ಸಾರಾಂಶ
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರು ಸಂವಿಧಾನ ಬದಲಿಸುವ ಹೇಳಿಕೆ ನೀಡಿದ್ದಾರೆಂದು ಬಿಜೆಪಿ ರಾಜ್ಯ ಹಾಗೂ ರಾಷ್ಟ್ರ ನಾಯಕರು ಸುಳ್ಳುಗಳ ಸರಮಾಲೆ ಸೃಷ್ಟಿಸಿದ್ದಾರೆ ಎಂದು ಮಾಜಿ ಶಾಸಕ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕೆ.ರಾಜು ಟೀಕಿಸಿದ್ದಾರೆ.
ರಾಮನಗರ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರು ಸಂವಿಧಾನ ಬದಲಿಸುವ ಹೇಳಿಕೆ ನೀಡಿದ್ದಾರೆಂದು ಬಿಜೆಪಿ ರಾಜ್ಯ ಹಾಗೂ ರಾಷ್ಟ್ರ ನಾಯಕರು ಸುಳ್ಳುಗಳ ಸರಮಾಲೆ ಸೃಷ್ಟಿಸಿದ್ದಾರೆ ಎಂದು ಮಾಜಿ ಶಾಸಕ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕೆ.ರಾಜು ಟೀಕಿಸಿದ್ದಾರೆ.
ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾ, ರಾಜ್ಯಾಧ್ಯಕ್ಷ ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್.ಅಶೋಕ್, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಸಹ ಡಿ.ಕೆ.ಶಿವಕುಮಾರ್ ಹೇಳಿಕೆಯನ್ನು ತಿರುಚಿ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಟೀಕಿಸಿದರು.
ಡಿ.ಕೆ.ಶಿವಕುಮಾರ್ ಅವರೇ ಸಂವಿಧಾನ ಬದಲಾವಣೆ ವಿಷಯ ಮಾತನಾಡಿರುವುದನ್ನು ದೃಢೀಕರಿಸಿದರೆ ಆ ದಿನವೇ ರಾಜೀನಾಮೆ ನೀಡುತ್ತೇನೆ ಎಂದು ಹೇಳಿದ್ದಾರೆ. ಡಿಕೆಶಿಯವರು ಬಿಜೆಪಿ ಕೋಮುವಾದ ಹಾಗೂ ಆ ಪಕ್ಷದ ಬಂಡವಾಳವನ್ನು ಬಯಲು ಮಾಡುತ್ತಿದ್ದಾರೆ ಎಂಬ ಭಯದಿಂದ ವೈಯಕ್ತಿಕವಾಗಿ ಅವರ ವಿರುದ್ಧ ಬಿಜೆಪಿ ನಾಯಕರು ಅಪಾದನೆ ಮಾಡುತ್ತಿದ್ದಾರೆ ಎಂದರು. ಛಲವಾದಿ ನಾರಾಯಣಸ್ವಾಮಿ ರಾಮನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಡಿ.ಕೆ.ಶಿವಕುಮಾರ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ಹಗುರವಾಗಿ ಮಾತನಾಡಿರುವುದು ಖಂಡನೀಯ ಎಂದು ಕೆ.ರಾಜು ಆರೋಪಿಸಿದ್ದಾರೆ.