ದರ ಏರಿಕೆ ಖಂಡಿಸಿ ಬಿಜೆಪಿಯಿಂದ ಬುಧವಾರ ಪ್ರಮುಖ ಪ್ರತಿಪಕ್ಷ ಬಿಜೆಪಿ ಶಾಸಕರು, ಸಂಸದರು ಹಾಗೂ ಮುಖಂಡರು ನಗರದಲ್ಲಿ ಒಂದು ದಿನದ ಪ್ರತಿಭಟನೆ ನಡೆಸಲಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ದರ ಏರಿಕೆ ಖಂಡಿಸಿ ಬಿಜೆಪಿಯಿಂದ ಬುಧವಾರ ಪ್ರಮುಖ ಪ್ರತಿಪಕ್ಷ ಬಿಜೆಪಿ ಶಾಸಕರು, ಸಂಸದರು ಹಾಗೂ ಮುಖಂಡರು ನಗರದಲ್ಲಿ ಒಂದು ದಿನದ ಪ್ರತಿಭಟನೆ ನಡೆಸಲಿದ್ದಾರೆ.

ಅಂದು ಬೆಳಗ್ಗೆ 10ರಿಂದ ಸಂಜೆ 6ಗಂಟೆವರೆಗೆ ನಗರದ ಫ್ರೀಡಂ ಪಾರ್ಕ್‌ನಲ್ಲಿ ನಾಡಿನ ಜನರ ಪರ ಹೋರಾಟ ನಡೆಸಲಾಗುವುದು. ರಾಜ್ಯ ಸರ್ಕಾರಕ್ಕೆ ಜನರ ನೋವು ತಲುಪಿಸಿ, ಬೆಲೆ ಏರಿಕೆ ನಿರ್ಧಾರ ಹಿಂಪಡೆಯುವಂತೆ ಎಚ್ಚರಿಕೆ ನೀಡಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.ಭಾನುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಇದಾದ ಬಳಿಕ ಜಿಲ್ಲಾ ಕೇಂದ್ರಗಳಲ್ಲಿ ನಡೆಯುತ್ತಿರುವ ಪಾದಯಾತ್ರೆಗಳಲ್ಲೂ ಬೆಲೆ ಏರಿಕೆ ವಿರುದ್ಧದ ಹೋರಾಟ ಮುಂದುವರಿಸಲಾಗುವುದು. ರಾಜ್ಯದ ಪ್ರತಿಯೊಂದು ವಿಧಾನಸಭಾ ಕ್ಷೇತ್ರದಲ್ಲೂ ಪ್ರತಿಭಟನೆ ನಡೆಸಲಾಗುವುದು. ಜನಸಾಮಾನ್ಯರು, ಬಡವರು ಮತ್ತು ರೈತರ ಪರ ಬಿಜೆಪಿ ಯಾವುದೇ ಕಾರಣಕ್ಕೂ ಸುಮ್ಮನೆ ಕೂರುವುದಿಲ್ಲ ಎಂದು ಹೇಳಿದರು.

ಹಬ್ಬದ ಸಂದರ್ಭದಲ್ಲಿ ಗದಾ ಪ್ರಹಾರ:

ರಾಜ್ಯದ ಜನತೆ ಸಂತೋಷದಿಂದ ದೀಪಾವಳಿ ಹಬ್ಬ ಆಚರಿಸುವ ವಾತಾವರಣವನ್ನು ಕಾಂಗ್ರೆಸ್ ಸರ್ಕಾರ ನಿರ್ಮಿಸಿಲ್ಲ. ಬಡವರು, ರೈತರು, ವೃದ್ಧರು, ಯುವಕರು ಸೇರಿದಂತೆ ಜನಸಾಮಾನ್ಯರು ಬೆಲೆ ಏರಿಕೆಯಿಂದ ಕಂಗಾಲಾಗಿದ್ದಾರೆ. ಹಬ್ಬದ ಸಂದರ್ಭದಲ್ಲಿ ಜನರ ಮೇಲೆ ಬೆಲೆ ಏರಿಕೆಯ ಗದಾಪ್ರಹಾರ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ತೀವ್ರ ನೋವಿನಿಂದ ಮಾತನಾಡಬೇಕಾದ ಪರಿಸ್ಥಿತಿ ಎದುರಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಳೆದ ಮೂರು ವರ್ಷಗಳ ಕಾಂಗ್ರೆಸ್ ಸರ್ಕಾರದ ಸಾಧನೆ ಎಂದರೆ ನಿರಂತರ ಬೆಲೆ ಏರಿಕೆಯೊಂದೇ. ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಹೆಚ್ಚಳ, ಮದ್ಯದ ದರ ಏರಿಕೆ, ನೀರಿನ ದರ ಹೆಚ್ಚಳ, ವನ್ಯಜೀವಿ ಸಫಾರಿ ಟಿಕೆಟ್ ದರ ಹೆಚ್ಚಳ, ಸರ್ಕಾರಿ ಆಸ್ಪತ್ರೆಗಳ ಎಕ್ಸ್‌ರೇ ಮತ್ತು ಹೊರರೋಗಿಗಳ ಸಮಾಲೋಚನಾ ಶುಲ್ಕ ಹೆಚ್ಚಳ ಹೀಗೆ ಜನಸಾಮಾನ್ಯರ ಮೇಲೆ ಒಂದರ ಹಿಂದೆ ಒಂದರಂತೆ ಹೊರೆ ಹಾಕಲಾಗಿದೆ. ಇದೀಗ ಹಾಲು, ಮೊಸರು, ತುಪ್ಪ ಹಾಗೂ ಬಸ್ ಪ್ರಯಾಣ ದರ ಹೆಚ್ಚಳದ ಮೂಲಕ ಜನರ ಬದುಕನ್ನು ಮತ್ತಷ್ಟು ದುಸ್ತರಗೊಳಿಸಲಾಗಿದೆ ಎಂದು ಟೀಕಿಸಿದರು.