ಹರೀಶ್‌ ಪೂಂಜಾ ವಿರುದ್ಧದ ಪ್ರಕರಣ ಹಿಂಪಡೆಯಲು ಬಿಜೆಪಿ ಆಗ್ರಹ

| Published : May 21 2024, 12:34 AM IST

ಹರೀಶ್‌ ಪೂಂಜಾ ವಿರುದ್ಧದ ಪ್ರಕರಣ ಹಿಂಪಡೆಯಲು ಬಿಜೆಪಿ ಆಗ್ರಹ
Share this Article
  • FB
  • TW
  • Linkdin
  • Email

ಸಾರಾಂಶ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಮೇಲೆ ದಾಖಲಿಸಿರುವ ಪ್ರಕರಣವನ್ನು ಹಿಂಪಡೆಯಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಒತ್ತಾಯಿಸಿ ಎಡಿಸಿ ನಾರಾಯಣ ಕನಕರಡ್ಡಿ ಅವರ ಮೂಲಕ ರಾಜ್ಯಪಾಲರಿಗೆ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಮನವಿ ಸಲ್ಲಿಸಿದರು.

ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು:

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜಾ ಅವರ ಮೇಲೆ ದಾಖಲಿಸಿರುವ ಪ್ರಕರಣವನ್ನು ಹಿಂಪಡೆಯಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಒತ್ತಾಯಿಸಿ ಅಪರ ಜಿಲ್ಲಾಧಿಕಾರಿ ನಾರಾಯಣ ಕನಕರಡ್ಡಿ ಅವರ ಮೂಲಕ ರಾಜ್ಯಪಾಲರಿಗೆ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಸೋಮವಾರ ಮನವಿ ಸಲ್ಲಿಸಿದರು.

ಬೆಳ್ತಂಗಡಿ ಮಂಡಲದ ಬಿಜೆಪಿ ಅಧ್ಯಕ್ಷ ಶಶಿರಾಜ್ ಶೆಟ್ಟಿ ಮೇಲೆ ಸುಳ್ಳು ಪ್ರಕರಣ ದಾಖಲಿಸಿ ರಾತ್ರೋರಾತ್ರಿ ಬಂಧಿಸಿರುವ ಸರ್ಕಾರದ ನಡೆ ಖಂಡಿಸಿ ಶಾಸಕ ಹರೀಶ್ ಪೂಂಜ ಅವರು ಪೊಲೀಸ್ ಠಾಣೆಯಲ್ಲಿ ಪೊಲೀಸರ ಕ್ರಮವನ್ನು ಪ್ರಶ್ನಿಸಿದ್ದಾರೆ. ಇದೇ ಕಾರಣಕ್ಕೆ ಸಾಂವಿಧಾನಿಕ ಹುದ್ದೆಯಲ್ಲಿರುವ ಶಾಸಕರ ಮೇಲೆ ಪೊಲೀಸರು ಸುಳ್ಳು ಪ್ರಕರಣ ದಾಖಲಿಸಿ ಅವರ ಅಧಿಕಾರವನ್ನು ಮೊಟುಕುಗೊಳಿಸುವ ಪ್ರಯತ್ನ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಶಾಸಕರ ವಿರುದ್ಧ ದೂರು ದಾಖಲಿಸಲು ಪೊಲೀಸರಿಗೆ ರಾಜ್ಯ ಸರ್ಕಾರ ಕುಮಕ್ಕು ನೀಡಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದ್ದು, ಆಡಳಿತಶಾಹಿಗಳ ಕೈಯಲ್ಲಿ ಪೊಲೀಸ್ ಇಲಾಖೆ ಸಿಲುಕಿದಂತಾಗಿದೆ ಎಂದು ದೂರಿದರು.

ರಾಜ್ಯದಲ್ಲಿ ಸರ್ಕಾರದ ವೈಫಲ್ಯಗಳನ್ನು ಎತ್ತಿ ತೋರಿಸುತ್ತಿರುವವರ ವಿರುದ್ಧ ಪೊಲೀಸ್ ಇಲಾಖೆಯನ್ನು ಬಳಸಿಕೊಂಡು ರಾಜ್ಯ ಸರ್ಕಾರ ಸಂವಿಧಾನಾತ್ಮಕ ಹಕ್ಕುಗಳನ್ನು ಹತ್ತಿಕ್ಕುವ ಕೆಲಸವನ್ನು ಮಾಡುತ್ತಿದೆ. ಈ ಮೂಲಕ ಡಾ. ಬಿ.ಆರ್.ಅಂಬೇಡ್ಕರ್ ಅವರು ರಚಿಸಿದ ಸಂವಿಧಾನಕ್ಕೆ ರಾಜ್ಯ ಸರ್ಕಾರ ಅಪಚಾರ ಮಾಡುತ್ತಿದೆ. ಈ ಹಿನ್ನೆಲೆ ರಾಜ್ಯಪಾಲರು ಕೂಡಲೇ ಮಧ್ಯಪ್ರವೇಶಿಸಿ ರಾಜ್ಯ ಸರ್ಕಾರಕ್ಕೆ ಕಾನೂನುಗಳನ್ನು ಪಾಲಿಸುವ ನಿಟ್ಟಿನಲ್ಲಿ ಸೂಕ್ತ ನಿರ್ದೇಶನ ನೀಡಬೇಕು. ರಾಜ್ಯಾದ್ಯಂತ ಬಿಜೆಪಿ ಕಾರ್ಯಕರ್ತರ ಮೇಲೆ ದಾಖಲು ಮಾಡಿರುವ ಸುಳ್ಳು ಮೊಕದ್ದಮೆಗಳನ್ನು ರದ್ದುಪಡಿಸುವಂತೆ ನಿರ್ದೇಶನ ನೀಡಬೇಕು ಎಂದು ಮನವಿ ಮಾಡಿದರು.

ಈ ವೇಳೆ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಸಂತೋಷ್ ಕೋಟ್ಯಾನ್, ಸಚಿನ್, ಸೀತಾರಾಮ, ಭರಣ್ಯ ಇದ್ದರು.