ಸಾರಾಂಶ
ರಾಮನಗರ: ಸಂವಿಧಾನ ತಿದ್ದುಪಡಿ ಹೇಳಿಕೆ ನೀಡಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಬಿಜೆಪಿ- ಜೆಡಿಎಸ್ ಮೈತ್ರಿ ಪಕ್ಷಗಳ ಮುಖಂಡರು ಪ್ರತಿಭಟನೆ ನಡೆಸಿದರು. ನಗರದ ಐಜೂರು ವೃತ್ತದಲ್ಲಿ ಬಿಜೆಪಿ ಮುಖಂಡರು ಸಂವಿಧಾನ ವಿರೋಧಿ ಕಾಂಗ್ರೆಸ್ ಸರ್ಕಾರ ಮತ್ತು ದಲಿತ ವಿರೋಧಿ ಡಿ.ಕೆ.ಶಿವಕುಮಾರ್ ಎಂದು ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಪಿಚ್ಚನಕೆರೆ ಜಗದೀಶ್ ಮಾತನಾಡಿ, ವೋಟ್ ಬ್ಯಾಂಕ್ ಗಾಗಿ ಅಲ್ಪಸಂಖ್ಯಾತರನ್ನು ಕಾಂಗ್ರೆಸ್ ಪಕ್ಷ ಓಲೈಸುವ ಮೂಲಕ ಡಾ.ಬಿ.ಆರ್.ಅಂಬೇಡ್ಕರ್ ಅವರ ಸಂವಿಧಾನವನ್ನು ಬದಲಿಸುವ ಮಾತನಾಡಿರುವುದು ಖಂಡನೀಯ. ಇದು ಹೀಗೆ ಮುಂದುವರಿದರೆ ಕಾಂಗ್ರೆಸ್ ಪಕ್ಷ ಬೆಲೆ ತೆರಬೇಕಾಗುತ್ತದೆ ಎಂದು ಎಚ್ಚರಿಸಿದರು. ಬಿಜೆಪಿ ರಾಜ್ಯ ವಕ್ತಾರ ರುದ್ರದೇವರು, ಜೆಡಿಎಸ್ ತಾಲೂಕು ಅಧ್ಯಕ್ಷ ಸಬ್ಬಕೆರೆ ಶಿವಲಿಂಗಯ್ಯ ಮಾತನಾಡಿ, ಡಿಕೆಶಿ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದರು. ನಗರ ಮಂಡಲ ಮಾಜಿ ಅಧ್ಯಕ್ಷ ಶಿವಾನಂದ, ನಾಗೇಶ್, ಜೈ ಕುಮಾರ್, ಕೆಂಪರಾಜು, ಚಿಕ್ಕೋನು,ಕಾಳಪ್ಪ, ಚನ್ನಪ್ಪ, ನಾಗಮ್ಮ, ನಗರಸಭಾ ಮಾಜಿ ಸದಸ್ಯ ನಾಗೇಶ್ ಮತ್ತಿತರರು ಭಾಗವಹಿಸಿದ್ದರು.