ಚಿಕ್ಕಮಗಳೂರು, ಬೆಳಗಾವಿ, ರಾಯಚೂರು ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಬಾಣಂತಿ ಹಾಗೂ ನವಜಾತ ಶಿಶುಗಳ ಸಾವಿನ ಪ್ರಕರಣ ಖಂಡಿಸಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತೆಯರು ಶುಕ್ರವಾರ ನಗರದ ಆಜಾದ್‌ ಪಾರ್ಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷೆ ಜಸಂತಾ ಅನಿಲ್‌ಕುಮಾರ್

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ಬೆಳಗಾವಿ, ರಾಯಚೂರು ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಬಾಣಂತಿ ಹಾಗೂ ನವಜಾತ ಶಿಶುಗಳ ಸಾವಿನ ಪ್ರಕರಣ ಖಂಡಿಸಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತೆಯರು ಶುಕ್ರವಾರ ನಗರದ ಆಜಾದ್‌ ಪಾರ್ಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷೆ ಜಸಂತಾ ಅನಿಲ್‌ಕುಮಾರ್ ಮಾತನಾಡಿ, ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಬಾಣಂತಿಯರ ಸಾವು ವ್ಯಾಪಕವಾಗಿ ಸಂಭವಿಸುತ್ತಿವೆ. ಇವುಗಳನ್ನು ತಡೆಯಲು ವಿಫಲವಾಗಿರುವ ಸಚಿವರಾದ ದಿನೇಶ್‌ ಗುಂಡೂರಾವ್ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್‌ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ಬಾಣಂತಿಯರ ಸಾವಿಗೆ ನೈಜ ಕಾರಣ ಪತ್ತೆ ಮಾಡಿ ನಿಯಂತ್ರಿಸಲು ಉಚ್ಚ ನ್ಯಾಯಾಲಯದ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಯಾಗಬೇಕು. ಆಸ್ಪತ್ರೆಯಲ್ಲಿ ಸಾವಪ್ಪಿದ ಬಾಣಂತಿಯರ ಕುಟುಂಬಗಳಿಗೆ ತಲಾ ₹25 ಲಕ್ಷ ಹಾಗೂ ತಾಯಿಯನ್ನು ಕಳೆದು ಕೊಂಡ ಮಗುವನ್ನು ಸರ್ಕಾರ ದತ್ತು ಸ್ವೀಕರಿಸಿ ಸಂಪೂರ್ಣ ಜವಾಬ್ದಾರಿ ಹೊರಬೇಕು ಎಂದು ಹೇಳಿದರು.

ಬಳ್ಳಾರಿ, ಬೆಳಗಾವಿ, ತಿಪಟೂರು, ಬೆಂಗಳೂರು, ಕೊಪ್ಪಳ, ರಾಯಚೂರಿನಿಂದ ಬರುತ್ತಿರುವ ವರದಿಗಳ ಪ್ರಕಾರ ಈ ಸಾವಿಗೆ ನೇರ ಕಾರಣ ಸರ್ಕಾರ ಬಳಸುತ್ತಿರುವ ಕಳಪೆ ಗುಣಮಟ್ಟದ ಔಷಧಿಗಳು. ಅಲ್ಲದೇ ಮುಖ್ಯವಾಗಿ ಆರೋಗ್ಯ ಮತ್ತು ಕುಟುಂಬ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ನಡೆಯುತ್ತಿರುವ ವ್ಯಾಪಕ ಭ್ರಷ್ಟಾಚಾರ ಎಂದು ದೂರಿದರು.

ಗರ್ಭೀಣಿ ಸ್ತ್ರೀಯರ ಆರೈಕೆಗಾಗಿ ಕೇಂದ್ರ ಸರ್ಕಾರ ನೀಡುತ್ತಿರುವ ಯೋಜನೆಗಳನ್ನು ಅನುಷ್ಟಾನಗೊಳಿಸಲು ರಾಜ್ಯ ಸರ್ಕಾರ ವಿಫಲವಾಗಿದೆ. ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯವಸ್ಥೆ ಸರ್ಕಾರದ ಹೊಣೆಗೇಡಿತನದಿಂದ ಸಂಪೂರ್ಣ ಹದಗೆಟ್ಟಿದೆ. ಸಿಬ್ಬಂದಿ ಕೊರತೆ ಎದುರಿಸುತ್ತಿವೆ. ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸೊರಗುತ್ತಿವೆ ಎಂದು ಹೇಳಿದರು.

ರಾಜ್ಯದಲ್ಲಿ ಅಂಬುಲೆನ್ಸ್‌ಗಳಿಗೆ ಸರಿಯಾಗಿ ಡೀಸೆಲ್ ಸಿಗುತ್ತಿಲ್ಲ, ಸಿಬ್ಬಂದಿಗೆ ಸಂಬಂಳವಿಲ್ಲ. ಐಸಿಯು, ಬ್ಲಡ್ ಬ್ಯಾಂಕ್‌ಗಳ ಕೊರತೆ ಯಿದೆ. ಹೀಗಾಗಿ ರಾಜ್ಯ ಸರ್ಕಾರ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಸರ್ಕಾರಿ ಆಸ್ಪತ್ರೆಗಳ ವ್ಯವಸ್ಥೆ ಪರಿಶೀಲಿಸಿ ಸುವ್ಯವಸ್ಥಿತಗೊಳಿಸಬೇಕು ಎಂದು ಹೇಳಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಆರ್.ದೇವರಾಜ್ ಶೆಟ್ಟಿ ಮಾತನಾಡಿ, ರಾಜ್ಯದಲ್ಲಿ ಕೊಲೆಗಡುಕ ಕಾಂಗ್ರೆಸ್ ಸರ್ಕಾರದಿಂದ ಅಮಾಯಕ ನವಜಾತ ಶಿಶುಗಳನ್ನು ಪ್ರಪಂಚ ನೋಡುವ ಮುನ್ನವೇ ಕಣ್ಮುಚ್ಚಿರುವುದು ವಿಷಾಧನೀಯ. ಬಾಣಂತಿಯರು ಹಾಗೂ ಮಕ್ಕಳ ಸಾವಿನ ನೇರ ಹೊಣೆ ಹೊತ್ತು ಸಚಿವರು ಕೂಡಲೇ ರಾಜೀನಾಮೆ ಸಲ್ಲಿಸಿ ಸೂಕ್ತ ಪರಿಹಾರ ಒದಗಿಸಿಕೊಡಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ನಗರಸಭೆ ಅಧ್ಯಕ್ಷೆ ಸುಜಾತಾ ಶಿವಕುಮಾರ್, ಮುಖಂಡರಾದ ಚೈತ್ರಗೌಡ, ಪುಷ್ಪರಾಜ್, ಹಿರೇಮಗಳೂರು ಪುಟ್ಟಸ್ವಾಮಿ, ಡಾ.ನರೇಂದ್ರ, ಮೋಹನ್ ಹಾಗೂ ಮಹಿಳಾ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು. 3 ಕೆಸಿಕೆಎಂ 5ಬಾಣಂತಿಯರ ಹಾಗೂ ನವಜಾತ ಶಿಶುಗಳ ಸಾವಿನ ಪ್ರಕರಣ ಖಂಡಿಸಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತೆ ಯರು ಶುಕ್ರವಾರ ಚಿಕ್ಕಮಗಳೂರಿನ ಆಜಾದ್‌ ಪಾರ್ಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.