ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೆ ತರುತ್ತಿರುವ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ ವಿರೋಧಿಸಿ ಬುಧವಾರ ರಾಜ್ಯಾದ್ಯಂತ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಕನ್ನಡಪ್ರಭ ವಾರ್ತೆ, ಬೆಂಗಳೂರು

ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೆ ತರುತ್ತಿರುವ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ ವಿರೋಧಿಸಿ ಬುಧವಾರ ರಾಜ್ಯಾದ್ಯಂತ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೆ ತರುತ್ತಿರುವ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕವು ಸಂವಿಧಾನಕ್ಕೆ ವಿರುದ್ಧವಿದ್ದು, ಇದನ್ನು ಜಾರಿಗೊಳಿಸಬಾರದು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಮಂಡ್ಯ ಜಿಲ್ಲೆ ಪಾಂಡವಪುರದಲ್ಲಿ ಶ್ರೀರಂಗಪಟ್ಟಣ-ಜೇವರ್ಗಿ ಮುಖ್ಯರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಓಲೈಕೆ ರಾಜಕೀಯ ಮಾಡಲು ಮುಂದಾಗಿದೆ. ಸಂವಿಧಾನದ ಆಶಯ, ಹಕ್ಕುಗಳನ್ನು ವಿರೋಧಿಸುವುದು, ಕಿತ್ತುಕೊಳ್ಳುವುದು ಕಾಂಗ್ರೆಸ್ ರಕ್ತಗತವಾಗಿ ಬಂದಿದೆ ಎಂದು ಆರೋಪಿಸಿದರು.

ಚಿತ್ರದುರ್ಗದ ಒನಕೆ ಓಬವ್ವ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು, ರಾಜ್ಯ ಸರ್ಕಾರದ ವಿರುದ್ದ ಧಿಕ್ಕಾರ ಕೂಗಿದರು. ಕೊಪ್ಪಳ ಜಿಲ್ಲೆ ಕನಕಗಿರಿಯಲ್ಲಿ ತಹಸೀಲ್ದಾರ್‌ ಕಚೇರಿ ಎದುರು ಪ್ರತಿಭಟಿನೆ ನಡೆಸಿದ ಬಿಜೆಪಿ ಕಾರ್ಯಕರ್ತರು, ವಿಧೇಯಕ ವಿರೋಧಿಸಿ ತಹಸೀಲ್ದಾರ್‌ರಿಗೆ ಮನವಿ ಸಲ್ಲಿಸಿದರು.

ಮೈಸೂರಿನಲ್ಲಿ ಕೃಷ್ಣರಾಜ ಕ್ಷೇತ್ರದ ಬಿಜೆಪಿ ವತಿಯಿಂದ ಅಗ್ರಹಾರದ ನೂರೊಂದು ಗಣಪತಿ ದೇವಸ್ಥಾನದ ಎದುರು ಪ್ರತಿಭಟನೆ ನಡೆಸಲಾಯಿತು. ಇದೇ ವೇಳೆ, ಬೆಳಗಾವಿ, ಧಾರವಾಡ ಜಿಲ್ಲೆಯ ಧಾರವಾಡ, ನವಲಗುಂದ, ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ, ಕುಮಟಾ, ಹಾವೇರಿ ಜಿಲ್ಲೆಯ ಹಾವೇರಿ, ರಾಣಿಬೆನ್ನೂರು, ಬ್ಯಾಡಗಿ, ಹಾನಗಲ್‌, ಗದಗ ಜಿಲ್ಲೆಯ ಗದಗ, ರೋಣ, ಲಕ್ಷ್ಮೇಶ್ವರ, ಮುಂಡರಗಿ, ಕೊಪ್ಪಳ ಜಿಲ್ಲೆಯ ಕೊಪ್ಪಳ, ಕುಷ್ಟಗಿ, ಕಾರಟಗಿಯಲ್ಲಿಯೂ ಪ್ರತಿಭಟನೆಗಳು ನಡೆದವು.