ವಾಲ್ಮೀಕಿ ಹಗರಣ, ಮುಡಾ ಕೇಸ್‌ ವಿರುದ್ಧ ಬಿಜೆಪಿ ಪ್ರತಿಭಟನೆ, ವಿಧಾನಸೌಧ ಮುತ್ತಿಗೆಗೆ ಯತ್ನ

| Published : Jul 19 2024, 02:01 AM IST / Updated: Jul 19 2024, 06:18 AM IST

ಸಾರಾಂಶ

ವಾಲ್ಮೀಕಿ ಹಗರಣ, ಮುಡಾ ಕೇಸ್‌ ವಿರುದ್ಧ ಬಿಜೆಪಿ ತೀವ್ರ ಹೋರಾಟ ನಡೆಸಿದ್ದು, ವಿಧಾನಸೌಧ ಮುತ್ತಿಗೆ ಹಾಕಲು ಯತ್ನಿಸಿತು.

 ಬೆಂಗಳೂರು :  ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಮತ್ತು ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಪ್ರತಿಪಕ್ಷ ಬಿಜೆಪಿಯು ಬೃಹತ್ ಪ್ರತಿಭಟನೆ ನಡೆಸಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಪ್ರಯತ್ನಿಸಿತು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಗುರುವಾರ ಸ್ವಾತಂತ್ರ್ಯ ಉದ್ಯಾನವನದ ಬಳಿ ನಡೆದ ಪ್ರತಿಭಟನೆಯಲ್ಲಿ ಪಕ್ಷದ ಶಾಸಕರು, ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.

ಈ ವೇಳೆ ಮಾತನಾಡಿದ ವಿಜಯೇಂದ್ರ, ಪರಿಶಿಷ್ಟ ಜಾತಿ, ಪಂಗಡಗಳ ಹಣಕ್ಕೆ ಕನ್ನ ಹಾಕಿದ್ದು ಗೊತ್ತಾದ ತಕ್ಷಣ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜೀನಾಮೆ ಕೊಡಬೇಕಿತ್ತು. ದೊಡ್ಡ ದೊಡ್ಡವರು ಹೇಳಿದ್ದಕ್ಕೆ ಹಣ ದುರುಪಯೋಗ ಎಂಬ ಮಾಹಿತಿಯನ್ನು ಇ.ಡಿ. ಕಸ್ಟಡಿಯಲ್ಲಿರುವ ನಾಗೇಂದ್ರ ಹೇಳಿದ್ದಾಗಿ ಮಾಹಿತಿ ಇದೆ. ಯಾವತ್ತು ಸರಕಾರ ಬೀಳುತ್ತೋ ಗೊತ್ತಿಲ್ಲ ಎಂಬ ಆತಂಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವರನ್ನು ಕಾಡುತ್ತಿದೆ. ಅವರಿಗೆ ಈಗ ನಿದ್ರೆ ಬರುತ್ತಿಲ್ಲ ಎಂದು ಲೇವಡಿ ಮಾಡಿದರು.

ಇ.ಡಿ. ಕಸ್ಟಡಿಯಲ್ಲಿರುವ ನಾಗೇಂದ್ರ ಎಲ್ಲಿ ತಮ್ಮ ಹೆಸರು ಹೇಳುವರೋ ಎಂಬ ಭಯ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳನ್ನು ಕಾಡುತ್ತಿದೆ. ಒಂದೆಡೆ ಎಸ್‍ಇಪಿ, ಟಿಎಸ್‍ಪಿ ಹಣವನ್ನು ಬೇರೆಡೆ ವರ್ಗಾವಣೆ ಮಾಡಿದ್ದಾರೆ. ಪರಿಶಿಷ್ಟರ ಅಭಿವೃದ್ಧಿಗೆ ಇಟ್ಟಿದ್ದ ಹಣ ವರ್ಗಾವಣೆ ಮಾಡಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಲೂಟಿಯಾಗಿದೆ. ಮೈಸೂರಿನ ಸಾವಿರಾರು ಕೋಟಿ ಮೊತ್ತದ ಮುಡಾ ಹಗರಣದ ಮೂಲಕ ಸಿದ್ದರಾಮಯ್ಯನವರ ಬಂಡವಾಳ ಬಯಲಾಗಿದೆ. ಬಡವರಿಗೆ ಕೊಡಬೇಕಾದ ನಿವೇಶನಗಳ ಪೈಕಿ 14 ನಿವೇಶನಗಳನ್ನು ತಮ್ಮ ಕುಟುಂಬಕ್ಕೆ ಕೊಡಿಸಿ ಲೂಟಿ ಮಾಡಿದ್ದಾರೆ ಎಂದು ಆಕ್ಷೇಪಿಸಿದರು.

