ಕನ್ನಡಪ್ರಭ ವಾರ್ತೆ ಬೆಳಗಾವಿಮಹಿಳೆಯರ ಗೌರವದ ವಿಚಾರದಲ್ಲಿ ಕಾಂಗ್ರೆಸ್‌ ದ್ವಂದ್ವ ನಿಲುವು ಅನುಸರಿಸುತ್ತಿದೆ ಎಂದು ಆರೋಪಿಸಿ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತೆಯರು ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಮಹಿಳೆಯರ ಗೌರವದ ವಿಚಾರದಲ್ಲಿ ಕಾಂಗ್ರೆಸ್‌ ದ್ವಂದ್ವ ನಿಲುವು ಅನುಸರಿಸುತ್ತಿದೆ ಎಂದು ಆರೋಪಿಸಿ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತೆಯರು ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಕಾಂಗ್ರೆಸ್‌ ಭವನಕ್ಕೆ ಮುತ್ತಿಗೆ ಹಾಕಲು ಮುಂದಾದ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತೆಯರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು. ಈ ವೇಳೆ ಪ್ರತಿಭಟನಾಕಾರರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಮಹಿಳೆಯರ ಗೌರವ ಮತ್ತು ಸುರಕ್ಷತೆಯ ಬಗ್ಗೆ ಮಾತನಾಡುವ ಕಾಂಗ್ರೆಸ್‌ ನಾಯಕರು, ತಮ್ಮ ಪಕ್ಷದ ಸಂಸದನಿಗೆ ಸಂಬಂಧಿಸಿದ ಗಂಭೀರ ಆರೋಪಗಳ ವಿಚಾರದಲ್ಲಿ ಮೌನ ವಹಿಸಿರುವುದೇಕೆ ಎಂದು ಪ್ರತಿಭಟನಾಕಾರರು ಪ್ರಶ್ನಿಸಿದರು. ಜೆಎನ್‌ಯು ಮಾಜಿ ಪ್ರಾಧ್ಯಾಪಕ ಹಾಗೂ ಕಾಂಗ್ರೆಸ್‌ ಸಂಸದ ಅಂಗೋಮ್ಚಾ ಬಿಮೋಲ್ ಅಕೊಯಿಜಮ್ ಅವರಿಗೆ ಸಂಬಂಧಿಸಿದ ಪ್ರಕರಣದಲ್ಲಿ 11 ವಿದ್ಯಾರ್ಥಿನಿಯರು ದೂರು ಸಲ್ಲಿಸಿದ್ದಾರೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ನಾಯಕತ್ವ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದರು.

ಲಡ್ಕಿ ಹೂಂ, ಲಡ್ ಸಕ್ತಿ ಹೂಂ ಎಂಬ ಘೋಷಣೆ ನೀಡಿದ್ದ ಕಾಂಗ್ರೆಸ್‌, ಮಹಿಳೆಯರ ಗೌರವ ಮತ್ತು ಸುರಕ್ಷತೆಯ ವಿಚಾರದಲ್ಲಿ ತನ್ನ ಬದ್ಧತೆಯನ್ನು ಕಾರ್ಯರೂಪದಲ್ಲಿ ತೋರಿಸಬೇಕು. ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಪ್ರಿಯಾಂಕಾ ಗಾಂಧಿ ಈ ಪ್ರಕರಣದ ಕುರಿತು ಸ್ಪಷ್ಟನೆ ನೀಡಬೇಕು ಎಂದು ಒತ್ತಾಯಿಸಿದರು.

ಮಹಿಳೆಯರ ಗೌರವ, ಸುರಕ್ಷತೆ ಮತ್ತು ನ್ಯಾಯದ ವಿಚಾರದಲ್ಲಿ ರಾಜಕೀಯ ಪಕ್ಷಗಳು ರಾಜಕೀಯ ಅನುಕೂಲಕ್ಕೆ ತಕ್ಕಂತೆ ನಡೆದುಕೊಳ್ಳಬಾರದು. ಪ್ರಕರಣದ ಆರೋಪಗಳ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಿ, ದೂರುದಾರರಿಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಬಿಜೆಪಿ ಮಹಿಳಾ ಮೋರ್ಚಾದ ಕರ್ನಾಟಕ ರಾಜ್ಯ ಕಾರ್ಯದರ್ಶಿ ಡಾ.ಸೋನಾಲಿ ಸರ್ನೋಬತ್, ಬೆಳಗಾವಿ ಗ್ರಾಮೀಣ ಘಟಕದ ಅಧ್ಯಕ್ಷೆ ಡಾ.ನಯನಾ ಭಸ್ಮೆ, ಬೆಳಗಾವಿ ನಗರ ಘಟಕದ ಅಧ್ಯಕ್ಷೆ ಶಿಲ್ಪಾ ಕೆಕರೆ, ಉಜ್ವಲಾ ಬಡವನ್ನಾಚೆ, ಖಾನಾಪುರ ಮಹಿಳಾ ಮೋರ್ಚಾ ಅಧ್ಯಕ್ಷೆ ಸುನೀತಾ ಪಾಟೀಲ ಸೇರಿದಂತೆ ಮಹಿಳಾ ಮೋರ್ಚಾದ ಪದಾಧಿಕಾರಿಗಳು, ಕಾರ್ಯಕರ್ತೆಯರು ಹಾಗೂ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.