ವಾಲ್ಮೀಕಿ ಅಭಿವೃದ್ಧಿ ನಿಗಮದ ಪ್ರಕರಣದಲ್ಲಿ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆ ಪಡೆಯುವವರೆಗೆ ಬಿಜೆಪಿ ಹೋರಾಟ ಮುಂದುವರಿಯಲಿದೆ ಎಂದುನ ಖೂಬಾ ಹೇಳಿದರು.

ಕನ್ನಡಪ್ರಭ ವಾರ್ತೆ ಬೀದರ್

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣದ ಅಕ್ರಮ ವರ್ಗಾವಣೆ ಹಾಗೂ ಅವ್ಯವಹಾರ ಪ್ರಕರಣ ಖಂಡಿಸಿ, ಪ್ರಕರಣದ ನೈತಿಕ ಹೊಣೆ ಹೊತ್ತು ಸಚಿವ ಬಿ. ನಾಗೇಂದ್ರ ಅವರು ರಾಜೀನಾಮೆ ನೀಡಬೆಕೇಂದು ಆಗ್ರಹಿಸಿ ಬಿಜೆಪಿ ಜಿಲ್ಲಾ ಘಟಕದಿಂದ ಮಂಗಳವಾರ ನಗರದ ಡಾ.ಅಂಬೇಡ್ಕರ್ ವೃತ್ತದ ಬಳಿಯ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸಿದರು.

ಈ ಸಂದರ್ಭದಲ್ಲಿ ಮಾಜಿ ಕೇಂದ್ರ ಸಚಿವ ಭಗವಂತ ಖೂಬಾ ಮಾತನಾಡಿ, ವಾಲ್ಮೀಕಿ ಅಭಿವೃದ್ಧಿ ನಿಗಮವು ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ಇರುವ ಪ್ರಮುಖ ಸಂಸ್ಥೆಯಾಗಿದ್ದು, ನಿಗಮದ ಕೋಟ್ಯಂತರ ರೂಪಾಯಿ ಹಣವನ್ನು ಅಕ್ರಮವಾಗಿ ವಿವಿಧ ಖಾತೆಗಳಿಗೆ ವರ್ಗಾವಣೆ ಮಾಡಿರುವ ಆರೋಪ ಅತ್ಯಂತ ಗಂಭೀರವಾಗಿದೆ. ಹಿಂದುಳಿದ ವರ್ಗಗಳಿಗೆ ಕಾಂಗ್ರೆಸ್ ಸರ್ಕಾರ ಅನ್ಯಾಯ ಮಾಡಿರುವುದು ಸ್ಪಷ್ಟವಾಗುತ್ತದೆ ಎಂದು ಆರೋಪಿಸಿದರು.

ಪ್ರಕರಣ ಕುರಿತು ಡಿಕೆಶಿ ನೇತೃತ್ವದ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿದೆ. ಪ್ರಕರಣದ ನೈತಿಕ ಹೊಣೆ ಹೊತ್ತು ಬಿ. ನಾಗೇಂದ್ರ ಅವರು ರಾಜೀನಾಮೆ ನೀಡಬೇಕು. ಪ್ರಕರಣದಲ್ಲಿ ಭಾಗಿಯಾಗಿರುವ ಪ್ರತಿಯೊಬ್ಬರ ವಿರುದ್ಧವೂ ಕಠಿಣ ಕಾನೂನು ಕ್ರಮ ಕೈಗೊಂಡು, ಸಾರ್ವಜನಿಕರ ಹಣವನ್ನು ಸಂಪೂರ್ಣವಾಗಿ ವಾಪಸ್ ಪಡೆಯಬೇಕೆಂದು ಆಗ್ರಹಿಸಿದರು.

ಕಾಂಗ್ರೆಸ್ ಸರ್ಕಾರ ಜನರ ಮೂಲಭೂತ ಸಮಸ್ಯೆಗಳನ್ನು ಬದಿಗೊತ್ತಿ ಸಂಘ-ಸಂಸ್ಥೆಗಳ ವಿಚಾರವನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡುತ್ತಿದೆ ರಾಜ್ಯದ ಪ್ರತಿಯೊಂದು ಜಿಲ್ಲಾ ಕೇಂದ್ರದಲ್ಲಿಯೂ ಪ್ರತಿಭಟನೆ ನಡೆಸಿ ಜನಜಾಗೃತಿ ಮೂಡಿಸಲಾಗುವುದು ಎಂದರು.

ವಾಲ್ಮೀಕಿ ಅಭಿವೃದ್ಧಿ ನಿಗಮದ ಪ್ರಕರಣದಲ್ಲಿ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆ ಪಡೆಯುವವರೆಗೆ ಬಿಜೆಪಿ ಹೋರಾಟ ಮುಂದುವರಿಯಲಿದೆ. ಮುಂದಿನ ದಿನಗಳಲ್ಲಿ ಪ್ರತಿಭಟನೆಯ ಸ್ವರೂಪ ಮತ್ತಷ್ಟು ವಿಸ್ತರಿಸಿ ರಾಜ್ಯಾದ್ಯಂತ ದೊಡ್ಡ ಮಟ್ಟದ ಹೋರಾಟ ನಡೆಸಲಾಗುವುದು ಎಂದು ಖೂಬಾ ಸ್ಪಷ್ಟಪಡಿಸಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ್ ಮಾತನಾಡಿ, ಬಿ. ನಾಗೇಂದ್ರ ಅವರ ರಾಜೀನಾಮೆ ಪಡೆಯುವವರೆಗೆ ಬಿಜೆಪಿ ಹೋರಾಟ ನಿಲ್ಲುವುದಿಲ್ಲ. ವಿಧಾನಸಭೆಯ ಒಳಗೆ ಹಾಗೂ ಹೊರಗೆಯು ಹೋರಾಟ ಮುಂದುವರಿಯಲಿದೆ ಎಂದರು. ಧರಣಿ ಸತ್ಯಾಗ್ರಹದಲ್ಲಿ ಮಾಜಿ ಸಭಾಪತಿ ರಘುನಾಥರಾವ ಮಲ್ಕಾಪುರೆ, ಪೀರಪ್ಪಾ ಯರನಳ್ಳಿ, ವಿಜಯಕುಮಾರ ಪಾಟೀಲ್ ಗಾದಗಿ, ಶಶಿಧರ ಹೊಸಳ್ಳಿ, ಬಾಬುವಾಲಿ, ಶ್ರೀನಿವಾಸ ಚೌದ್ರಿ, ಈಶ್ವರಸಿಂಗ ಠಾಕೂರ, ಗುರುನಾಥ ಜಾಂತಿಕರ್, ರಾಜಶೇಖರ ನಾಗಮೂರ್ತಿ, ಉಲ್ಲಾಸಿನಿ ಮುದಾಳೆ, ಲುಂಬಣಿ ಗೌತಮ ರಾಜಕುಮಾರ ನೇಮತಾಬಾದ, ದೀಪಕ ಗಾದಗೆ, ರಾಜು ಚಿದ್ರಿ, ಅಶೋಕ ಹೊಕ್ರಾಣೆ, ಮಹೇಶ ಪಾಲಂ, ಮಹೇಶ್ವರ ಸ್ವಾಮಿ, ರಾಜು ಪೂಜಾರಿ ಸೇರಿದಂತೆ ಬಿಜೆಪಿ ಜಿಲ್ಲಾ ಹಾಗೂ ಮಂಡಲ ಪದಾಧಿಕಾರಿಗಳು, ಜನಪ್ರತಿನಿಧಿಗಳು, ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿದರು.