ರಾಜ್ಯಪಾಲರ ಅವಹೇಳನ ಖಂಡಿಸಿ ಬಿಜೆಪಿ ಪ್ರತಿಭಟನೆ

| Published : Aug 23 2024, 01:17 AM IST

ಸಾರಾಂಶ

ರಾಜ್ಯಪಾಲರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡುತ್ತಿರುವ ಹಾಗೂ ಪೂರ್ವ ಯೋಜಿತವಾಗಿ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ ನಾಯಕರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿ ನಗರದಲ್ಲಿ ಗುರುವಾರ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ರಾಜ್ಯಪಾಲರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡುತ್ತಿರುವ ಹಾಗೂ ಪೂರ್ವ ಯೋಜಿತವಾಗಿ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ ನಾಯಕರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿ ನಗರದಲ್ಲಿ ಗುರುವಾರ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ನಗರದ ಕಿತ್ತೂರು ರಾಣಿ ಚನ್ನಮ್ಮ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆಯಲ್ಲಿ ತೆರಳಿ, ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.

ಮುಡಾ ಹಗರಣದಲ್ಲಿ ರಾಜ್ಯಪಾಲರು ಮುಖ್ಯಮಂತ್ರಿಗಳ ವಿರುದ್ಧ ಖಾಸಗಿ ವ್ಯಕ್ತಿಗಳು ಮಾಡಿರುವ ಆರೋಪಗಳ ಬಗ್ಗೆ ತನಿಖೆಗೆ ಅನುಮತಿ ನೀಡಿದ ಕೂಡಲೇ ರಾಜ್ಯದಲ್ಲಿ ಕಾಂಗ್ರೆಸ್ ನಾಯಕರು ಹಾಗೂ ಬೆಂಬಲಿಗರು ಅವಹೇಳನಕಾರಿ ಹೇಳಿಕೆ ನೀಡುತ್ತಿದ್ದಾರೆ‌. ವೈಯಕ್ತಿಕವಾಗಿ ತೇಜೋವಧೆ ಮಾಡುತ್ತಿದ್ದಾರೆ. ಅಂಥವರ ಮೇಲೆ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.

ಅಧಿಕಾರಕ್ಕಾಗಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಹೆಸರನ್ನು ಬಳಸಿಕೊಳ್ಳುವ ಕಾಂಗ್ರೆಸ್, ಅಧಿಕಾರಕ್ಕೆ ಬಂದ ಮೇಲೆ ಆ ಜನಾಂಗಕ್ಕೆ ಉಪಯೋಗಿಸಬೇಕಾದ ಹಣ ದುರ್ಬಳಕೆ ಮಾಡಿಕೊಂಡಿದೆ. ನಿಯಮಾವಳಿಗಳ ಪ್ರಕಾರವೇ ಮುಖ್ಯಮಂತ್ರಿ ವಿರುದ್ಧ ತನಿಖೆ ನಡೆಸಲು ಅನುಮತಿ ನೀಡಿದ ಪರಿಶಿಷ್ಟ ಜಾತಿಗೆ ಸೇರಿದ ರಾಜ್ಯಪಾಲರನ್ನು ವೈಯಕ್ತಿಕವಾಗಿ ನಿಂದನೆ ಮಾಡುವ ಕೀಳುಮಟ್ಟಕ್ಕೆ ಇಳಿದಿರುವುದು ಅತ್ಯಂತ ದುರದೃಷ್ಟಕರ ಎಂದು ಆಕ್ರೋಶ ಹೊರಹಾಕಿದರು.

ರಾಜ್ಯದಲ್ಲಿ ಕಾಂಗ್ರೆಸ್ ತನ್ನ ಅಧಿಕಾರ ದುರುಪಯೋಗಪಡಿಸಿಕೊಂಡು ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ವರ್ಗಾವಣೆಗೆ ಕಾರಣರಾದ ಹಾಗೂ ಮುಡಾ ನಿವೇಶನಗಳನ್ನು ತಮ್ಮ ಪತ್ನಿಗೆ ಅಕ್ರಮವಾಗಿ ವರ್ಗಾವಣೆ ಮಾಡಿಸಿಕೊಳ್ಳುವ ಮೂಲಕ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ನಾಯಕರು ಈಗ ಶೋಷಿತ ವರ್ಗಕ್ಕೆ ಸೇರಿದ ರಾಜ್ಯಪಾಲರ ಮೇಲೆ ಮುಗಿ ಬಿದ್ದಿರುವುದು ಕಾಂಗ್ರೆಸ್ ಶೋಷಿತ ಸಮುದಾಯದ ವಿರೋಧಿ ಪ್ರವೃತ್ತಿಯನ್ನು ತೋರಿಸುತ್ತದೆ ಎಂದು ಆರೋಪಿಸಿದರು.

ಪ್ರತಿಭಟನೆಯಲ್ಲಿ ರಾಜ್ಯ ಬಿಜೆಪಿ ಉಪಾಧ್ಯಕ್ಷ ಅನಿಲ ಬೆನಕೆ, ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಸುಭಾಷ ಪಾಟೀಲ, ನಗರ ಘಟಕದ‌ ಅಧ್ಯಕ್ಷೆ ಗೀತಾ ಸುತಾರ, ಮಾಜಿ ಶಾಸಕರಾದ ಸಂಜಯ ಪಾಟೀಲ, ಡಾ.ವಿ.ಐ. ಪಾಟೀಲ, ಬಿಜೆಪಿ ಮುಖಂಡರಾದ ಮುರುಘೇಂದ್ರಗೌಡ ಪಾಟೀಲ, ಲೀನಾ ಟೋಪಣ್ಣವರ ಇನ್ನಿತರರು ಪಾಲ್ಗೊಂಡಿದ್ದರು.