ಸಾರಾಂಶ
ಕನ್ನಡಪ್ರಭ ವಾರ್ತ ಚಾಮರಾಜನಗರ
ಬಿಜೆಪಿ ಮತ್ತು ಜೆಡಿಎಸ್ ಮುಖಂಡರಿಗೆ ಸಿದ್ದರಾಮಯ್ಯ ಅವರ ರಾಜೀನಾಮೆ ಕೇಳುವ ಯಾವ ನೈತಿಕ ಹಕ್ಕು ಇಲ್ಲ ಎಂದು ಕೆಪಿಸಿಸಿ ಉಪಾಧ್ಯಕ್ಷ, ಡಿಸಿಸಿ ಉಸ್ತುವಾರಿ, ವಿಧಾನ ಪರಿಷತ್ತಿನ ಮಾಜಿ ಸಭಾಪತಿ ವಿ.ಎಸ್.ಸುದರ್ಶನ್ ಹೇಳಿದರು.ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದ ಜನರು ಯಾರು ಸಹ ಸಿದ್ದರಾಮಯ್ಯ ಅವರ ರಾಜೀನಾಮೆ ಬಯಸುತ್ತಿಲ್ಲ. ಆದರೆ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷವನ್ನು ತೇಜೋವಧೆ ಮಾಡಬೇಕೆನ್ನುವ ಉದ್ದೇಶದಿಂದ ಮುಡಾ ನೆಪವನ್ನು ಇಟ್ಟುಕೊಂಡು ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ರಾಜೀನಾಮೆ ಕೇಳುತ್ತಿದ್ದಾರೆ. ಇವರಿಗೆ ರಾಜೀನಾಮೆ ಕೇಳುವ ಯಾವುದೇ ನೈತಿಕ ಹಕ್ಕಿಲ್ಲ ಎಂದು ತಿಳಿಸಿದರು.ಸಿಎಂ ಸಿದ್ದರಾಮಯ್ಯ ಅವರ ಅರ್ಜಿ ವಜಾಗೊಳಿಸಿ ಹೈಕೋರ್ಟ್ ತೀರ್ಪು ನೀಡಿದೆ. ನ್ಯಾಯಾಲಯದ ತೀರ್ಪನ್ನು ನಾವು ಗೌರವಿಸುತ್ತೇವೆ. ಆದರೆ ಇದು ಅಂತಿಮವಲ್ಲ. ಈ ಸಂಬಂಧ ಹೈಕೋರ್ಟ್ ಮುಖ್ಯ ನ್ಯಾಯಾಧೀಶರಲ್ಲಿ ಮನವಿ ಮಾಡಿಕೊಳ್ಳುವ ಅವಕಾಶವಿದೆ. ಹಾಗೂ ಅಂತಿಮವಾಗಿ ಸುಪ್ರೀಂ ಕೋರ್ಟ್ ನಲ್ಲಿಯೂ ಮನವಿ ಮಾಡಿಕೊಳ್ಳುವ ಅವಕಾಶವಿದೆ ಎಂದರು.ಬಿಜೆಪಿ ಮತ್ತು ಜೆಡಿಎಸ್ ನವರು ಉದ್ದೇಶ ಪೂರಕವಾಗಿ ಸಿದ್ದರಾಮಯ್ಯ ಅವರಿಗೆ ಮುಜುಗರವನ್ನು ಉಂಟುಮಾಡಲು, ಅವರ ವ್ಯಕ್ತಿತ್ವಕ್ಕೆ ಮಸಿ ಬಳೆಯುವ ಕೆಲಸ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರು ಜನ ಸಮೂಹದ ನಾಯಕರಾಗಿದ್ದಾರೆ. ಅವರು ಪ್ರಥಮ ಬಾರಿಗೆ ಸಿಎಂ ಆಗಿದ್ದ ಸಂದರ್ಭದಲ್ಲಿ ರಾಜ್ಯದ ಜನತೆಗೆ ನೀಡಿದ 165 ಭರವಸೆಗಳಲ್ಲಿ 156 ಭರವಸೆಗಳನ್ನು ಈಡೇರಿಸಿದ್ದರು. ಈ ಬಾರಿಯೂ ಸಹ ರಾಷ್ಟ್ರ ನಾಯಕರ ಮಾರ್ಗದರ್ಶನದಲ್ಲಿ ಜಾರಿಗೊಳಿಸಿದ 5 ಗ್ಯಾರಂಟಿ ಯೋಜನೆಗಳನ್ನು