ಬಿಜೆಪಿ ಮನೆ ಒಡೆದ ಬೊಮ್ಮಾಯಿ-ಸಚಿವ ಶಿವಾನಂದ ಪಾಟೀಲ ಟೀಕೆ

| Published : Apr 18 2024, 02:19 AM IST

ಸಾರಾಂಶ

ಬಸವರಾಜ ಬೊಮ್ಮಾಯಿ ಅವರಿಂದ ಬಿಜೆಪಿ ಒಡೆದ ಮನೆಯಾಗಿದೆ. ಆ ಪಕ್ಷದ ಮುಖಂಡರಲ್ಲಿನ ಪರಸ್ಪರ ವೈಮನಸ್ಸು ಮತ್ತು ನಮ್ಮ ಸರ್ಕಾರದ ಜನಪರ ಯೋಜನೆಗಳನ್ನು ಮೆಚ್ಚಿರುವ ರಾಜ್ಯದ ಜನತೆಯ ಬೆಂಬಲದಿಂದ ಉತ್ತರ ಕರ್ನಾಟಕ ಭಾಗ ಸೇರಿದಂತೆ ರಾಜ್ಯಾದ್ಯಂತ ಕಾಂಗ್ರೆಸ್‌ನಿಂದ ಹೆಚ್ಚಿನ ಸಂಸದರು ಗೆಲುವು ಸಾಧಿಸಲಿದ್ದಾರೆ.

ಹಾವೇರಿ: ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಂದ ಬಿಜೆಪಿ ಒಡೆದ ಮನೆಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಲೇವಡಿ ಮಾಡಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಅವರೊಂದಿಗೆ ನಾಮಪತ್ರ ಸಲ್ಲಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಮಾತನಾಡಿದ ಅವರು, ಬಸವರಾಜ ಬೊಮ್ಮಾಯಿ ಅವರು ಕೆ.ಎಸ್. ಈಶ್ವರಪ್ಪನವರಿಗೆ ಹೇಳದೇ ಹಾವೇರಿ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ. ಮುಖ್ಯಮಂತ್ರಿ ಹುದ್ದೆಯ ಅಧಿಕಾರ ನಿರ್ವಹಿಸಿದವರು ಮತ್ತೆ ಆಸೆ ಪಡುವುದು ಎಷ್ಟರ ಮಟ್ಟಿಗೆ ಸರಿ. ಜೀವನದಲ್ಲಿ ಅಂತಿಮ ಗುರಿ ತಲುಪಿದ ಬಳಿಕ ಮತ್ತಷ್ಟು ದೊಡ್ಡವನಾಗಬೇಕು ಹೊರತು ಸಣ್ಣತನ ತೋರಿಸಬಾರದು. ಹೊಸಬರಿಗೆ ಅವಕಾಶ ಮಾಡಿಕೊಟ್ಟು ದೊಡ್ಡವರಾಗಬೇಕಿತ್ತು ಎಂದರು.

ಆ ಪಕ್ಷದ ಮುಖಂಡರಲ್ಲಿನ ಪರಸ್ಪರ ವೈಮನಸ್ಸು ಮತ್ತು ನಮ್ಮ ಸರ್ಕಾರದ ಜನಪರ ಯೋಜನೆಗಳನ್ನು ಮೆಚ್ಚಿರುವ ರಾಜ್ಯದ ಜನತೆಯ ಬೆಂಬಲದಿಂದ ಉತ್ತರ ಕರ್ನಾಟಕ ಭಾಗ ಸೇರಿದಂತೆ ರಾಜ್ಯಾದ್ಯಂತ ಕಾಂಗ್ರೆಸ್‌ನಿಂದ ಹೆಚ್ಚಿನ ಸಂಸದರು ಗೆಲುವು ಸಾಧಿಸಲಿದ್ದಾರೆ ವಿಶ್ವಾಸ ವ್ಯಕ್ತಪಡಿಸಿದರು.

ಹಾವೇರಿ, ಬಾಗಲಕೋಟೆ ಮತ್ತು ವಿಜಯಪುರದಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸುವರು ಎಂಬ ವಿಶ್ವಾಸವಿದೆ. ಜೊತೆಗೆ ಲೋಕಸಭಾ ಚುನಾವಣೆ ಬಳಿಕ ರಾಜ್ಯದಲ್ಲಿ ಯಾವುದೇ ಬದಲಾವಣೆ ಆಗಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಮುಂದುವರೆಯುತ್ತಾರೆ ಎಂದರು. ಸಚಿವ ಎಚ್.ಕೆ. ಪಾಟೀಲ ಮಾತನಾಡಿ, ರಾಜ್ಯಾದ್ಯಂತ ಕಾಂಗ್ರೆಸ್ ಪರ ವಾತಾವರಣವಿದೆ. ವಿಶೇಷವಾಗಿ ಉತ್ತರ ಕರ್ನಾಟಕ ಭಾಗದಲ್ಲಿ ನಮ್ಮ ಪಕ್ಷ ಅತಿ ಹೆಚ್ಚಿನ ಸ್ಥಾನ ಗಳಿಸಲಿದೆ. ಏ.23ರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉತ್ತರ ಕರ್ನಾಟಕ ಭಾಗದಲ್ಲಿ ಲೋಕಸಭಾ ಚುನಾವಣಾ ಪ್ರಚಾರ ಮಾಡುವರು. ಚುನಾವಣೆ ಬಳಿಕ ರಾಜ್ಯದಲ್ಲಿ ನಮ್ಮ ಸರ್ಕಾರ ಮತ್ತಷ್ಟು ಗಟ್ಟಿಯಾಗಲಿದೆ. ಅಷ್ಟೇ ಅಲ್ಲದೇ ಕೇಂದ್ರದಲ್ಲಿ ನಮ್ಮ ಪಕ್ಷದ ನೇತೃತ್ವದಲ್ಲಿ ಒಕ್ಕೂಟ ಬಹುಮತ ಗಳಿಸಲಿದೆ ಎಂದರು.ಮಹಿಳೆಯರನ್ನು ಸ್ವಾವಲಂಬಿ ಮಾಡಿರುವ ನಮ್ಮ ಸರ್ಕಾರದ ಬಗ್ಗೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ನೀಡಿರುವ ಹೇಳಿಕೆ ಅಕ್ಷಮ್ಯ. ಅವರು ವಿಷಾದ ವ್ಯಕ್ತಪಡಿಸಿದರೆ ಸಾಲದು. ಮಹಿಳೆಯರ ಕಾಲು ಬಿದ್ದು ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಅವರ ರಾಜಕೀಯ ಭವಿಷ್ಯಕ್ಕೆ ಮುಳುವಾಗಬಹುದು ಎಂದು ಎಚ್ಚರಿಸಿದರು.