ಸಾರಾಂಶ
ಕಾರವಾರ: ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ರಾಜ್ಯ ಸರ್ಕಾರ ಹಿಂದುಳಿದ ನಿಗಮಗಳಿಗೆ ಅನುದಾನ ಬಿಡುಗಡೆ ಮಾಡದೇ ಇರುವುದನ್ನು ಖಂಡಿಸಿ ಬಿಜೆಪಿಯ ಹಿಂದುಳಿದ ವರ್ಗಗಳ ಮೋರ್ಚಾದಿಂದ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.ಬಿಜೆಪಿ ರಾಜ್ಯ ಒಬಿಸಿ ಮೋರ್ಚಾ ಉಪಾಧ್ಯಕ್ಷ ಕುಬೇರಪ್ಪ ಮಾತನಾಡಿ, ಅಹಿಂದ ಹೆಸರಿನಲ್ಲಿ ಅಧಿಕಾರಕ್ಕೆ ಬಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಂದುಳಿದ ವರ್ಗದ ಜನರಿಗೆ ಅನ್ಯಾಯ ಮಾಡುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದೂವರೆ ವರ್ಷವಾದರೂ ಹಿಂದುಳಿದ ವರ್ಗದ ಯಾವ ನಿಗಮಕ್ಕೂ ಅನುದಾನ ಬಿಡುಗಡೆ ಮಾಡಿಲ್ಲ. ಅಭಿವೃದ್ಧಿ ಎನ್ನುವುದು ರಾಜ್ಯದಲ್ಲಿ ಮರೀಚಿಕೆಯಾಗಿದೆ. ಎಸ್‌ಸಿ, ಎಸ್‌ಟಿ ನಿಗಮಕ್ಕೆ ಇಟ್ಟಿದ್ದ ₹೨೫ ಸಾವಿರ ಕೋಟಿ ಅನುದಾನವನ್ನು ಗ್ಯಾರಂಟಿಗೆ ಬಳಸಿಕೊಂಡಿದ್ದಾರೆ.
ಸರ್ಕಾರ ನಿಗಮಗಳಿಗೆ ಅನುದಾನ ಬಿಡುಗಡೆ ಮಾಡದೇ ಇದ್ದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.ಮಾಜಿ ವಕ್ತಾರ ನಾಗರಾಜ ನಾಯಕ ಮಾತನಾಡಿ, ಹಿಂದುಳಿದ ವರ್ಗಗಳ ಹಕ್ಕನ್ನು ಆಪೋಷನ ತೆಗೆದುಕೊಂಡಿದ್ದಾರೆ. ಹಿಂದುಳಿದ ವರ್ಗದ ಮೊದಲ ಶತ್ರು ಸಿದ್ದರಾಮಯ್ಯ ಆಗಿದ್ದಾರೆ. ₹೧ ಕೋಟಿ ಮೊತ್ತದ ಕೈಗಡಿಯಾರವನ್ನು ಏಕೆ ತೆಗೆದುಕೊಂಡಿದ್ದೀರಿ? ಏನು ಕೆಲಸ ಮಾಡಿಕೊಡುತ್ತೇನೆ ಎಂದು ಹೇಳಿದ್ದೀರಿ? ಒಬ್ಬ ಸಾರ್ವಜನಿಕರ ಸೇವಕನಿಗೆ ₹೧ ಕೋಟಿ ಮೊತ್ತದ ಗಡಿಯಾರ ನೀಡುತ್ತಾರೆ ಏನು ಅರ್ಥ? ಹಿಂದುಳಿದ ವರ್ಗದವರು ಶ್ರಮಿಕ ಸಂಸ್ಕೃತಿಯವರಾಗಿದ್ದಾರೆ. ಕೂಲಿ ಮಾಡಿ ಕಷ್ಟಪಟ್ಟು ಬದುಕು ಸಾಗಿಸುತ್ತಿದ್ದವರು. ನಮ್ಮ ಹಿಂದುಳಿದ ವರ್ಗದ ಹೆಸರು ತೆಗೆದುಕೊಂಡು ಅಧಿಕಾರಕ್ಕೆ ಬಂದು ಈಗ ಅವರಿಗೆ ಅನ್ಯಾಯ ಮಾಡುತ್ತಿರುವುದು ಸರಿಯೇ ಎಂದು ಪ್ರಶ್ನಿಸಿದರು.ಹಿಂದುಳಿದ ವರ್ಗಗಗಳ ವ್ಯಾಪ್ತಿಯಲ್ಲಿ ಬರುವ ವಿವಿಧ ನಿಗಮಗಳಿಗೆ ಅನುದಾನ ಬಿಡುಗಡೆ ಮಾಡದೇ ಇರುವುದಕ್ಕೆ ಸರ್ಕಾರದ ವಿರುದ್ಧ ಪ್ರತಿಭಟನಾಕಾರರು ಘೋಷಣೆ ಕೂಗಿದರು. ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಅವರ ಮೂಲಕ ಅನುದಾನ ಬಿಡುಗಡೆಗೆ ಸರ್ಕಾರಕ್ಕೆ ಮನವಿ ಸಲ್ಲಿಸಿದರು.ಜಿಲ್ಲಾಧ್ಯಕ್ಷ ಎನ್.ಎಸ್. ಹೆಗಡೆ, ಒಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ರಾಜೇಂದ್ರ ನಾಯ್ಕ, ಜಿಲ್ಲಾ ವಕ್ತಾರ ಸದಾನಂದ ಭಟ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ ಹೆಗಡೆ, ನಗರಸಭೆ ಅಧ್ಯಕ್ಷ ರವಿರಾಜ ಅಂಕೋಲೇಕರ, ದೇವಿದಾಸ ನಾಯ್ಕ ಮೊದಲಾದವರು ಇದ್ದರು.