ಸಾರಾಂಶ
ಸರ್ಕಾರ ವರ್ಗಾವಣೆ ದಂಧೆಯಲ್ಲಿ ಮುಳುಗಿದೆ ಎಂದು ಬಸವರಾಜ ರಾಯರಡ್ಡಿ ಎಲ್ಲಿ ಹೇಳಿದ್ದಾರೋ ನನಗೆ ಗೊತ್ತಿಲ್ಲ ಎಂದು ಸಚಿವರು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ಕೂಡ್ಲಿಗಿ: ಕಾಂಗ್ರೆಸ್ ಸರ್ಕಾರ ದಿವಾಳಿಯಾಗಿಲ್ಲ. ಖಜಾನೆಯೂ ಖಾಲಿಯಾಗಿಲ್ಲ. ಬಿಜೆಪಿಗರು ಸುಳ್ಳಿನ ಪಿತಾಮಹರು. ಅವರ ತಲೆಯಲ್ಲಿ ಮಿದುಳು ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
ಪಟ್ಟಣದಲ್ಲಿರುವ ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ಅವರ ಜನಸಂಪರ್ಕ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಬುಧವಾರ ಅವರು ಮಾತನಾಡಿದರು.ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣಕಾಸಿನ ವ್ಯವಹಾರದ ತನಿಖೆ ನಡೆಯುತ್ತಿದೆ. ತನಿಖೆ ನಂತರವೇ ಸತ್ಯ ತಿಳಿಯಲಿದೆ. ರಾಜ್ಯದಲ್ಲಿ ಬಿಜೆಪಿ ಆಡಳಿತಾವಧಿಯಲ್ಲಿ ಮುಡಾದಿಂದ ನಿವೇಶನ ಹಂಚಿಕೆಯಾಗಿದೆ. 40 ಪರ್ಸೆಂಟ್ ಕಮೀಷನ್ ದಂಧೆಯೂ ಬಿಜೆಪಿ ಅಧಿಕಾರಾವಧಿಯಲ್ಲೇ ನಡೆದಿದೆ. ರಾಜ್ಯ ಸರ್ಕಾರದ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸರ್ಕಾರ ವರ್ಗಾವಣೆ ದಂಧೆಯಲ್ಲಿ ಮುಳುಗಿದೆ ಎಂದು ಬಸವರಾಜ ರಾಯರಡ್ಡಿ ಎಲ್ಲಿ ಹೇಳಿದ್ದಾರೋ ನನಗೆ ಗೊತ್ತಿಲ್ಲ ಎಂದು ಸಚಿವರು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.ದೇಗುಲಕ್ಕೆ ಅನುದಾನ ಕೊಡಿ:
ಈ ಸಂದರ್ಭದಲ್ಲಿ ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ಕ್ಷೇತ್ರದಲ್ಲಿರುವ ದೇವಾಲಯಗಳ ಜೀರ್ಣೋದ್ಧಾರಕ್ಕೆ ಹೆಚ್ಚಿನ ಅನುದಾನ ನೀಡಬೇಕೆಂದು ಮುಜರಾಯಿ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಗುರುಸಿದ್ದನಗೌಡ, ಮುಖಂಡರಾದ ಕೆ.ಎಂ. ಶಶಿಧರ, ಕಾವಲಿ ಶಿವಪ್ಪನಾಯಕ ಇದ್ದರು.
ಮೊದಲ ಬಾರಿಗೆ ಕೂಡ್ಲಿಗಿ ಕ್ಷೇತ್ರಕ್ಕೆ ಆಗಮಿಸಿದ್ದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರನ್ನು ಶಾಸಕ ಡಾ.ಶ್ರೀನಿವಾಸ್ ಸನ್ಮಾನಿಸಿದರು.