ಹಣದ ವರ್ಗಾವಣೆ, ಖಾತೆಗಳ ನಿರ್ವಹಣೆ ಹಾಗೂ ಅದರಲ್ಲಿ ಭಾಗಿಯಾಗಿರುವ ವ್ಯಕ್ತಿಗಳು ಮತ್ತು ಅಧಿಕಾರಿಗಳ ಪಾತ್ರವನ್ನು ತನಿಖಾ ಸಂಸ್ಥೆಗಳು ಬಹಿರಂಗಪಡಿಸಬೇಕು ಎಂದು ಆಗ್ರಹಿಸಿದರು. ವಾಲ್ಮೀಕಿ ನಿಗಮದ ಹಣದ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ತನಿಖಾ ಸಂಸ್ಥೆಗಳು ಈಗಾಗಲೇ ಕ್ರಮ ಕೈಗೊಂಡಿದ್ದು, ಹಣವನ್ನು ವಶಪಡಿಸಿಕೊಂಡಿರುವ ವಿಚಾರವೂ ಸಾರ್ವಜನಿಕವಾಗಿ ಚರ್ಚೆಯಾಗಿದೆ. ಹೀಗಾಗಿ ಪ್ರಕರಣವನ್ನು ಯಾವುದೇ ರಾಜಕೀಯ ಒತ್ತಡವಿಲ್ಲದೆ ತನಿಖೆ ನಡೆಸಿ, ಅಕ್ರಮದ ಹಿಂದಿರುವ ಸಂಪೂರ್ಣ ಜಾಲವನ್ನು ಪತ್ತೆಹಚ್ಚಬೇಕು ಎಂದು ಬಿಜೆಪಿ ಮುಖಂಡರು ಒತ್ತಾಯಿಸಿದರು.

ಕನ್ನಡಪ್ರಭ ವಾರ್ತೆ ಹಾಸನ

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮವಾಗಿ ವರ್ಗಾವಣೆಯಾಗಿರುವ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿ, ಸಂಪೂರ್ಣ ತನಿಖೆ ನಡೆಸಬೇಕು. ಪ್ರಕರಣದ ನೈತಿಕ ಹೊಣೆ ಹೊತ್ತು ಸಚಿವ ಬಿ. ನಾಗೇಂದ್ರ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ವತಿಯಿಂದ ಬುಧವಾರ ನಗರದಲ್ಲಿ ಬೃಹತ್ ಧರಣಿ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಟೆಂಟ್ ಹಾಕಿ ಬೆಳಗ್ಗೆಯಿಂದ ಸಂಜೆವರೆಗೆ ಧರಣಿ ನಡೆಸಿದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಇದೇ ಸಂದರ್ಭದಲ್ಲಿ ಇತ್ತೀಚೆಗೆ ನಿಧನರಾದ ಮಾಜಿ ಸಚಿವ ಬಿ.ಸಿ. ನಾಗೇಶ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿ, ಅವರ ಸಾರ್ವಜನಿಕ ಸೇವೆಯನ್ನು ಸ್ಮರಿಸಲಾಯಿತು. ಧರಣಿಯನ್ನುದ್ದೇಶಿಸಿ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಅಮಿತ್‌ಶೆಟ್ಟ ಮಾತನಾಡಿ, ವಾಲ್ಮೀಕಿ ನಿಗಮದ ಹಣದ ಅಕ್ರಮ ವರ್ಗಾವಣೆ ಕೇವಲ ಹಣಕಾಸಿನ ಅವ್ಯವಹಾರದ ವಿಚಾರವಲ್ಲ. ಬಡವರು ಮತ್ತು ಹಿಂದುಳಿದ ಸಮುದಾಯಗಳ ಅಭಿವೃದ್ಧಿಗೆ ಮೀಸಲಾಗಿದ್ದ ಹಣವನ್ನು ದುರ್ಬಳಕೆ ಮಾಡಿರುವ ಆರೋಪವಾಗಿರುವುದರಿಂದ ಸರ್ಕಾರ ಇದನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿದರು. ನಿಗಮದ ಹಣವನ್ನು ಬೇರೆ ರಾಜ್ಯಗಳಲ್ಲಿನ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗಿದೆ ಎಂಬ ಆರೋಪಗಳು ಕೇಳಿಬಂದಿವೆ. ವಿಶೇಷವಾಗಿ ತೆಲಂಗಾಣದ ವಿವಿಧ ಬ್ಯಾಂಕ್‌ಗಳಲ್ಲಿ ಹಣ ಇಡಲಾಗಿದೆ ಎಂಬ ಆರೋಪದ ಕುರಿತು ಸಮಗ್ರ ತನಿಖೆ ನಡೆಯಬೇಕು. ಹಣದ ವರ್ಗಾವಣೆ, ಖಾತೆಗಳ ನಿರ್ವಹಣೆ ಹಾಗೂ ಅದರಲ್ಲಿ ಭಾಗಿಯಾಗಿರುವ ವ್ಯಕ್ತಿಗಳು ಮತ್ತು ಅಧಿಕಾರಿಗಳ ಪಾತ್ರವನ್ನು ತನಿಖಾ ಸಂಸ್ಥೆಗಳು ಬಹಿರಂಗಪಡಿಸಬೇಕು ಎಂದು ಆಗ್ರಹಿಸಿದರು. ವಾಲ್ಮೀಕಿ ನಿಗಮದ ಹಣದ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ತನಿಖಾ ಸಂಸ್ಥೆಗಳು ಈಗಾಗಲೇ ಕ್ರಮ ಕೈಗೊಂಡಿದ್ದು, ಹಣವನ್ನು ವಶಪಡಿಸಿಕೊಂಡಿರುವ ವಿಚಾರವೂ ಸಾರ್ವಜನಿಕವಾಗಿ ಚರ್ಚೆಯಾಗಿದೆ. ಹೀಗಾಗಿ ಪ್ರಕರಣವನ್ನು ಯಾವುದೇ ರಾಜಕೀಯ ಒತ್ತಡವಿಲ್ಲದೆ ತನಿಖೆ ನಡೆಸಿ, ಅಕ್ರಮದ ಹಿಂದಿರುವ ಸಂಪೂರ್ಣ ಜಾಲವನ್ನು ಪತ್ತೆಹಚ್ಚಬೇಕು ಎಂದು ಬಿಜೆಪಿ ಮುಖಂಡರು ಒತ್ತಾಯಿಸಿದರು.

