ಬಿಜೆಪಿಯವರು ನರೇಗಾ ಯೋಜನೆಯಲ್ಲಿ ಮಹಾತ್ಮ ಗಾಂಧಿ ಅವರ ಹೆಸರು ತೆಗೆಯಲು ಮುಂದಾಗಿರುವುದು ದುರಂತ ಸಂಗತಿಯಾಗಿದ್ದು, ಬಿಜೆಪಿಯವರು ಮಹಾತ್ಮ ಗಾಂಧೀಜಿ ಹಾಗೂ ಅವರ ಸಿದ್ಧಾಂತದ ವಿರೋಧಿಗಳು ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ಆಕ್ರೋಶ ವ್ಯಕ್ತಪಡಿಸಿದರು.

ಹಾವೇರಿ: ಬಿಜೆಪಿಯವರು ನರೇಗಾ ಯೋಜನೆಯಲ್ಲಿ ಮಹಾತ್ಮ ಗಾಂಧಿ ಅವರ ಹೆಸರು ತೆಗೆಯಲು ಮುಂದಾಗಿರುವುದು ದುರಂತ ಸಂಗತಿಯಾಗಿದ್ದು, ಬಿಜೆಪಿಯವರು ಮಹಾತ್ಮ ಗಾಂಧೀಜಿ ಹಾಗೂ ಅವರ ಸಿದ್ಧಾಂತದ ವಿರೋಧಿಗಳು ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ಆಕ್ರೋಶ ವ್ಯಕ್ತಪಡಿಸಿದರು.ಇಲ್ಲಿನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಮನರೇಗಾ ಯೋಜನೆಯ ಹೆಸರು ಮತ್ತು ಸ್ವರೂಪದ ಬದಲಾವಣೆ ಮೂಲಕ ಉದ್ಯೋಗ ಖಾತ್ರಿ ಯೋಜನೆಯ ಆತ್ಮಕ್ಕೆ ಕೊಡಲಿಯೇಟು ನೀಡಿದೆ ಎಂದು ಕಿಡಿಕಾರಿದರು.ಪ್ರತಿಯೊಬ್ಬರ ಹೃದಯದಲ್ಲಿ ಗಾಂಧೀಜಿಯವರು ಶಾಶ್ವತವಾಗಿ ನೆಲೆಸಿದ್ದಾರೆ. ಜನವರಿ 5ರಿಂದ ದೇಶಾದ್ಯಂತ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಬಚಾವ್ ಆಂದೋಲನವನ್ನು ಕೈಗೊಳ್ಳಲಾಗುತ್ತಿದೆ. ಬಿಜೆಪಿ ಕೊನೆ ದಿನಗಳು ಪ್ರಾರಂಭವಾಗಿದೆ. ನಮ್ಮ ದೇಶದ, ಸಂವಿಧಾನ, ಪ್ರಜಾಪ್ರಭುತ್ವ ವ್ಯವಸ್ಥೆ ಬದಲಾಯಿಸಲು ಬಿಜೆಪಿಯಿಂದ ಸಾಧ್ಯವಿಲ್ಲ ಎಂದರು.ಇಂದು ನಾವು 141ನೇ ವರ್ಷದ ಕಾಂಗ್ರೆಸ್ ಪಕ್ಷದ ಸಂಸ್ಥಾಪನಾ ದಿನ ಆಚರಿಸುತ್ತಿದ್ದೇವೆ. ಕಾಂಗ್ರೆಸ್‌ನ ಇತಿಹಾಸವು ಈ ದೇಶದ ಇತಿಹಾಸ. ಕಾಂಗ್ರೆಸ್ ಕೇವಲ ಪಕ್ಷವಲ್ಲ, ಕಾಂಗ್ರೆಸ್ ಹೋರಾಟ-ಚಳವಳಿ ಹಾಗೂ ಕಾಂಗ್ರೆಸ್ ಜನರ ಶಕ್ತಿ. ಕಾಂಗ್ರೆಸ್ ಪಕ್ಷ ಭಾರತದ ಆತ್ಮ. ಕಾಂಗ್ರೆಸ್ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹಾನ್ ಚಳವಳಿ, ಇದು ದಮನಿತರ ಧ್ವನಿ, ದುರ್ಬಲರ ಆಶ್ರಯ ಎಂದು ಬಣ್ಣಿಸಿದರು.