ರಾಜ್ಯದಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಳಿಸಿದ್ದಾರೆ. ಬಿಜೆಪಿಯವರು ಗ್ಯಾರಂಟಿ ಯೋಜನಗಳನ್ನು ಜಾರಿಗೊಳಿಸಲು ಸಾಧ್ಯವಿಲ್ಲ ಎಂದು ವ್ಯಂಗ್ಯವಾಗಿ ಹೇಳುತ್ತಿದ್ದರು. ಆದರೆ ಸಿದ್ದರಾಮಯ್ಯ ಅವರು 5 ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿರುವುದನ್ನು ಸಹಿಸದ ಬಿಜೆಪಿ ಮತ್ತು ಜೆಡಿಎಸ್‌ನವರು ಇಲ್ಲ ಸಲ್ಲ ಸಲ್ಲದ ಆರೋಪ ಮಾಡುವುದರಲ್ಲಿ ನಿರತರಾಗಿದ್ದಾರೆ. ಆದರೆ ಬಿಜೆಪಿಯವರು ನಡೆಸಿದ ಐದು ವರ್ಷದ ಆಡಳಿತದಲ್ಲಿ ಕರ್ನಾಟಕದ ಆಡಳಿತವನ್ನು ಅಧ್ವಾನ ಮಾಡಿದರು ಎಂದ ಅವರು, ಬಿಜೆಪಿಯವರು ಹಾಗೂ ಜೆಡಿಎಸ್‌ನವರು ತಮ್ಮ ಆಡಳಿತದ ಅವಧಿಯಲ್ಲಿ ಯಾವ ಜನಪರ ಯೋಜನೆಗಳನ್ನು ಜಾರಿಗೊಳಿಸಿದ್ದಾರೆ ಎಂದು ಜನರಿಗೆ ತಿಳಿಸಲಿ ಎಂದು ಸವಾಲು ಹಾಕಿದರು. ಅಡ್ಡ ಮತದಾನ ಮಾಡಿದ ನಾಲ್ವರು ಸದಸ್ಯರ ಅಮಾನತು:
ಚಾಮರಾಜನಗರ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಆಯ್ಕೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ನಾಲ್ವರು ಸದಸ್ಯರು ಪಕ್ಷ ವಿರೋಧಿ ಚಟುವಟಿಕೆ ನಡೆಸಿ ಬಿಜೆಪಿಗೆ ಮತದಾನ ಮಾಡಿದ್ದಾರೆ. ಈ ನಾಲ್ವರ ವಿರುದ್ಧ ಪಕ್ಷದ ವತಿಯಿಂದ ಕ್ರಮ ಕೈಗೊಂಡಿದ್ದು, ಅವರನ್ನು ಅಮಾನತ್ತಿನಲ್ಲಿ ಇಡಲಾಗಿದೆ. ಮುಂದಿನ ದಿನಗಳಲ್ಲಿ ಈ ನಾಲ್ವರ ವಿರುದ್ಧ ವಿಚಾರಣೆ ನಡೆಸಿ ಪಕ್ಷದ ಶಿಸ್ತು ಸಮಿತಿ ಸೂಕ್ತ ಕ್ರಮಕೈಗೊಳ್ಳಲಿದೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ.ಮರಿಸ್ವಾಮಿ, ಮಾಜಿ ಶಾಸಕ ಜಿ.ಎನ್. ನಂಜುಂಡಸ್ವಾಮಿ, ಕೆಪಿಸಿಸಿ ಕಾರ್ಯದರ್ಶಿ ಎಸ್.ಸಿ.ಬಸವರಾಜ್, ಚೂಡಾ ಅಧ್ಯಕ್ಷ ಮಹಮದ್ ಅಸ್ಗರ್ ಮುನ್ನ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ಚಂದ್ರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಿಕ್ಕಮಹದೇವ್ ಹಾಜರಿದ್ದರು.