ಸಾರಾಂಶ
ಕೇಂದ್ರ ಸರ್ಕಾರದ ಒತ್ತಡಕ್ಕೆ ಮಣಿದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಶನ್‌ಗೆ ಅನುಮತಿ ನೀಡಿದ್ದಾರೆ ಎಂದು ಶಾಸಕ ಎನ್.ಎಚ್. ಕೋನರೆಡ್ಡಿ ಹೇಳಿದರು.
ಧಾರವಾಡ: ಕೇಂದ್ರ ಸರ್ಕಾರದ ಒತ್ತಡಕ್ಕೆ ಮಣಿದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಶನ್‌ಗೆ ಅನುಮತಿ ನೀಡಿದ್ದಾರೆ ಎಂದು ಶಾಸಕ ಎನ್.ಎಚ್. ಕೋನರೆಡ್ಡಿ ಹೇಳಿದರು.
ನಗರದಲ್ಲಿ ಮಾಧ್ಯಮದವರ ಜತೆ ಮಾತನಾಡಿ, ಕಾನೂನು ತಜ್ಞರು ಇಂತಹ ಅವಶ್ಯಕತೆ ಇರಲಿಲ್ಲ ಎಂದು ಹೇಳಿದ್ದಾರೆ. ಬಿಜೆಪಿ ಇಂತಹ ದುಸ್ಸಾಹಸಕ್ಕೆ ಕೈ ಹಾಕಬಾರದಿತ್ತು. ರಾಜ್ಯಪಾಲರಿಗೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಕೊಡುವ ಮನಸ್ಸಿರಲಿಲ್ಲ. ಕೇಂದ್ರ ಸರ್ಕಾರದ ಒತ್ತಡಕ್ಕೆ ಮಣಿದು ಅನುಮತಿ ಕೊಟ್ಟಿರಬಹುದು. ನಾವು ಈ ವಿಷಯದಲ್ಲಿ ಕಾನೂನು ಹೋರಾಟ ಮಾಡುತ್ತೇವೆ. ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಲು ಸಾಧ್ಯವಿಲ್ಲ ಎಂದು ತಿಳಿಸಿದರು.ಮೈಸೂರು ಜನಾಂದೋಲದಲ್ಲಿ 136 ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿ ನಿರ್ಣಯ ತೆಗೆದುಕೊಂಡಿದ್ದಾರೆ. ಅದರಂತೆ ಸಚಿವ ಸಂಪುಟ ಸಭೆಯಲ್ಲಿ ಒಂದು ನಿರ್ಣಯ ಪಾಸ್ ಮಾಡಿದ್ದಾರೆ. ಒಂಬತ್ತು ಸಂಸದರು, ಎಂಎಲ್‌ಸಿ, ರಾಜ್ಯಸಭಾ ಸದಸ್ಯರು ಪಕ್ಷದ ಹೈಕಮಾಂಡ್ ಸಹ ಇದಕ್ಕೆ ಒಪ್ಪಿದ್ದಾರೆ. ರಾಜ್ಯದ ಜನರೂ ಸಿದ್ದರಾಮಯ್ಯ ಸಿಎಂ ಆಗಿರಬೇಕೆಂಬ ಭಾವನೆ ಹೊಂದಿದ್ದಾರೆ. ಹಿಂಬಾಗಿಲಿನಿಂದ ಬಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೇಲೆ ಕ್ರಮಕ್ಕೆ ಪ್ರಯತ್ನಿಸಬೇಡಿ, ಹಾಗೇನಾದ್ರೂ ಮಾಡಿದರೆ, ಬಿಜೆಪಿ ಹೇಳಲು ಹೆಸರಿಲ್ಲದಂತೆ ಆಗುತ್ತದೆ ಎಂದು ವಾಗ್ದಾಳಿ ನಡೆಸಿದರು.
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕಲ್ಲು ಬಂಡೆಯಂತೆ ಬೆನ್ನಿಗೆ ನಿಲ್ಲುವುದಾಗಿ ಹೇಳಿದ್ದಾರೆ. ಆ. 19ಕ್ಕೆ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ಕೊಟ್ಟಿದ್ದಾರೆ. ನಾವೆಲ್ಲ ಸಿದ್ದರಾಮಯ್ಯ ಪರ ನಿಲ್ಲುತ್ತೇವೆ ಎಂದು ಸ್ಪಷ್ಟಪಡಿಸಿದರು.