ಸಾರಾಂಶ
ಸಿದ್ದಾಪುರ: ಗ್ಯಾರಂಟಿ ಯೋಜನೆಯನ್ನು ಸಮರ್ಪಕವಾಗಿ ನಿಭಾಯಿಸಲಾಗದ ರಾಜ್ಯ ಸರ್ಕಾರ ಇದೀಗ ಬಸ್ ದರವನ್ನು ಶೇ. ೧೫ರಷ್ಟು ಏರಿಕೆ ಮಾಡಿ ಗ್ಯಾರಂಟಿ ಯೋಜನೆಗೆ ಹಣ ಹೊಂದಿಸಲು ಮುಂದಾಗಿದೆ ಎಂದು ಬಿಜೆಪಿ ಮಂಡಲಾಧ್ಯಕ್ಷ ಅಧ್ಯಕ್ಷ ಎಂ.ಕೆ. ತಿಮ್ಮಪ್ಪ ಟೀಕಿಸಿದರು.ಸೋಮವಾರ ಬಸ್ ದರ ಏರಿಕೆ ಮತ್ತು ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ಮಂಡಲದ ವತಿಯಿಂದ ಪಟ್ಟಣದಲ್ಲಿ ಹಮ್ಮಿಕೊಂಡ ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿ, ಆರಂಭದಲ್ಲಿ ಕಾಂಗ್ರೆಸ್ ಸರ್ಕಾರ ಒಂದು ಕೈಯಿಂದ ಕೊಟ್ಟು ಒಂದು ಕೈಯಿಂದ ಕಸಿದು ಕೊಳ್ಳುತ್ತಿತ್ತು. ಆದರೆ ಈಗ ಎರಡು ಕೈಯಿಂದ ಕಸಿದುಕೊಳ್ಳುವಂಥ ಕೆಲಸ ಮಾಡುತ್ತಿದೆ. ಗುತ್ತಿಗೆದಾರರ ಸರಣಿ ಸಾವಾಗುತ್ತಿದೆ. ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸ ಆಗುತ್ತಿಲ್ಲ. ಸರ್ಕಾರ ಸಂಪೂರ್ಣವಾಗಿ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಆರೋಪಿಸಿದರು.ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಮಿತಿಯ ಸದಸ್ಯ ಕೆ.ಜಿ. ನಾಯ್ಕ ಮಾತನಾಡಿ, ಬೀದರಿನ ಗುತ್ತಿಗೆದಾರ ಸಚಿನ್ ಪಂಚಾಳ ಅವರು ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಹೆಸರು ಕೇಳಿಬಂದಿದೆ. ಹೀಗಾಗಿ ಸಚಿವರು ತಕ್ಷಣ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅಧಿಕಾರಿಗಳು ಒತ್ತಡದಿಂದ ಕೆಲಸ ಮಾಡುತ್ತಿದ್ದು, ಈಗಾಗಲೇ ಕೆಲವರು ಒತ್ತಡ ತಾಳಲಾರದೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಜ್ಯದಲ್ಲಿ ಭ್ರಷ್ಟಾಚಾರ ಮಿತಿ ಮೀರಿದ್ದರೂ ಆಡಳಿತದ ಚುಕ್ಕಾಣಿ ಹಿಡಿದವರು ಉದ್ದಟತನದಿಂದ ವರ್ತಿಸುತ್ತಿರುವುದು ಬೇಸರದ ಸಂಗತಿ ಎಂದರು.ಬಿಜೆಪಿ ಎಸ್‌ಸಿ ಮೋರ್ಚಾ ಜಿಲ್ಲಾಧ್ಯಕ್ಷ ನಂದನ್ ಬೋರ್ಕರ್, ಪ್ರಮುಖರಾದ ಗುರುರಾಜ ಶಾನಭಾಗ ಮಾತನಾಡಿದರು. ಪ್ರತಿಭಟನೆಯಲ್ಲಿ ಪ್ರಮುಖರಾದ ಎಸ್.ಕೆ. ಮೇಸ್ತ, ತೋಟಪ್ಪ, ಕೃಷ್ಣಮೂರ್ತಿ ಕಡಕೇರಿ, ಮಂಜುನಾಥ ಭಟ್ಟ, ರಾಘವೇಂದ್ರ ಶಾಸ್ತ್ರಿ ಸುರೇಶ ಬಾಲಿಕೊಪ್ಪ, ರವಿಕುಮಾರ ನಾಯ್ಕ ಮುಂತಾದವರು ಇದ್ದರು. ಬಳಿಕ ಮನವಿಯನ್ನು ತಹಸೀಲ್ದಾರದ ಮೂಲಕ ರಾಜ್ಯಪಾಲರಿಗೆ ನೀಡಲಾಯಿತು.ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ
ಮುಂಡಗೋಡ: ರಾಜ್ಯ ಕಾಂಗ್ರೆಸ್ ಸರ್ಕಾರ ಬಸ್ ಪ್ರಯಾಣ ದರ ಹೆಚ್ಚಿಸಿರುವುದು ಹಾಗೂ ಗುತ್ತಿಗೆದಾರರ ಆತ್ಮಹತ್ಯೆ ಮತ್ತು ಬಾಣಂತಿಯರ ಸಾವಿನ ಪ್ರಕರಣಗಳು ಹೆಚ್ಚುತ್ತಿರುವುದನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ಸೋಮವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.ಇಲ್ಲಿಯ ಪ್ರವಾಸಿ ಮಂದಿರದಿಂದ ಹೊರಟ ಪ್ರತಿಭಟನಾ ಮೆರವಣಿಗೆ ಪಟ್ಟಣದ ಪ್ರಮುಖ ಬೀದಿಗಳ ಮೂಲಕ ಸಂಚರಿಸಿ ಬಳಿಕ ಶಿರಸಿ-ಹುಬ್ಬಳ್ಳಿ ಹೆದ್ದಾರಿಯ ಶಿವಾಜಿ ಸರ್ಕಲ್ ನಲ್ಲಿ ಕೆಲ ಕಾಲ ಮಾನವ ಸರಪಳಿ ನಿರ್ಮಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಲಾಯಿತು.ಈ ಸಂದರ್ಭದಲ್ಲಿ ಮುಂಡಗೋಡ ಮಂಡಲದ ಬಿಜೆಪಿ ಅಧ್ಯಕ್ಷ ಮಂಜುನಾಥ ಪಾಟೀಲ, ಜಿಪಂ ಮಾಜಿ ಉಪಾಧ್ಯಕ್ಷ ಎಲ್.ಟಿ. ಪಾಟೀಲ, ವಿನಾಯಕ ರಾಯ್ಕರ, ಪಿ.ಜಿ. ತಂಗಚ್ಚನ್, ದೇವೇಂದ್ರ ಕೆಂಚಗೊಣ್ಣವರ, ಮಹೇಶ ಹೊಸಕೊಪ್ಪ, ಪ್ರಕಾಶ ಬಡಿಗೇರ, ಬಸವರಾಜ ಠಣಕೆದಾರ, ರಾಜೇಂದ್ರ ನಾಯ್ಕ, ಮಂಜುನಾಥ ಹರ್ಮಲಕರ, ಭರತರಾಜ ಹದಳಗಿ, ಮಂಜುನಾಥ ನಡಗೇರ, ನಾಗರಾಜ ಬೆಣ್ಣಿ, ಹಾಗೂ ಎಬಿವಿಪಿ ಕಾರ್ಯಕರ್ತರು ಉಪಸ್ಥಿತರಿದ್ದರು.