ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಮಿತ್ ಶೆಟ್ಟಿ, ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿಗಳ ಭರವಸೆಯೊಂದಿಗೆ ಅಧಿಕಾರಕ್ಕೆ ಬಂದಿದ್ದರೂ, ಇದೀಗ ಅಗತ್ಯ ವಸ್ತುಗಳ ಬೆಲೆ ಏರಿಕೆಯ ಮೂಲಕ ಜನರಿಗೆ ಮತ್ತೊಂದು ಹೊರೆಯಾಗಿದೆ. ಮಹಿಳೆಯರಿಗೆ ₹ 2,000 ನೀಡುವ ಸರ್ಕಾರ, ಮತ್ತೊಂದೆಡೆ ಹಾಲು, ಮೊಸರು, ವಿದ್ಯುತ್ ಹಾಗೂ ಬಸ್ ಪ್ರಯಾಣ ದರ ಹೆಚ್ಚಿಸುವ ಮೂಲಕ ಜನರ ಜೇಬಿಗೆ ಕತ್ತರಿ ಹಾಕುತ್ತಿದೆ ಎಂದು ಟೀಕಿಸಿದರು.
ಕನ್ನಡಪ್ರಭ ವಾರ್ತೆ ಅರಸೀಕೆರೆ
ದಿನನಿತ್ಯದ ಬದುಕಿಗೆ ಅಗತ್ಯವಾಗಿರುವ ಸಾರಿಗೆ ಮತ್ತು ಹಾಲಿನ ದರಗಳ ಹೆಚ್ಚಳ ಸಾರ್ವಜನಿಕರ ಜೀವನ ನಿರ್ವಹಣೆಯನ್ನೇ ದುಸ್ತರಗೊಳಿಸುತ್ತಿದೆ ಎಂಬ ಆರೋಪದೊಂದಿಗೆ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಸಮರ ಸಾರಿದೆ. ಜನಸಾಮಾನ್ಯರ ಹಿತ ಕಾಪಾಡಬೇಕಾದ ಸರ್ಕಾರವೇ ಒಂದರ ಹಿಂದೆ ಮತ್ತೊಂದು ಬೆಲೆ ಏರಿಕೆ ನಿರ್ಧಾರಗಳನ್ನು ಕೈಗೊಳ್ಳುತ್ತಿದೆ ಎಂದು ಆಕ್ಷೇಪಿಸಿ ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸಿದರು.ನಗರದ ಪಿ.ಪಿ. ವೃತ್ತದಲ್ಲಿ ಜಮಾಯಿಸಿದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಮಿತ್ ಶೆಟ್ಟಿ, ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿಗಳ ಭರವಸೆಯೊಂದಿಗೆ ಅಧಿಕಾರಕ್ಕೆ ಬಂದಿದ್ದರೂ, ಇದೀಗ ಅಗತ್ಯ ವಸ್ತುಗಳ ಬೆಲೆ ಏರಿಕೆಯ ಮೂಲಕ ಜನರಿಗೆ ಮತ್ತೊಂದು ಹೊರೆಯಾಗಿದೆ. ಮಹಿಳೆಯರಿಗೆ ₹ 2,000 ನೀಡುವ ಸರ್ಕಾರ, ಮತ್ತೊಂದೆಡೆ ಹಾಲು, ಮೊಸರು, ವಿದ್ಯುತ್ ಹಾಗೂ ಬಸ್ ಪ್ರಯಾಣ ದರ ಹೆಚ್ಚಿಸುವ ಮೂಲಕ ಜನರ ಜೇಬಿಗೆ ಕತ್ತರಿ ಹಾಕುತ್ತಿದೆ ಎಂದು ಟೀಕಿಸಿದರು.ಬಸ್ ಪ್ರಯಾಣ ದರ ಮತ್ತು ಹಾಲಿನ ಬೆಲೆ ಏರಿಕೆಯ ಪರಿಣಾಮ ಬಡವರು, ಮಧ್ಯಮ ವರ್ಗದ ಕುಟುಂಬಗಳು, ರೈತರು, ಕಾರ್ಮಿಕರು ಹಾಗೂ ವಿದ್ಯಾರ್ಥಿಗಳು ಸಂಕಷ್ಟ ಅನುಭವಿಸುವಂತಾಗಿದೆ. ಈಗಾಗಲೇ ದಿನಬಳಕೆಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಜನರಿಗೆ ಸರ್ಕಾರದ ಈ ನಿರ್ಧಾರ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.