ಕಾಂಗ್ರೆಸ್ ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ, ರಾಷ್ಟ್ರೀಯ ಏಕತೆ ಮತ್ತು ಪ್ರಜಾಪ್ರಭುತ್ವದ ಸ್ಥಾಪನೆಯಲ್ಲಿ ಮತ್ತು ದೇಶದ ಅಭಿವೃದ್ಧಿಯಲ್ಲಿ ನಿರ್ಣಾಯಕ ಪಾತ್ರ ವಹಿಸಿದೆ. ಕಾಂಗ್ರೆಸ್ ಪಕ್ಷ ಎಲ್ಲಾ ಜಾತಿ ಜನಾಂಗದವರಿಗೆ ಸಮಾನ ಅವಕಾಶ ಕಲ್ಪಿಸಿ, ಭರವಸೆಯ ಬೆಳಕಾಗಿ ದೇಶವನ್ನು ಮುನ್ನಡೆಸಿದೆ ಎಂದರು.ಈ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತ, ಇತಿಹಾಸ ಹಾಗೂ ದೇಶದ ಐಕ್ಯತೆಗಾಗಿ ಪ್ರಾಣ ತ್ಯಾಗ ಮಾಡಿದ ಮಹಾತ್ಮ ಗಾಂಧಿ, ಇಂದಿರಾ ಗಾಂಧಿ, ರಾಜೀವ್ ಗಾಂಧಿ ಅವರ ವಿಚಾರ ಧಾರೆಗಳನ್ನು ನಮ್ಮ ಕಾಂಗ್ರೆಸ್ ಕಾರ್ಯಕರ್ತರು ಜನರಿಗೆ ಮುಟ್ಟಿಸುವ ಕೆಲಸ ಮಾಡಬೇಕು ಹಾಗೂ ಕೇಂದ್ರ ಸರ್ಕಾರದ ಭ್ರಷ್ಟಾಚಾರ, ನಿರುದ್ಯೋಗ ಮತ್ತು ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಹೋರಾಡಿ ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ಶ್ರಮಿಸಬೇಕು ಎಂದರು. ಈ ವೇಳೆ ಉಪ ಸಭಾಪತಿ ರುದ್ರಪ್ಪ ಲಮಾಣಿ, ಜಿಲ್ಲಾ ಗ್ಯಾರಂಟಿ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಎಂ.ಎಂ. ಹಿರೇಮಠ, ಡಿಸಿಸಿ ಅಧ್ಯಕ್ಷ ಸಂಜೀವ ನೀರಲಗಿ, ಹೆಸ್ಕಾಂ ಅಧ್ಯಕ್ಷ ಅಜ್ಜಂಪೀರ್ ಖಾದ್ರಿ, ಹುಡಾ ಅಧ್ಯಕ್ಷರಾದ ಎಸ್‌ಎಫ್‌ಎನ್ ಗಾಜೀಗೌಡ್ರ, ಸೇರಿದಂತೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಇತರರಿದ್ದರು.ನಮ್ಮ ರಾಜ್ಯ ಸರ್ವಜನಾಂಗದ ಶಾಂತಿಯ ತೋಟ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಮ್ಮ ಸರ್ಕಾರದ ಪಂಚ ಗ್ಯಾರಂಟಿಗಳಿಂದ ಎಲ್ಲ ವರ್ಗದವರ ಹಿತ ಕಾಪಾಡುವ ಕಾರ್ಯ ನಡೆದಿದೆ. ಇದರಿಂದ ಜನರು ನೆಮ್ಮದಿಯಿಂದ ಜೀವಿಸುತ್ತಿದ್ದಾರೆ. ನಮ್ಮ ಸರ್ಕಾರ ಯಶಸ್ವಿಯಾಗಿ 2.5 ವರ್ಷ ಪೂರೈಸಿದೆ. ನಾವು ನುಡಿದಂತೆ ನಡೆದಿದ್ದು ಇಂದು ಇಡೀ ದೇಶವೇ ಕರ್ನಾಟಕದತ್ತ ತಿರುಗಿ ನೋಡುತ್ತಿದೆ. 2028ರಲ್ಲಿ ಮತ್ತೆ ನಮ್ಮ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು ರಾಹುಲ್ ಗಾಂಧಿಯವರು ಈ ದೇಶದ ಪ್ರಧಾನಿ ಆಗಲಿದ್ದಾರೆ ಎಂದು ವಿಪ ಮುಖ್ಯ ಸಚೇತಕ ಸಲೀಂ ಅಹ್ಮದ್ ಹೇಳಿದರು.