ಸಾರಾಂಶ
ಹೊಸಪೇಟೆ: ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಮಾಡಿಕೊಂಡಿವೆ. ಉಭಯ ಪಕ್ಷಗಳು ಬಳ್ಳಾರಿ ಹಾಗೂ ವಿಜಯನಗರ ಅವಳಿ ಜಿಲ್ಲೆಗಳಲ್ಲಿ ಸಮನ್ವಯದೊಂದಿಗೆ ಲೋಕಸಭೆ ಚುನಾವಣೆಯಲ್ಲಿ ಕೆಲಸ ಮಾಡುವ ಮೂಲಕ ಶ್ರೀರಾಮುಲು ಅವರನ್ನು ಗೆಲ್ಲಿಸಿ ದಿಲ್ಲಿಗೆ ಕಳುಹಿಸಬೇಕು ಎಂದು ವಿಜಯನಗರದ ಬಿಜೆಪಿ ಜಿಲ್ಲಾಧ್ಯಕ್ಷ ಚನ್ನಬಸವನಗೌಡ ಪಾಟೀಲ್ ಹೇಳಿದರು.ನಗರದ ಬಿಜೆಪಿ ಕಚೇರಿಯಲ್ಲಿ ಬುಧವಾರ ನಡೆದ ಜೆಡಿಎಸ್ ಹಾಗೂ ಬಿಜೆಪಿ ಸಮನ್ವಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಲೋಕಸಭೆ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರಗಳಲ್ಲಿ ಜೆಡಿಎಸ್ ಮೂರು ಕ್ಷೇತ್ರಗಳಲ್ಲಿ ಹಾಗೂ ಬಿಜೆಪಿ 25 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿದೆ. ರಾಜ್ಯ ಕಾಂಗ್ರೆಸ್ ಸರ್ಕಾರದ ವೈಫಲ್ಯವನ್ನು ಮತದಾರರ ಬಳಿ ಬಿಂಬಿಸಬೇಕಿದೆ. ಜೊತೆಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸಾಧನೆಯನ್ನು ಪ್ರಚುರಪಡಿಸಬೇಕಿದೆ. ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತರಲ್ಲಿ ಸಮನ್ವಯ ಸಾಧಿಸಿಕೊಂಡು ನಾವು ಲೋಕಸಭೆಯಲ್ಲಿ ಕೆಲಸ ಮಾಡಬೇಕಿದೆ ಎಂದರು.
ಬಿಜೆಪಿ ರಾಜ್ಯ ಖಜಾಂಚಿ ಸಿದ್ದಾರ್ಥ ಸಿಂಗ್ ಮಾತನಾಡಿ, ಬಳ್ಳಾರಿ ಲೋಕಸಭೆ ಚುನಾವಣೆಯಲ್ಲಿ ಶ್ರೀರಾಮುಲು ಅವರನ್ನು ಹೆಚ್ಚಿನ ಮತಗಳಿಂದ ಗೆಲ್ಲಿಸಬೇಕಿದೆ. ಜೆಡಿಎಸ್‌ನ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಕೂಡ ಈ ಚುನಾವಣೆಯಲ್ಲಿ ಕೈಜೋಡಿಸಿರುವುದು, ಬಿಜೆಪಿಗೆ ಮತ್ತಷ್ಟು ಬಲ ತಂದಿದೆ. ಈ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಒಗ್ಗೂಡಿ ತಮ್ಮ ಶಕ್ತಿ ತೋರಿಸಬೇಕಿದೆ ಎಂದರು.ಜೆಡಿಎಸ್‌ನ ತಾಲೂಕಾಧ್ಯಕ್ಷ ಸೋಮಶೇಖರ್ ಮಾತನಾಡಿ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಬಿಜೆಪಿಯೊಂದಿಗೆ ಜತೆಗೂಡಿ ಕೆಲಸ ಮಾಡಲಿದ್ದಾರೆ. ಈಗಾಗಲೇ ನಮ್ಮ ಕಾರ್ಯಕರ್ತರಿಗೆ ಸಂದೇಶ ರವಾನಿಸಲಾಗಿದೆ ಎಂದರು.
ಬಿಜೆಪಿ ಮಂಡಳ ಅಧ್ಯಕ್ಷ ಶಂಕರ ಮೇಟಿ ಮಾತನಾಡಿ, ಬಿಜೆಪಿ ಹಾಗೂ ಜೆಡಿಎಸ್‌ನ ಕಾರ್ಯಕರ್ತರು ಜತೆಗೂಡಿ ಕೆಲಸ ಮಾಡಲಿದ್ದಾರೆ. ಸಮನ್ವಯ, ಸಂಪರ್ಕದೊಂದಿಗೆ ಖಂಡಿತ ಮತದಾರರ ಮನೆ, ಮನೆಗೆ ತೆರಳಿ ಕಾಂಗ್ರೆಸ್‌ಅನ್ನು ಸೋಲಿಸಿ ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಶ್ರೀರಾಮುಲು ಅವರನ್ನು ಗೆಲ್ಲಿಸುತ್ತೇವೆ ಎಂದರು.ಉಭಯ ಪಕ್ಷಗಳ ಮುಖಂಡರಾದ ಕಪ್ಲಿ ಚಂದ್ರಶೇಖರ, ರೇವಣ ಸಿದ್ದಪ್ಪ, ಕೃಷ್ಣ, ಮಧುರಚನ್ನಶಾಸ್ತ್ರಿ, ಮಂಜುನಾಥ ಮತ್ತಿತರರಿದ್ದರು.