಿ ಅಧ್ಯಕ್ಷ ಕಿರಣ್ ಕೊಳ್ಳಿ, ಗ್ರಾಮೀಣ ಅಧ್ಯಕ್ಷ ಮಾರುತಿ ಗೊರವರ, ಬಸವರಾಜ ಕೋಳಿವಾಡ, ರೈತ ಮೋರ್ಚಾ ಉಪಾಧ್ಯಕ್ಷ ಮೃತ್ಯುಂಜಯ ಮುಷ್ಠಿ, ಸಂತೋಷ ಆಲದಕಟ್ಟಿ, ನೀಲಪ್ಪ ಚಾವಡಿ, ನಿರಂಜನ ಹೇರೂರ, ನಂಜುಂಡೇಶ ಕಳ್ಳೇರ, ಕಿರಣಕುಮಾರ ಕೋಣನವರ, ವಿಜಯಕುಮಾರ ಚಿನ್ನಿಕಟ್ಟಿ, ಬಸವರಾಜ ಕಳಸೂರ, ಅಲ್ಲಾಭಕ್ಷ ತಿಮ್ಮಾಪುರ, ಸಾದಿಕ ಮುಜಾವರ, ಶಿವಯೋಗಿ ಹುಲಿಕಂತಿಮಠ, ನಾಗರಾಜ ಹಾರಿಗೋಲ, ಮಹಾಲಿಂಗಸ್ವಾಮಿ ಹಿರೇಮಠ, ಫಕ್ಕೀರೇಶ ಹಾವನೂರ, ಬಸವರಾಜ ಡೊಂಕನವರ, ಜಯಣ್ಣ ಶೆಟ್ಟರ ಸೇರಿದಂತೆ ಪಕ್ಷದ ಅನೇಕ ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.