ಹಿರಿಯ ಬಿಜೆಪಿ ಕಾರ್ಯಕರ್ತ ಎನ್.ಡಿ. ಪ್ರಸಾದ್ ಮಾತನಾಡಿ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಎರಡು ಬಾರಿ ಹಾಲಿನ ದರ ಹೆಚ್ಚಿಸಿದ್ದು, ಒಟ್ಟಾರೆ ಪ್ರತಿ ಲೀಟರ್ಗೆ 17 ಹೆಚ್ಚಳವಾಗಿದೆ. ಮೊಸರಿನ ದರದಲ್ಲಿಯೂ 14 ಏರಿಕೆ ಮಾಡಲಾಗಿದೆ ಎಂದು ಆರೋಪಿಸಿದರು. ಬಿಎಂಟಿಸಿ ಬಸ್ ಪ್ರಯಾಣ ದರವನ್ನು ಶೇ.35ರಷ್ಟು ಹಾಗೂ ಕೆಎಸ್ಆರ್ಟಿಸಿ ದರವನ್ನು ಶೇ.23ರಷ್ಟು ಹೆಚ್ಚಿಸಿರುವುದು ಜನಸಾಮಾನ್ಯರಿಗೆ ಹೊರೆಯಾಗಿದೆ. ಇಂತಹ ಜನವಿರೋಧಿ ನೀತಿಗಳಿಗೆ ಮುಂದಿನ ಚುನಾವಣೆಯಲ್ಲಿ ಜನರು ತಕ್ಕ ಉತ್ತರ ನೀಡಬೇಕು ಎಂದು ಹೇಳಿದರು.ಬಿಜೆಪಿ ಮುಖಂಡ ಹಾಗೂ ಸಾಮಾಜಿಕ ಕಾರ್ಯಕರ್ತ ದಿನೇಶ್ ಮಾತನಾಡಿ, ನಗರದ ಸರ್ಕಾರಿ ಆಸ್ಪತ್ರೆಯಲ್ಲಿನ ಸಮಸ್ಯೆಗಳ ಕುರಿತು ಗಮನ ಸೆಳೆದರು. ಆಸ್ಪತ್ರೆಯಲ್ಲಿ ರೋಗಿಗಳಿಗೆ ಅಗತ್ಯ ಔಷಧಗಳನ್ನು ಉಚಿತವಾಗಿ ವಿತರಿಸುವುದು, ವೈದ್ಯರು ಹಾಗೂ ತಜ್ಞ ವೈದ್ಯರನ್ನು ನೇಮಿಸುವುದು, 24 ಗಂಟೆಗಳ ತುರ್ತು ಚಿಕಿತ್ಸಾ ಸೌಲಭ್ಯ ಕಲ್ಪಿಸುವುದು ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಬೇಕು ಎಂದು ಒತ್ತಾಯಿಸಿದರು.ಬಸ್ ಪ್ರಯಾಣ ದರ ಏರಿಕೆಯನ್ನು ಕೂಡಲೇ ಹಿಂಪಡೆಯಬೇಕು, ಹಾಲಿನ ಬೆಲೆ ಹೆಚ್ಚಳವನ್ನು ರದ್ದುಗೊಳಿಸಬೇಕು ಹಾಗೂ ಅಗತ್ಯ ವಸ್ತುಗಳ ಬೆಲೆ ನಿಯಂತ್ರಣಕ್ಕೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಮುಖಂಡರು ಆಗ್ರಹಿಸಿದರು.ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದರು.ನಂತರ ತಹಶೀಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಬಿಜೆಪಿ ತಾಲೂಕು ಗ್ರಾಮಾಂತರ ಘಟಕದ ಅಧ್ಯಕ್ಷ ಯತೀಶ್ ಪ್ರತಿಭಟನೆಯ ನೇತೃತ್ವ ವಹಿಸಿದ್ದರು. ನಗರಾಧ್ಯಕ್ಷ ಅವಿನಾಶ್ ನಾಯ್ಡು, ಪ್ರಧಾನ ಕಾರ್ಯದರ್ಶಿಗಳಾದ ಸಿಂಧು, ಮಂಜುಕುಮಾರ್, ಮುಖಂಡರಾದ ಮನೋಜ್ ಕುಮಾರ್, ಬಾಣಾವರ ಜಯಣ್ಣ, ಈಶ್ವರ್ ಸಿಂಗ್, ಮಹಾಲಿಂಗಪ್ಪ, ಚೇತನ್ ಜೈ, ಮೀನಾಕ್ಷಿ, ಚಂದ್ರು, ಈಶ್ವರಪ್ಪ, ಕಿರಣ್ ಕುಮಾರ್, ವಿನೋದ್ ಜೈನ್, ವಿಜಯಕುಮಾರ್, ಚಂದ್ರಕಲಾ ಸೇರಿದಂತೆ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.