ಸಚಿವ ಬಿ. ನಾಗೇಂದ್ರ ಅವರನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ನೇತೃತ್ವದ ಸಚಿವ ಸಂಪುಟದಿಂದ ಕೈಬಿಡುವಂತೆ ಆಗ್ರಹಿಸಿ ಬಿಜೆಪಿ ಜಿಲ್ಲಾ ಘಟಕದ ಮುಖಂಡರು, ಕಾರ್ಯಕರ್ತರು ಶುಕ್ರವಾರ ನಗರದ ಜಿಲ್ಲಾಡಳಿತ ಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಡೆಯಿತು.
ಹಾವೇರಿ: ಸಚಿವ ಬಿ. ನಾಗೇಂದ್ರ ಅವರನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ನೇತೃತ್ವದ ಸಚಿವ ಸಂಪುಟದಿಂದ ಕೈಬಿಡುವಂತೆ ಆಗ್ರಹಿಸಿ ಬಿಜೆಪಿ ಜಿಲ್ಲಾ ಘಟಕದ ಮುಖಂಡರು, ಕಾರ್ಯಕರ್ತರು ಶುಕ್ರವಾರ ನಗರದ ಜಿಲ್ಲಾಡಳಿತ ಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಡೆಯಿತು.
ಬಿಜೆಪಿ ಜಿಲ್ಲಾಧ್ಯಕ್ಷ ವಿರೂಪಾಕ್ಷಪ್ಪ ಬಳ್ಳಾರಿ ನೇತೃತ್ವದಲ್ಲಿ ಜಿಲ್ಲಾಡಳಿತ ಭವನದ ಎದುರು ಜಮಾಯಿಸಿದ ಕಾರ್ಯಕರ್ತರು ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾಡಳಿತ ಭವನಕ್ಕೆ ಮುತ್ತಿಗೆ ಹಾಕಲು ಕಾರ್ಯಕರ್ತರು ಮುಂದಾದಾಗ ಪೊಲೀಸರು ಅವರನ್ನು ತಡೆದರು. ಇದರಿಂದ ಕೆಲಕಾಲ ಸ್ಥಳದಲ್ಲಿ ತಳ್ಳಾಟ-ನೂಕಾಟ ನಡೆಯಿತು. ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತ ಭವನದ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ವಿರೂಪಾಕ್ಷಪ್ಪ ಬಳ್ಳಾರಿ ಮಾತನಾಡಿ, ವಾಲ್ಮೀಕಿ ನಿಗಮದ ಹಣದ ಅಕ್ರಮ ವರ್ಗಾವಣೆ ರಾಜ್ಯದ ಜನರ ವಿಶ್ವಾಸಕ್ಕೆ ಧಕ್ಕೆ ತಂದಿರುವ ಗಂಭೀರ ಪ್ರಕರಣವಾಗಿದೆ. ಬಡವರು ಹಾಗೂ ಪರಿಶಿಷ್ಟ ಪಂಗಡದ ಅಭಿವೃದ್ಧಿಗೆ ಬಳಕೆಯಾಗಬೇಕಿದ್ದ ಹಣ ದುರ್ಬಳಕೆಯಾಗಿರುವುದು ಖಂಡನೀಯ. ಪ್ರಕರಣದ ಸಂಪೂರ್ಣ ತನಿಖೆ ನಡೆಸಿ, ಅಕ್ರಮವಾಗಿ ವರ್ಗಾವಣೆಯಾದ ಪ್ರತಿಯೊಂದು ರುಪಾಯಿಯನ್ನೂ ಸರ್ಕಾರದ ಬೊಕ್ಕಸಕ್ಕೆ ಮರಳಿ ತರಬೇಕು ಎಂದು ಆಗ್ರಹಿಸಿದರು.
