ವಕ್ಫ್‌ ವಿಚಾರದಲ್ಲಿ ಜನರ ದಿಕ್ಕು ತಪ್ಪಿಸುತ್ತಿರುವ ಬಿಜೆಪಿ: ಸಿಎಂ ಸಿದ್ದರಾಮಯ್ಯ

| Published : Nov 05 2024, 12:37 AM IST

ವಕ್ಫ್‌ ವಿಚಾರದಲ್ಲಿ ಜನರ ದಿಕ್ಕು ತಪ್ಪಿಸುತ್ತಿರುವ ಬಿಜೆಪಿ: ಸಿಎಂ ಸಿದ್ದರಾಮಯ್ಯ
Share this Article
  • FB
  • TW
  • Linkdin
  • Email

ಸಾರಾಂಶ

ವಕ್ಫ್ ಆಸ್ತಿ ವಿಚಾರ ನಿನ್ನೆ ಮೊನ್ನೆಯದಲ್ಲ. ಬಿಜೆಪಿ ಸರ್ಕಾರದ ಕಾಲದಲ್ಲೂ ನೋಟಿಸ್‌ ನೀಡಲಾಗಿದೆ. ಬಿಜೆಪಿಯ ಅವಧಿಯಲ್ಲಿ 216 ಪ್ರಕರಣಗಳಲ್ಲಿ ನೋಟಿಸ್‌ ಕೊಟ್ಟಿದ್ದರು. ಬಿ.ಎಸ್‌. ಯಡಿಯೂರಪ್ಪ, ಸದಾನಂದ ಗೌಡ, ಜಗದೀಶ ಶೆಟ್ಟರ್‌, ಎಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಗಳಾಗಿದ್ದ ವೇಳೆಯೂ ನೋಟಿಸ್‌ ಕೊಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಹುಬ್ಬಳ್ಳಿ:

ವಕ್ಫ್ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ನಮ್ಮ ಸರ್ಕಾರ ರೈತರ ಪರವಿದೆ. ಈ ವಿಚಾರವಾಗಿ ನೋಟಿಸ್‌ ನೀಡಿದ್ದರೆ ಮರಳಿ ಪಡೆಯುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಆದರೂ ಬಿಜೆಪಿ ರಾಜಕಾರಣಕ್ಕಾಗಿ ಹೋರಾಟ ಮಾಡುತ್ತಿದೆ. ಬಿಜೆಪಿ ಕಾಲದಲ್ಲಿ ನೋಟಿಸ್ ನೀಡಿರುವ ಕುರಿತು ಏಕೆ ಮಾತನಾಡುತ್ತಿಲ್ಲ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹರಿಹಾಯ್ದರು.

ಇಲ್ಲಿನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರೈತರು ಮುಸ್ಲಿಮರೇ ಇರಲಿ, ಹಿಂದೂಗಳೇ ಇರಲಿ, ಕ್ರಿಶ್ಚಿಯನ್ನರೇ ಇರಲಿ. ಯಾವ ರೈತರನ್ನೂ ಒಕ್ಕಲೆಬ್ಬಿಸದಂತೆ ಆದೇಶಿಸಲಾಗಿದೆ. ಯಾವುದೇ ಕಾರಣಕ್ಕೂ ರೈತರು ಆತಂಕ ಪಡುವ ಅವಶ್ಯಕತೆಯಿಲ್ಲ ಎಂದು ಸ್ಪಷ್ಟಪಡಿಸಿದರು.

ಬಿಜೆಪಿ ಅವಧಿಯಲ್ಲೂ ನೋಟಿಸ್‌:

ವಕ್ಫ್ ಆಸ್ತಿ ವಿಚಾರ ನಿನ್ನೆ ಮೊನ್ನೆಯದಲ್ಲ. ಬಿಜೆಪಿ ಸರ್ಕಾರದ ಕಾಲದಲ್ಲೂ ನೋಟಿಸ್‌ ನೀಡಲಾಗಿದೆ. ಬಿಜೆಪಿಯ ಅವಧಿಯಲ್ಲಿ 216 ಪ್ರಕರಣಗಳಲ್ಲಿ ನೋಟಿಸ್‌ ಕೊಟ್ಟಿದ್ದರು. ಬಿ.ಎಸ್‌. ಯಡಿಯೂರಪ್ಪ, ಸದಾನಂದ ಗೌಡ, ಜಗದೀಶ ಶೆಟ್ಟರ್‌, ಎಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಗಳಾಗಿದ್ದ ವೇಳೆಯೂ ನೋಟಿಸ್‌ ಕೊಟ್ಟಿದ್ದಾರೆ. ಅಂದು ನೀಡಲಾಗಿದ್ದ ನೋಟಿಸ್‌ ಕುರಿತು ಈಗ ಬಿಜೆಪಿಯವರು ಏಕೆ ಮಾತನಾಡುತ್ತಿಲ್ಲ? ಈಗ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಎಲ್ಲರೂ ಉಲ್ಟಾ ಹೊಡೆಯುತ್ತಿದ್ದಾರೆ. ಬಿಜೆಪಿಯ ಈ ಡಬ್ಬಲ್ ಗೇಮ್ ವಿಚಾರವನ್ನು ಜನರಿಗೆ ನಾವು ತಲುಪಿಸುತ್ತಿದ್ದೇವೆ ಎಂದರು.

ರಾಜಕೀಯ ಪ್ರೇರಿತ:

ವಕ್ಫ್ ವಿಚಾರವಾಗಿ ಬಿಜೆಪಿ ನಡೆಸುತ್ತಿರುವ ಹೋರಾಟ ಕೇವಲ ರಾಜಕೀಯ ಪ್ರೇರಿತ. ಅವರು ಎಂದಿಗೂ ವಿಷಯಾಧಾರಿತ ಹೋರಾಟ ಮಾಡುವುದಿಲ್ಲ. ಬರೀ ವಿವಾದಾಸ್ಪದ, ಗೊಂದಲ ಸೃಷ್ಟಿ ಮಾಡುವ ಹೋರಾಟ ಮಾಡುತ್ತಾರೆ ಎಂದು ಆರೋಪಿಸಿದರು.

ಕಾಂಗ್ರೆಸ್‌ ಅಭ್ಯರ್ಥಿ ಗೆಲುವು:

ಶಿಗ್ಗಾಂವಿ ಕ್ಷೇತ್ರದಲ್ಲಿ ನಮ್ಮ ಪಕ್ಷದ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ. ಈ ಬಾರಿ ಮೂರು ದಿನ ಕ್ಷೇತ್ರದಲ್ಲಿ ಪ್ರಚಾರ ಮಾಡುತ್ತೇನೆ. ಈ ಕ್ಷೇತ್ರದಲ್ಲಿ ನಮ್ಮ ಪಕ್ಷಕ್ಕೆ ಶಕ್ತಿ ಇದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿ ಹೆಚ್ಚಿನ ಮತ ಪಡೆದಿದ್ದಾರೆ. ಹೀಗಾಗಿ, ಈ ಉಪಚುನಾವಣೆಯಲ್ಲಿ ನಮ್ಮ ಅಭ್ಯರ್ಥಿ ಗೆಲ್ಲುವ ವಿಶ್ವಾಸವಿದೆ ಎಂದರು.