ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ ಬಿಡುಗಡೆಗೆ ಬಿಜೆಪಿ ಆಗ್ರಹ

| Published : Feb 07 2024, 01:47 AM IST

ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ ಬಿಡುಗಡೆಗೆ ಬಿಜೆಪಿ ಆಗ್ರಹ
Share this Article
  • FB
  • TW
  • Linkdin
  • Email

ಸಾರಾಂಶ

ಯಡಿಯೂಪ್ಪ ಮುಖ್ಯಮಂತ್ರಿಯಾಗಿದ್ದಾಗ ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ ನೀಡಿದ್ದರು. ಬಿಜೆಪಿ ಆಡಳಿತದಲ್ಲಿ ೨೬ ಲಕ್ಷ ಗ್ರಾಮೀಣ ರೈತರಿಂದ ಪತಿನಿತ್ಯ ೮೦ ರಿಂದ ೮೫ ಲಕ್ಷ ಲೀ. ಹಾಲನ್ನು ಸಂಗ್ರಹಿಸಲಾಗುತ್ತಿತ್ತು. ಸರ್ಕಾರ ಬಾಕಿ ಉಳಿಸಿಕೊಂಡಿರುವುದರಿಂದ ರಾಜ್ಯದಲ್ಲಿ ಪ್ರತಿನಿತ್ಯ ೧೦ ಲಕ್ಷ ಲೀ.ನಷ್ಟು ಹಾಲಿನ ಉತ್ಪಾದನೆ ಕುಸಿದಿದೆ. ಈ ಸರ್ಕಾರಕ್ಕೆ ರೈತರ ಬಗ್ಗೆ ಕಾಳಜಿ ಇದ್ದರೆ ಪ್ರೋತ್ಸಾಹ ಧನವನ್ನು ಕೂಡಲೇ ಬಿಡುಗಡೆ ಮಾಡಬೇಕು.

ಕನ್ನಡಪ್ರಭ ವಾರ್ತೆ ಮಂಡ್ಯ ಹಾಲು ಉತ್ಪಾದಕರಿಗೆ ೭೧೬ ಕೋಟಿ ರು. ಪ್ರೋತ್ಸಾಹ ಧನ ಬಾಕಿ ಉಳಿಸಿಕೊಂಡಿರುವುದನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಬಿಜೆಪಿ ರೈತ ಮೋರ್ಚಾ ಕಾರ್ಯಕರ್ತರು ಜಾನುವಾರುಗಳೊಂದಿಗೆ ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

ಜಿಲ್ಲಾಧಿಕಾರಿ ಕಚೇರಿ ಬಳಿ ಸೇರಿದ ಕಾರ್ಯಕರ್ತರು, ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಕಳೆದ ಕೆಲವು ತಿಂಗಳುಗಳಿಂದ ಪಶುಪಾಲನೆಯಲ್ಲಿ ತೊಡಗಿರುವವರಿಗೆ ಪ್ರೋತ್ಸಾಹಧನ ವಿತರಿಸಿಲ್ಲ ಎಂದು ದೂರಿದರು.

ಕಾಂಗ್ರೆಸ್ ಸರ್ಕಾರದ ಧೋರಣೆಯಿಂದ ಜನರು ಮಾತ್ರವಲ್ಲ, ಜಾನುವಾರುಗಳೂ ಸಹ ಈ ಸರ್ಕಾರಕ್ಕೆ ಶಾಪ ಹಾಕುತ್ತಿವೆ. ಈ ಸರ್ಕಾರವು ಜನರ ಕೋಪವಲ್ಲದೆ, ಜಾನುವಾರುಗಳ ಶಾಪಕ್ಕೂ ಗುರಿಯಾಗಿದೆ ಎಂದು ಆರೋಪಿಸಿದರು.

ಯಡಿಯೂಪ್ಪ ಮುಖ್ಯಮಂತ್ರಿಯಾಗಿದ್ದಾಗ ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನವನ್ನು ನೀಡಿದ್ದರು. ಬಿಜೆಪಿ ಆಡಳಿತದಲ್ಲಿ ೨೬ ಲಕ್ಷ ಗ್ರಾಮೀಣ ರೈತರಿಂದ ಪತಿನಿತ್ಯ ೮೦ ರಿಂದ ೮೫ ಲಕ್ಷ ಲೀ. ಹಾಲನ್ನು ಸಂಗ್ರಹಿಸಲಾಗುತ್ತಿತ್ತು. ಸರ್ಕಾರ ಬಾಕಿ ಉಳಿಸಿಕೊಂಡಿರುವುದರಿಂದ ರಾಜ್ಯದಲ್ಲಿ ಪ್ರತಿನಿತ್ಯ ೧೦ ಲಕ್ಷ ಲೀ.ನಷ್ಟು ಹಾಲಿನ ಉತ್ಪಾದನೆ ಕುಸಿದಿದೆ. ಈ ಸರ್ಕಾರಕ್ಕೆ ರೈತರ ಬಗ್ಗೆ ಕಾಳಜಿ ಇದ್ದರೆ ಪ್ರೋತ್ಸಾಹ ಧನವನ್ನುಕೂಡಲೇ ಬಿಡುಗಡೆ ಮಾಡುವಂತೆ ಒತ್ತಾಯಿಸಿದರು.

ಈಗಾಗಲೇ ಜನತೆ ಸರ್ಕಾರಕ್ಕೆ ಶಾಪ ಹಾಕುತ್ತಿದ್ದಾರೆ. ರೈತರಿಗೆ ನೀಡಬೇಕಾದ ಹಣ ಬಿಡುಗಡೆ ಮಾಡಲು ಯೋಗ್ಯತೆ ಇಲ್ಲದ ಸರ್ಕಾರ, ಈ ಬಾಕಿ ಹಣಕ್ಕೂ ಕೂಡ ನರೇಂದ್ರ ಮೋದಿಯವರತ್ತ ಮುಖ ಮಾಡಿದೆ. ಕೂಡಲೇ ಬಿಡುಗಡೆ ಮಾಡದಿದ್ದಲ್ಲಿ ನಿಮ್ಮ ವಿರುದ್ಧ ಜನ-ಜಾನುವಾರುಗಳು ಒಟ್ಟಾಗಿ ಹೋರಾಟಕ್ಕೆ ಇಳಿಯುತ್ತಾರೆ ಎಂದು ಎಚ್ಚರಿಕೆ ನೀಡಿದರು.

ರೈತ ಮೋರ್ಚಾ ಜಿಲ್ಲಾಧ್ಯಕ್ಷ ಜೋಗಿಗೌಡ, ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಇಂದ್ರೇಶ್, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಡಾ.ಸಿದ್ದರಾಮಯ್ಯ, ಮುಖಂಡರಾದ ಇಂಡುವಾಳು ಸಚ್ಚಿದಾನಂದ, ಹರ್ಷ, ಶಿವಕುಮಾರ್ ಆರಾಧ್ಯ, ನಿತ್ಯಾನಂದ, ಸಿದ್ದರಾಜುಗೌಡ, ನಿತ್ಯಾನಂದ, ಪ.ನಾ. ಸುರೇಶ್‌, ರಮೇಶ, ಶ್ರೀಧರ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.