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನದಲ್ಲಿ ಕುಳಿತುಕೊಳ್ಳುವ ಯೋಗ್ಯತೆ ಮತ್ತು ನೈತಿಕತೆ ಕಳೆದುಕೊಂಡಿದ್ದಾರೆ. ಪರಿಶಿಷ್ಟ ಜಾತಿ, ಜನಾಂಗದವರ ಶಾಪ ನಿಮಗೆ ತಟ್ಟದೇ ಬಿಡುವುದಿಲ್ಲ. ಬಿಜೆಪಿ ರಾಜಕೀಯ ಮಾಡಲು ಬಂದಿಲ್ಲ; ನಮ್ಮ ಕರ್ತವ್ಯವನ್ನು ನಾವು ಈಡೇರಿಸುತ್ತಿದ್ದೇವೆ. ಮುಖ್ಯಮಂತ್ರಿಗಳಿಗೆ ಮನಸ್ಸಾಕ್ಷಿ ಇದ್ದರೆ ಇಷ್ಟು ಹೊತ್ತಿಗಾಗಲೇ ರಾಜೀನಾಮೆ ಕೊಡಬೇಕಿತ್ತು. ಬೂಟಾಟಿಕೆಯ ಹೋರಾಟ ಇದಲ್ಲ. ಭ್ರಷ್ಟ ಕಾಂಗ್ರೆಸ್ ಸರಕಾರ ಕಿತ್ತೊಗೆಯುವವರೆಗೆ, ಮುಖ್ಯಮಂತ್ರಿಗಳ ರಾಜೀನಾಮೆ ಕೊಡುವವರೆಗೆ ನಮ್ಮ ಹೋರಾಟ ಮುಂದುವರೆಯಲಿದೆ ಎಂದು ಗುಡುಗಿದರು.

ಇದೊಂದು ಹಗರಣಗಳ ಸರಕಾರ: ಡಿವಿಎಸ್

ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಮಾತನಾಡಿ, ಸುಳ್ಳು ಆಶ್ವಾಸನೆ ಮೂಲಕ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ಅವರ ಸರ್ಕಾರವು ಹಗರಣಗಳ ಸರ್ಕಾರವಾಗಿ ಮಾರ್ಪಟ್ಟಿದೆ. ಹಿಂದೆ ದೇಶವನ್ನೇ ಕೊಳ್ಳೆ ಹೊಡೆದ ಕಾಂಗ್ರೆಸ್ ಸರ್ಕಾರದ ಮಾದರಿಯಲ್ಲೇ ಈ ಸರ್ಕಾರ ನಡೆದುಕೊಳ್ಳುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಲಿಬಾಬಾ ಆಗಿದ್ದಾರೆ. ಅವರು ತಕ್ಷಣ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು.

ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಅವರ ನೇತೃತ್ವದಲ್ಲಿ ₹25 ಸಾವಿರ ಕೋಟಿ ಲೂಟಿ ಹಣ ವಾಪಸ್ ಕೊಡಿ, ವಿಧಾನಸೌಧದ ಗದ್ದುಗೆದಾರರೇ ಕಿವಿಯ ಕೊಡಿ, ಕಣ್ಣು ಬಿಡಿ ಎಂಬಿತ್ಯಾದಿ ಘೋಷಣೆಗಳನ್ನು ಕೂಗಲಾಯಿತು. ಬಳಿಕ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಮುಖಂಡರು ಮತ್ತು ಕಾರ್ಯಕರ್ತರು ಮುನ್ನುಗ್ಗಿದಾಗ ಪೊಲೀಸರು ಬ್ಯಾರಿಕೇಡ್‌ ಹಾಕಿ ತಡೆಯಲು ಮುಂದಾದರು. ಈ ಸಂದರ್ಭ ನೂಕಾಟ, ತಳ್ಳಾಟ ನಡೆಯಿತು. ಬಳಿಕ ಎಲ್ಲರನ್ನೂ ಬಂಧಿಸಲಾಯಿತು.

ಮೋರ್ಚಾದಿಂದಲೂ ಮುತ್ತಿಗೆ ಯತ್ನಕೆಲಹೊತ್ತಿನ ಬಳಿಕ ಬಿಜೆಪಿ ಎಸ್.ಟಿ.ಮೋರ್ಚಾ ರಾಜ್ಯಾಧ್ಯಕ್ಷ ಬಂಗಾರು ಹನುಮಂತು ಅವರ ನೇತೃತ್ವದಲ್ಲಿ ಮೋರ್ಚಾದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಇಂದು ವಿಧಾನಸೌಧಕ್ಕೆ ಮುತ್ತಿಗೆ ಹಾಕುವ ಪ್ರಯತ್ನ ನಡೆಸಿದರು. ವಿಧಾನಸೌಧದ ಪಶ್ಚಿಮ ಪ್ರವೇಶ ದ್ವಾರದ ಬಳಿ ಮುತ್ತಿಗೆ ಹಾಕಲು ಬಂದ ಕಾರ್ಯಕರ್ತರನ್ನು ಪೊಲೀಸರು ತಡೆದು ಬಂಧಿಸಿ ಕರೆದೊಯ್ದರು.