ಪ್ರಕರಣದ ಪ್ರಮುಖ ರೂವಾರಿಯಾಗಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಬಿ. ನಾಗೇಂದ್ರ ಅವರನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಮತ್ತೆ ಸಚಿವ ಸಂಪುಟಕ್ಕೆ ಸೇರಿಸಿಕೊಂಡಿದ್ದಾರೆ. ಹಣದ ಅಕ್ರಮ ವರ್ಗಾವಣೆ ಆರೋಪ ಎದುರಿಸುತ್ತಿರುವ ನಾಗೇಂದ್ರ ಅವರನ್ನು ಕೂಡಲೇ ಸಚಿವ ಸಂಪುಟದಿಂದ ಕೈಬಿಡಬೇಕು ಎಂದು ಒತ್ತಾಯಿಸಿದರು.ಮಾಜಿ ಶಾಸಕ ಶಿವರಾಜ ಸಜ್ಜನರ ಮಾತನಾಡಿ, ಜನರ ಕಲ್ಯಾಣಕ್ಕಾಗಿ ಮೀಸಲಿಟ್ಟ ಹಣದ ದುರ್ಬಳಕೆ ನಡೆದಿರುವ ಆರೋಪಗಳು ಸರ್ಕಾರದ ಆಡಳಿತ ವೈಖರಿಯನ್ನೇ ಪ್ರಶ್ನಿಸುವಂತಿವೆ. ನೈತಿಕ ಹೊಣೆ ಹೊತ್ತು ಬಿ. ನಾಗೇಂದ್ರ ಅವರು ರಾಜೀನಾಮೆ ನೀಡಬೇಕು. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರಿಗೆ ನೈತಿಕತೆ ಹಾಗೂ ಮಾನ-ಮರ್ಯಾದೆ ಇದ್ದರೆ ಕೂಡಲೇ ಅವರನ್ನು ಸಚಿವ ಸಂಪುಟದಿಂದ ಕೈಬಿಡಬೇಕು ಎಂದು ಆಗ್ರಹಿಸಿದರು.
ಮುಖಂಡರಾದ ಗವಿಸಿದ್ದಪ್ಪ ದ್ಯಾಮಣ್ಣವರ ಹಾಗೂ ಕಲ್ಯಾಣಕುಮಾರ ಶೆಟ್ಟರ್ ಮಾತನಾಡಿ, ಪರಿಶಿಷ್ಟ ಪಂಗಡದ ಜನರ ಅಭಿವೃದ್ಧಿಗೆ ಮೀಸಲಾದ ಹಣವನ್ನು ಯಾವುದೇ ಕಾರಣಕ್ಕೂ ಬೇರೆ ಉದ್ದೇಶಕ್ಕೆ ಬಳಸಬಾರದು. ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವುದಾಗಿ ಹೇಳುವ ಸರ್ಕಾರ ಪ್ರಕರಣದ ಕುರಿತು ಜನರಿಗೆ ಸ್ಪಷ್ಟ ಉತ್ತರ ನೀಡಬೇಕು. ಅಕ್ರಮವಾಗಿ ವರ್ಗಾವಣೆಯಾದ ಹಣವನ್ನು ವಾಪಸ್ ಪಡೆದು ಅರ್ಹ ಫಲಾನುಭವಿಗಳಿಗೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು.ಸ್ಥಳಕ್ಕೆ ಆಗಮಿಸಿದ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಅವರು ಬಿಜೆಪಿ ಮುಖಂಡರ ಮನವಿ ಪತ್ರವನ್ನು ಸ್ವೀಕರಿಸಿದರು. ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಂಡು, ಅಕ್ರಮವಾಗಿ ವರ್ಗಾವಣೆಯಾದ ಹಣವನ್ನು ವಸೂಲಿ ಮಾಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಯಿತು.
ಪ್ರತಿಭಟನೆಯಲ್ಲಿ ಶಹರ ಬಿಜೆಪಿ ಅಧ್ಯಕ್ಷ ಕಿರಣ್ ಕೊಳ್ಳಿ, ರೈತ ಮೋರ್ಚಾ ಉಪಾಧ್ಯಕ್ಷ ಮೃತ್ಯುಂಜಯ ಮುಷ್ಠಿ, ಸಂತೋಷ ಆಲದಕಟ್ಟಿ, ನಿರಂಜನ ಹೇರೂರ, ನಂಜುಂಡೇಶ ಕಳ್ಳೇರ, ವೆಂಕಟೇಶ ನಾರಾಯಣಿ, ಕಿರಣಕುಮಾರ ಕೋಣನವರ, ವಿಜಯಕುಮಾರ ಚಿನ್ನಿಕಟ್ಟಿ, ಫಕ್ಕೀರೇಶ ಹಾವನೂರ, ಜಯಣ್ಣ ಶೆಟ್ಟರ ಸೇರಿದಂತೆ ಪಕ್ಷದ ಅನೇಕ ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.