ಸಾರಾಂಶ
ಕನ್ನಡಪ್ರಭ ವಾರ್ತೆ ದಾವಣಗೆರೆ
ಭಾರತಕ್ಕೆ ಪ್ರಜಾಪ್ರಭುತ್ವ ವ್ಯವಸ್ಥೆ ಸೂಕ್ತ ಎಂಬುದನ್ನು ಸ್ವಾತಂತ್ರ್ಯ ಹೋರಾಟಗಾರರು 1947ಕ್ಕೂ ಮುನ್ನವೇ ಅರಿತಿದ್ದರು. ನಿಷ್ಪಕ್ಷಪಾತ ಚುನಾವಣೆ ನಡೆಸಲು ಚುನಾವಣಾ ಆಯೋಗಕ್ಕೆ ಸ್ವಾಯತ್ತತೆ ನೀಡಿದ್ದರು. ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿ ಇರುವವರೆಗೂ ಚುನಾವಣಾ ಆಯೋಗದ ಸಾಂವಿಧಾನಿಕ ಚೌಕಟ್ಟಿಗೆ ಧಕ್ಕೆ ಉಂಟಾಗಿರಲಿಲ್ಲ. ಆದರೆ, ಬಿಜೆಪಿ ಅಧಿಕಾರ ಹಿಡಿದ ಬಳಿಕ ಚುನಾವಣಾ ಆಯೋಗವನ್ನು ಕಪಿಮುಷ್ಟಿಯಲ್ಲಿ ಇಟ್ಟುಕೊಂಡು ಮತಗಳ್ಳತನದ ಮೂಲಕ ಅಧಿಕಾರ ಹಿಡಿಯುತ್ತಿದೆ ಎಂದು ಎಐಸಿಸಿ ಕಾರ್ಯದರ್ಶಿ ಮಯೂರ ಜಯಕುಮಾರ್ ಆರೋಪಿಸಿದರು.ನಗರದ ಜಯದೇವ ವೃತ್ತದಲ್ಲಿ ಭಾನುವಾರ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ದೇಶಾದ್ಯಂತ ನಡೆಸುತ್ತಿರುವ ಓಟ್ ಚೋರಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ಪಕ್ಷದಿಂದ ಆಯೋಜಿಸಿದ ಓಟ್ ಚೋರಿ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿ, ಮಹಾತ್ಮ ಗಾಂಧೀಜಿ ನೇತೃತ್ವದಲ್ಲಿ ಸ್ವಾತಂತ್ರ‍್ಯ ಹೋರಾಟಗಾರರು ಭಾರತದ ಅಭಿವೃದ್ಧಿಗೆ ಅಳವಡಿಸಿಕೊಂಡ ಪ್ರಜಾಪ್ರಭುತ್ವ ಹಾಗೂ ಚುನಾವಣಾ ವ್ಯವಸ್ಥೆಯನ್ನು ಬುಡಮೇಲು ಮಾಡಲು ಬಿಜೆಪಿ ಯತ್ನಿಸುತ್ತಿದೆ ಎಂದರು.
ಮತದಾರರ ಪಟ್ಟಿಯಲ್ಲಿ ಸುಳ್ಳು ಹೆಸರು ಇರುವುದನ್ನು ಕಾಂಗ್ರೆಸ್ ಸಾಕ್ಷ್ಯ ಸಮೇತ ಜನರ ಮುಂದಿಟ್ಟಿದೆ. ಒಬ್ಬ ಮತದಾರ ಹಲವು ಕ್ಷೇತ್ರಗಳಲ್ಲಿ ಮತ ಚಲಾವಣೆ ಮಾಡಿರುವುದು ಪತ್ತೆಯಾಗಿದೆ. ಇದರ ವಿಡಿಯೊ ದಾಖಲೆಗಳನ್ನು ಬಿಡುಗಡೆ ಮಾಡಲು ಚುನಾವಣಾ ಆಯೋಗ ಮೀನ-ಮೇಷ ಎಣಿಸುತ್ತಿದೆ. ಆಯೋಗ ಪಾರದರ್ಶಕ ಹಾಗೂ ಪ್ರಾಮಾಣಿಕ ನಡವಳಿಕೆ ಹೊಂದಿದ್ದರೆ ಈ ಹಿಂಜರಿಕೆ ಏಕೆ ಎಂದು ಪ್ರಶ್ನಿಸಿದರು.ಅಭಿಯಾನದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಭಾಗವಹಿಸಿ ಮಾತನಾಡಿ, ಚುನಾವಣಾ ಆಯೋಗ ಸಾಂವಿಧಾನಿಕ ಸಂಸ್ಥೆ, ಪ್ರತಿಯೊಬ್ಬರ ಮತದಾನದ ಹಕ್ಕು ಕಾಪಾಡುವುದು ಆಯೋಗದ ಜವಾಬ್ದಾರಿ. ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸಬೇಕು. ಆದರೆ, ಆಯೋಗ ಇದಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ. ಪ್ರಜಾಪ್ರಭುತ್ವದ ಆಶಯಗಳನ್ನು ಹಾಳು ಮಾಡಲು ಪ್ರಯತ್ನಿಸುತ್ತಿದೆ ಎಂದರು.