ಹಗರಣದ ಹಣದ ಮೊತ್ತದ ವಿಚಾರದಲ್ಲಿಯೂ ಗೊಂದಲಕಾರಿ ಹೇಳಿಕೆಗಳು ಬಂದಿವೆ. ಈ ಕುರಿತು ಸರ್ಕಾರವೇ ಸ್ಪಷ್ಟ ದಾಖಲೆಗಳನ್ನು ಜನರ ಮುಂದಿಡಬೇಕು. ಎಷ್ಟು ಹಣ ವರ್ಗಾವಣೆಯಾಯಿತು, ಯಾರ ಖಾತೆಗಳಿಗೆ ಹೋಯಿತು, ಎಷ್ಟು ಹಣ ವಾಪಸ್ ಪಡೆಯಲಾಗಿದೆ ಹಾಗೂ ಎಷ್ಟು ಹಣ ಇನ್ನೂ ಪತ್ತೆಯಾಗಬೇಕಿದೆ ಎಂಬುದನ್ನು ಬಹಿರಂಗಪಡಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಬಡವರು ಹಾಗೂ ಜನಸಾಮಾನ್ಯರಿಗೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿದ ಬಿಜೆಪಿ ಮುಖಂಡರು, ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆ ಇರಬೇಕು ಎಂದು ಹೇಳಿದರು. ಸಮಾಜದ ದುರ್ಬಲ ವರ್ಗಗಳ ಅಭಿವೃದ್ಧಿಗಾಗಿ ಮೀಸಲಿಟ್ಟ ಹಣವನ್ನು ಯಾವುದೇ ಕಾರಣಕ್ಕೂ ದುರ್ಬಳಕೆ ಮಾಡಬಾರದು. ಇಂತಹ ಪ್ರಕರಣಗಳು ಮರುಕಳಿಸದಂತೆ ಹಣಕಾಸು ನಿರ್ವಹಣೆಯಲ್ಲಿ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತರಬೇಕು. ತಪ್ಪಿತಸ್ಥರು ಯಾರೇ ಆಗಿದ್ದರೂ ಕಾನೂನಿನ ಮುಂದೆ ಸಮಾನವಾಗಿ ಕ್ರಮ ಎದುರಿಸಬೇಕು ಎಂದು ಒತ್ತಾಯಿಸಿದರು. ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿ, ಪಾರದರ್ಶಕ ಆಡಳಿತ ನೀಡಿ’ ಎಂದು ಘೋಷಣೆ ಕೂಗಿದ ಕಾರ್ಯಕರ್ತರು, ರಾಜ್ಯ ಸರ್ಕಾರ ಜನರ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದರು.ಧರಣಿಯಲ್ಲಿ ಹುಡಾ ಮಾಜಿ ಅಧ್ಯಕ್ಷ ನವಿಲೆ ಅಣ್ಣಪ್ಪ, ಅಧ್ಯಕ್ಷ ನಾಗೇಂದ್ರ, ನಗರಸಭೆ ಮಾಜಿ ಅಧ್ಯಕ್ಷ ಆರ್. ಮೋಹನ್, ರೈತ ಮೋರ್ಚಾ ಅಧ್ಯಕ್ಷ ಬಿ. ಎಚ್. ನಾರಾಯಣಗೌಡ, ವಕೀಲ ಶ್ರೀಕಾಂತ್ ಚೆನ್ನಂಗಿಹಳ್ಳಿ, ವೇದಾವತಿ, ರಾಜಕುಮಾರ್‌, ಗಿರೀಶ್, ರಾಜೀವ್, ಮಹೇಶ್ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.