ಸಾರಾಂಶ
ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಕೂಡಲೇ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಬಿಜೆಪಿ ಜಿಲ್ಲಾ ಯುವ ಮೋರ್ಚಾ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ಕನ್ನಡಪ್ರಭ ವಾರ್ತೆ ಚಾಮರಾಜನಗರ
ನ್ಯಾಷನಲ್ ಹೆರಾಲ್ಡ್ ಪ್ರಕರಣ ಸಂಬಂಧ ಕೇಂದ್ರ ವಿಪಕ್ಷ ನಾಯಕ ರಾಹುಲ್ ಗಾಂಧಿ ಹಾಗೂ ರಾಜ್ಯಸಭಾ ಸದಸ್ಯೆ ಸೋನಿಯಾ ಗಾಂಧಿ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ) ಆರೋಪ ಪಟ್ಟಿ ಸಲ್ಲಿಸಿದ್ದು ಕೂಡಲೇ ಇಬ್ಬರು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ಜಿಲ್ಲಾ ಯುವ ಮೋರ್ಚಾ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.ನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು ಅಲ್ಲಿಂದ ಭುವನೇಶ್ವರಿ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಡಸಿ, ಅಲ್ಲಿ ಕೆಲಕಾಲ ಪ್ರತಿಭಟನೆ ನಡೆಸಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ವಿರುದ್ಧ ಘೋಷಣೆ ಕೂಗಿ ಅಕ್ರೋಶ ವ್ಯಕ್ತಪಡಿಸಿದರು.ಈ ವೇಳೆ ಜಿಲ್ಲಾ ಯುವ ಮೋರ್ಚಾದ ಅಧ್ಯಕ್ಷ ಸೂರ್ಯಕುಮಾರ್ ಮಾತನಾಡಿ, ನ್ಯಾಷನಲ್ ಹೆರಾಲ್ಡ್ ಪ್ರಕರಣ ದೇಶದಲ್ಲಿಯೇ ದೊಡ್ಡ ಪ್ರಕರಣವಾಗಿದ್ದು ಬಿಜೆಪಿ ಕಾರ್ಯಕರ್ತರು ಜನರಿಗೆ ತಿಳಿಸುವ ಕೆಲಸ ಮಾಡಬೇಕು ಎಂದರು. 1937ರಲ್ಲಿ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಶುರುವಾಗುತ್ತದೆ. 2008ರಲ್ಲಿ ಈ ಪತ್ರಿಕೆ ಕಾರ್ಯ ನಿಲ್ಲಿಸುತ್ತದೆ. ₹90 ಕೋಟಿ ಸಾಲ ಇರುತ್ತದೆ. ₹5000 ಕೋಟಿಯಷ್ಟು ಆಸ್ತಿ ಇರುತ್ತದೆ. ಇದು ಸೋನಿಯಾಗಾಂಧಿ ಅವರ ಮಾಲೀಕತ್ವಕ್ಕೆ ರವಾನೆಯಾಗುತ್ತದೆ ಎಂದರು. ಜಾರಿ ನಿರ್ದೇಶನಾಲಯ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ. ಆದ್ದರಿಂದ ಕೂಡಲೇ ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ, ಕೇಂದ್ರ ಬರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ.ರಾಮಚಂದ್ರ, ನಗರಸಭಾ ಅಧ್ಯಕ್ಷ ಸುರೇಶ್ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೃಷಬೇಂದಪ್ಪ, ಮೂಡ್ನಾಕೂಡು ಪ್ರಕಾಶ್, ವಿರಾಟ್ ಶಿವು, ಆನಂದ ಭಗೀರಥ, ಕುಲಗಾಣ ಶಾಂತಮೂರ್ತಿ, ಸಂತೋಷ್, ಕೇಬಲ್ ರಂಗಸ್ವಾಮಿ ಇತರರು ಭಾಗವಹಿಸಿದ್ದರು.