ಅಧಿವೇಶನದ ಮೊದಲ ದಿನ ಬಿಜೆಪಿ, ಜೆಡಿಎಸ್‌ ಪ್ರತಿಭಟನಾ ಮೆರವಣಿಗೆ

| Published : Mar 04 2025, 12:33 AM IST

ಅಧಿವೇಶನದ ಮೊದಲ ದಿನ ಬಿಜೆಪಿ, ಜೆಡಿಎಸ್‌ ಪ್ರತಿಭಟನಾ ಮೆರವಣಿಗೆ
Share this Article
  • FB
  • TW
  • Linkdin
  • Email

ಸಾರಾಂಶ

ರಾಜ್ಯಪಾಲರ ಅಧಿಕಾರ ಮೊಟಕುಗೊಳಿಸಿದ ಕಾಂಗ್ರೆಸ್‌ ಸರ್ಕಾರದ ವಿರುದ್ಧ ವಿಧಾನಮಂಡಲದ ಜಂಟಿ ಅಧಿವೇಶನದ ಮೊದಲ ದಿನವೇ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್‌ ಶಾಸಕರು ಜಂಟಿಯಾಗಿ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಕನ್ನಡಪ್ರಭ ವಾರ್ತೆ ಬೆಂಗಳೂರು

ರಾಜ್ಯಪಾಲರ ಅಧಿಕಾರ ಮೊಟಕುಗೊಳಿಸಿದ ಕಾಂಗ್ರೆಸ್‌ ಸರ್ಕಾರದ ವಿರುದ್ಧ ವಿಧಾನಮಂಡಲದ ಜಂಟಿ ಅಧಿವೇಶನದ ಮೊದಲ ದಿನವೇ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್‌ ಶಾಸಕರು ಜಂಟಿಯಾಗಿ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಸೋಮವಾರ ಬೆಳಗ್ಗೆ ಶಾಸಕರ ಭ‍ವನದಿಂದ ವಿಧಾನಸೌಧದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಉಭಯ ಪಕ್ಷಗಳ ಶಾಸಕರು ಭಿತ್ತಿಫಲಕಗಳನ್ನು ಪ್ರದರ್ಶಿಸಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ವಿಶ್ವವಿದ್ಯಾಲಯದ ಕುಲಪತಿ ನೇಮಕ ಸಂಬಂಧ ರಾಜ್ಯಪಾಲರಿಗೆ ಇರುವ ಅಧಿಕಾರವನ್ನು ರದ್ದುಪಡಿಸಿ, ಮುಖ್ಯಮಂತ್ರಿಗೆ ನೀಡುವ ಉದ್ದೇಶ ಹೊಂದಿರುವ ‘ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ವಿಶ್ವವಿದ್ಯಾಲಯ ತಿದ್ದುಪಡಿ ಮಸೂದೆ–2024’ಗೆ ಮಿತ್ರಪಕ್ಷಗಳು ಇದೇ ವೇಳೆ ತೀವ್ರ ವಿರೋಧ ವ್ಯಕ್ತಪಡಿಸಿದರು.

ವಿಶ್ವವಿದ್ಯಾಲಯಗಳ ಕುಲಪತಿ ಮತ್ತು ವಿವಿಧ ನೇಮಕಾತಿಗಳಲ್ಲಿ ರಾಜ್ಯಪಾಲರ ಅಧಿಕಾರವನ್ನು ಮೊಟಕುಗೊಳಿಸಲು ಸರ್ಕಾರ ಯತ್ನಿಸುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರವು ನೀಚ ರಾಜಕಾರಣದಲ್ಲಿ ತೊಡಗಿದೆ ಎಂದು ಪ್ರತಿಭಟನಾಕಾರರು ಕಿಡಿಕಾರಿದರು.

ಈ ವೇಳೆ ಸುದ್ದಿಗಾರರ ಜತೆ ಮಾತನಾಡಿದ ಪ್ರತಿಪಕ್ಷ ನಾಯಕ ಆರ್‌.ಅಶೋಕ್‌, ಸಂವಿಧಾನವು ರಾಜ್ಯಪಾಲರಿಗೆ ವಿಶೇಷ ಅಧಿಕಾರಗಳನ್ನು ನೀಡಿದೆ. ಆದರೆ, ಸರ್ಕಾರ ಆ ಅಧಿಕಾರ ಕಸಿದುಕೊಳ್ಳುವ ಮೂಲಕ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುತ್ತಿದೆ. ಕಾನೂನುಗಳಿಗೆ ಅತಿ ಹೆಚ್ಚು ತಿದ್ದುಪಡಿಗಳನ್ನು ಮಾಡುವ ಮೂಲಕ ಬಾಬಾ ಸಾಹೇಬ್ ಬಿ.ಆರ್‌. ಅಂಬೇಡ್ಕರ್ ಅವರ ಸಂವಿಧಾನವನ್ನು ಅವಮಾನಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಪರಿಷತ್‌ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಸುರೇಶ್‌ ಬಾಬು ಸೇರಿದಂತೆ ಉಭಯ ಪಕ್ಷಗಳು ಮುಖಂಡರು ಈ ವೇಳೆ ಉಪಸ್ಥಿತರಿದ್ದರು.