ಕೇಂದ್ರ ಸರ್ಕಾರದ ಮಲತಾಯಿ ಧೋರಣೆಯಿಂದಾಗಿ ರಾಜ್ಯದ ಅಭಿವೃದ್ಧಿಗೆ ತೊಡಕಾಗಿದೆ. ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಸಂಗ್ರಹದಲ್ಲಿ ಕರ್ನಾಟಕ ದೇಶದಲ್ಲಿ 2ನೇ ಸ್ಥಾನದಲ್ಲಿದೆ. ಆದರೆ, ಕೇಂದ್ರ ಸರ್ಕಾರ ರಾಜ್ಯದ ಪಾಲನ್ನು ಸರಿಯಾಗಿ ನೀಡುತ್ತಿಲ್ಲ ಎಂದು ಹರಿಹಾಯ್ದರು.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಬಿ.ಮಂಜಪ್ಪ, ಶಿಗ್ಗಾವಿ ಶಾಸಕ ಯಾಸೀರ ಅಹ್ಮದ್ ಖಾನ್ ಪಠಾಣ, ವಿಧಾನಪರಿಷತ್ ಸದಸ್ಯ ಡಿ.ಟಿ.ಶ್ರೀನಿವಾಸ್, ಕರ್ನಾಟಕ ಜೀವವೈವಿಧ್ಯ ಮಂಡಳಿ ಅಧ್ಯಕ್ಷ ವಡ್ನಾಳ್ ಜಗದೀಶ್, ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಮರಿಯೋಜಿರಾವ್, ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ, ಮಾಜಿ ಶಾಸಕ ಎಸ್.ರಾಮಪ್ಪ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ.ಬಸವರಾಜ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅನಿತಾಬಾಯಿ ಮಾಲತೇಶ ಜಾಧವ್ , ಕೆ.ಜಿ.ಶಿವಕುಮಾರ, ಎ.ನಾಗರಾಜ, ಅಯುಬ್ ಪೈಲ್ವಾನ್ ಸೇರಿದಂತೆ ಪಕ್ಷದ ಮುಖಂಡರು, ವಿವಿಧ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು, ಮಾಜಿ ಪಾಲಿಕೆ ಸದಸ್ಯರು, ಕಾರ್ಯಕರ್ತರು, ಅಭಿಮಾನಿಗಳು ಭಾಗವಹಿಸಿದ್ದರು.
ಮತದಾರರ ಪಟ್ಟಿಯಲ್ಲಿ ಆಗಿರುವ ಲೋಪಗಳನ್ನು ದೇಶದ ಮುಂದೆ ಇಡಲಾಗಿದೆ. ಇದನ್ನು ಜನರ ಬಳಿಗೆ ಕೊಂಡೊಯ್ಯುವ ಕಾರ್ಯವನ್ನು ಕಾಂಗ್ರೆಸ್ ಕಾರ್ಯಕರ್ತರು ಮಾಡಬೇಕು. ಜಿಲ್ಲೆಯಲ್ಲಿ 2 ಲಕ್ಷ ಸಹಿ ಸಂಗ್ರಹಿಸಬೇಕು.ಡಾ.ಪ್ರಭಾ ಮಲ್ಲಿಕಾರ್ಜುನ್ ಸಂಸದೆ.