ಜಾನುವಾರು ಜತೆ ಬೀದಿಗಿಳಿದ ಬಿಜೆಪಿ

| Published : Feb 07 2024, 01:49 AM IST

ಸಾರಾಂಶ

ಗಡಗಿ ಚನ್ನಪ್ಪ ವೃತ್ತದಲ್ಲಿ ಕೆಲ ಹೊತ್ತು ಪ್ರತಿಭಟನೆ ನಡೆಸಿದ ಬಿಜೆಪಿ ಪ್ರಮುಖರು ಹಾಗೂ ಸದಸ್ಯರು ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ಬಳ್ಳಾರಿ: ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ ವಿತರಣೆ ಮಾಡದ ರಾಜ್ಯ ಕಾಂಗ್ರೆಸ್ ಸರ್ಕಾರದ ಧೋರಣೆಯನ್ನು ಖಂಡಿಸಿ ಬಿಜೆಪಿ ರೈತ ಮೋರ್ಚಾ ಕಾರ್ಯಕರ್ತರು ಜಾನುವಾರುಗಳ ಸಮೇತ ನಗರದಲ್ಲಿ ಪ್ರತಿಭಟನೆ ನಡೆಸಿದರು.

ಕೃಷಿಕರ ಪರವಾಗಿದ್ದೇವೆ ಎಂದು ಹೇಳುತ್ತಿರುವ ಕಾಂಗ್ರೆಸ್ ಸರ್ಕಾರ ಕೃಷಿಕರನ್ನು ತೀವ್ರ ಸಂಕಷ್ಟಕ್ಕೆ ಸಿಲುಕಿಸಿದೆ. ರಾಜ್ಯದಲ್ಲಿ ₹716 ಕೋಟಿ ಪ್ರೋತ್ಸಾಹಧನ ಬಾಕಿಯಿದ್ದು, ಇದರಿಂದ ರಾಜ್ಯದಲ್ಲಿ ಸುಮಾರು 10 ಲಕ್ಷ ಲೀಟರ್‌ನಷ್ಟು ಹಾಲು ಉತ್ಪಾದನೆ ಕುಸಿದಿದೆ. ಸರ್ಕಾರ ಕೂಡಲೇ ಬಿಡುಗಡೆ ಮಾಡಬೇಕು. ಈ ಮೂಲಕ ರೈತರ ನೆರವಿಗೆ ಮುಂದಾಗಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ರೈತ ವಿರೋಧಿ ಹಾಗೂ ಕೃಷಿ ವಿರೋಧಿಯಾಗಿರುವ ಕಾಂಗ್ರೆಸ್ ಸರ್ಕಾರ ರಾಜ್ಯದ ರೈತರ ಹಿತ ಕಾಯುವ ಯಾವುದೇ ಕಾಳಜಿ ತೋರಿಸುತ್ತಿಲ್ಲ. ಬದಲಿಗೆ ಕೇಂದ್ರ ಸರ್ಕಾರದ ವಿರುದ್ಧ ಹೋರಾಟಗಳನ್ನು ಕೈಗೆತ್ತಿಕೊಳ್ಳುತ್ತಿದೆ. ರಾಜ್ಯ ಸರ್ಕಾರಕ್ಕೆ ಬದ್ಧತೆ ಹಾಗೂ ಹಾಲು ಉತ್ಪಾದಕರ ಮೇಲೆ ಕಾಳಜಿ ಇದ್ದರೆ ಕೂಡಲೇ ಪ್ರೋತ್ಸಾಹಧನವನ್ನು ಬಿಡುಗಡೆಗೊಳಿಸಬೇಕು ಎಂದು ಒತ್ತಾಯಿಸಿದರು.

ಗಡಗಿ ಚನ್ನಪ್ಪ ವೃತ್ತದಲ್ಲಿ ಕೆಲ ಹೊತ್ತು ಪ್ರತಿಭಟನೆ ನಡೆಸಿದ ಬಿಜೆಪಿ ಪ್ರಮುಖರು ಹಾಗೂ ಸದಸ್ಯರು ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ವಿಧಾನಪರಿಷತ್ ಸದಸ್ಯ ವೈ.ಎಂ. ಸತೀಶ್, ಪಕ್ಷದ ಜಿಲ್ಲಾಧ್ಯಕ್ಷ ಅನಿಲ್‌ಕುಮಾರ್ ಮೋಕಾ, ನಿಕಟಪೂರ್ವ ಜಿಲ್ಲಾಧ್ಯಕ್ಷ ಮುರಹರಗೌಡ ಗೋನಾಳ್, ಪಕ್ಷದ ಹಿರಿಯ ಮುಖಂಡರಾದ ಎಸ್. ಗುರುಲಿಂಗನಗೌಡ, ಬಿಜೆಪಿ ಮಹಿಳಾ ಘಟಕದ ಅಧ್ಯಕ್ಷೆ ಸುಗುಣ ಕಾಕರ್ಲ, ಕಾರ್ಯದರ್ಶಿ ಪುಷ್ಪಲತಾ, ರೈತ ಮೋರ್ಚಾದ ಜಿಲ್ಲಾಧ್ಯಕ್ಷ ಗುಂಡಿಗನೂರು ಪ್ರಕಾಶಗೌಡ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮದಿರೆ ಕುಮಾರಸ್ವಾಮಿ, ಪುರುಷೋತ್ತಮ, ಶಿವರುದ್ರಗೌಡ, ಕಿನ್ನೂರೇಶ್ವರ ಸೇರಿದಂತೆ ಪಕ್ಷದ ಜಿಲ್ಲಾ ಪ್ರಮುಖರು ಹಾಗೂ ರೈತ ಮೋರ್ಚಾದ ಸದಸ್ಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.