ಸಾರಾಂಶ
ಕನ್ನಡಪ್ರಭ ವಾರ್ತೆ ಹಾವೇರಿ
ಮಂಡ್ಯ ಜಿಲ್ಲೆಯ ಕೆರಗೋಡಿನಲ್ಲಿ ಹನುಮಧ್ವಜವನ್ನು ತೆರವು ಮಾಡಿರುವ ಕಾಂಗ್ರೆಸ್ ಸರ್ಕಾರದ ಕ್ರಮ ಖಂಡಿಸಿ ಬಿಜೆಪಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.ಇಲ್ಲಿಯ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಬಿಜೆಪಿ ಮುಖಂಡರು, ಕಾರ್ಯಕರ್ತರು ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ಬಿ.ಸಿ. ಪಾಟೀಲ ಮಾತನಾಡಿ, ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದ್ದು, ಒಂದು ಕೋಮಿನ ತುಷ್ಟೀಕರಣಕ್ಕೆ ಏನು ಬೇಕಾದರೂ ಮಾಡಲು ಮುಂದಾಗುತ್ತಿದೆ. ಮಂಡ್ಯ ಜಿಲ್ಲೆಯ ಕೆರಗೋಡಿನಲ್ಲಿ ಸ್ಥಳೀಯ ಗ್ರಾಪಂ ಅನುಮತಿಯೊಂದಿಗೆ ಹನುಮ ಧ್ವಜವನ್ನು ಹಾರಿಸಲಾಗಿತ್ತು. ಸರ್ಕಾರ, ಸ್ಥಳೀಯ ಶಾಸಕರ ಪ್ರಚೋದನೆಯಿಂದ ಪೊಲೀಸರೇ ನಿಂತು ಅದನ್ನು ಇಳಿಸಿದ್ದಾರೆ. ರಾಜ್ಯ ಸರ್ಕಾರವು ನಿರಂತರವಾಗಿ ಹಿಂದೂ ವಿರೋಧಿ ಧೋರಣೆ ಅನುಸರಿಸುತ್ತಿದ್ದು, ದಬ್ಬಾಳಿಕೆ ನಡೆಸುತ್ತಿದೆ ಎಂದು ವಾಗ್ದಾಳಿ ನಡೆಸಿದರು.
ನಾವು ಅಧಿಕಾರಕ್ಕೆ ಬಂದರೆ ಭಜರಂಗದಳ ನಿಷೇಧಿಸುತ್ತೇವೆ ಎಂದು ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಘೋಷಿಸಿತ್ತು. ಈಗ ಹನುಮಧ್ವಜಕ್ಕೆ ಕೈಹಾಕಿದ್ದು, ನಿಷೇಧದ ಮೊದಲ ಹೆಜ್ಜೆಯಾಗಿದೆ. ಮಂಡ್ಯದ ಹನುಮಪ್ಪನಿಗೆ ಕೈಹಚ್ಚಿದ್ದಾರೆ ಎಂದರೆ ಇಂಡಿಯಾ ಹನುಮಪ್ಪನಿಗೇ ಕೈಹಾಕಿದಂತೆ. ಒಂದು ಕೋಮನ್ನು ತುಷ್ಟೀಕರಣ ಮಾಡಲು ಕಾಂಗ್ರೆಸ್ ಯಾವ ಮಟ್ಟಕ್ಕೆ ಇಳಿದಿದೆ ಎನ್ನಲು ಇದು ಉದಾಹರಣೆ. ಅಲ್ಲಿ ಪಾಕಿಸ್ತಾನದ ಧ್ವಜ ಹಾರಿಸಿದ್ದರೆ ಸಿದ್ದರಾಮಯ್ಯ ಪೊಲೀಸರಿಗೆ ಮೆಡಲ್ ಕೊಡುತ್ತಿದ್ದರು. ಶೋಷಿತರು, ಹಿಂದುಳಿದವರ ಹೆಸರು ಹೇಳಿಕೊಂಡು ಅಧಿಕಾರಕ್ಕೆ ಬಂದಿರುವ ಸಿಎಂ ಸಿದ್ದರಾಮಯ್ಯ ದಲಿತರಿಗೆ ಮೀಸಲಿಟ್ಟ ಹಣವನ್ನು ಗ್ಯಾರಂಟಿ ಯೋಜನೆಗೆ ಬಳಸಿಕೊಂಡಿದ್ದಾರೆ. ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯ ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ರಾಷ್ಟ್ರಪತಿಗಳನ್ನು ಏಕವಚನದಲ್ಲಿ ಸಂಭೋದಿಸುತ್ತಾರೆ. ಇದು ಅವರ ಸಂಸ್ಕೃತಿಯನ್ನು ತಿಳಿಸುತ್ತದೆ. ನಡವಳಿಕೆ ಬದಲಿಸಿಕೊಳ್ಳದಿದ್ದರೆ ಸರ್ಕಾರದ ವಿರುದ್ಧ ಉಗ್ರ ಹೋರಾಟ ನಡೆಸಬೇಕಾಗುತ್ತದೆ. ಹನುಮಧ್ವಜ ಇಳಿಸಿದ್ದಕ್ಕೆ ಸರ್ಕಾರ ಕ್ಷಮೆ ಕೇಳಬೇಕು. ಪೊಲೀಸರು ಕಾಂಗ್ರೆಸ್ ಕೈಗೊಂಬೆಯಾಗಿದ್ದಾರೆ. ಹಿಂದೂಗಳ ಭಾವನೆಗೆ ಧಕ್ಕೆಯಾದರೆ ಸಹಿಸುವುದಿಲ್ಲ. ಲಂಕೆಯನ್ನು ಹನುಮಂತ ಸುಟ್ಟ ರೀತಿಯಲ್ಲಿ ಈ ಘಟನೆ ದೇಶದಲ್ಲಿ ಕಾಂಗ್ರೆಸ್ ಧೂಳಿಪಟ ಮಾಡಲಿದೆ ಎಂದು ಕಿಡಿಕಾರಿದರು.ಪಕ್ಷದ ಜಿಲ್ಲಾಧ್ಯಕ್ಷ ಅರುಣಕುಮಾರ ಪೂಜಾರ ಮಾತನಾಡಿ, ಮಂಡ್ಯದಲ್ಲಿ ಹನುಮಧ್ವಜ ತೆರವುಗೊಳಿಸಿರುವ ಸರ್ಕಾರದ ಕ್ರಮ ಖಂಡನೀಯ. ಹಿಂದೂಗಳು ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಮುಂದೊಂದು ದಿನ ದೇಶ ಪಾಕಿಸ್ತಾನವಾಗುತ್ತದೆ. ಸರ್ಕಾರದ ದುರಾಡಳಿತದ ವಿರುದ್ಧ ನಮ್ಮ ಹೋರಾಟ ಮುಂದುವರಿಯುತ್ತದೆ. ಹಿಂದೂಗಳ ಭಾವನೆ ಕೆರಳಿಸುವ ಕೆಲಸ ಮಾಡಿದರೆ ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದರು.
ಮಾಜಿ ಶಾಸಕ ವಿರುಪಾಕ್ಷಪ್ಪ ಬಳ್ಳಾರಿ ಮಾತನಾಡಿ, ಸಿಎಂ ಸಿದ್ದರಾಮಯ್ಯ ಅವರು ತುಘಲಕ್ ದರ್ಬಾರ್ ನಡೆಸುತ್ತಿದ್ದಾರೆ. ಸಿದ್ದರಾಮಯ್ಯ ಕಾಂಗ್ರೆಸ್‌ನ ಕೊನೆಯ ಮುಖ್ಯಮಂತ್ರಿಯಾಗಲಿದ್ದಾರೆ. ಒಂದು ಕೋಮಿನವರನ್ನು ಓಲೈಸಲು ಕಾಂಗ್ರೆಸ್ ಸರ್ಕಾರ ಹಿಂದೂಗಳ ಭಾವನೆಗೆ ಧಕ್ಕೆ ತರುವ ಕೆಲಸ ಮಾಡುತ್ತಿದೆ. ಇದನ್ನು ನೋಡುತ್ತ ನಾವು ಸುಮ್ಮನೆ ಕೂರುವುದಿಲ್ಲ. ಬರುವ ಲೋಕಸಭಾ ಚುನಾವಣೆಯಲ್ಲಿ ಜನತೆ ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಲಿದ್ದು, ರಾಜ್ಯದ 28 ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲುವುದು ನಿಶ್ಚಿತ ಎಂದು ಹೇಳಿದರು.ಮಾಜಿ ಶಾಸಕ ಶಿವರಾಜ ಸಜ್ಜನರ, ಪ್ರಮುಖರಾದ ಸಿದ್ದರಾಜ ಕಲಕೋಟಿ, ಗವಿಸಿದ್ದಪ್ಪ ದ್ಯಾಮಣ್ಣನವರ, ಕೆ. ಶಿವಲಿಂಗಪ್ಪ, ಮಂಜುನಾಥ ಮಡಿವಾಳರ, ನರಹರಿ ಕಟ್ಟಿ, ನಿರಂಜನ ಹೇರೂರ, ನಂಜುಂಡೇಶ್ ಕಳ್ಳೇರ, ಶಶಿಧರ ಹೊಸಳ್ಳಿ, ಸುರೇಶ ಹೊಸಮನಿ, ರುದ್ರೇಶ ಚಿನ್ನಣ್ಣನವರ, ಭಾರತಿ ಜಂಬಗಿ, ಲಲಿತಾ ಗುಂಡೇನಹಳ್ಳಿ ಸೇರಿದಂತೆ ಅನೇಕರು ಇದ್ದರು.