ಸಾರ್ವಜನಿಕರಿಂದ ಭಿಕ್ಷೆ ಸಂಗ್ರಹಿಸುವ ಮೂಲಕ ವಿನೂತನವಾಗಿ ನಗರದಲ್ಲಿ ಗುರುವಾರ ಸಂಜೆ ಪ್ರತಿಭಟನೆ ನಡೆಸಲಾಯಿತು
ಬಳ್ಳಾರಿ: ರಾಜ್ಯದ ಕಾಂಗ್ರೆಸ್ ಸರ್ಕಾರ ಜನಸಾಮಾನ್ಯರ ಮೇಲೆ ನಿರಂತರವಾಗಿ ಬೆಲೆ ಏರಿಕೆಯ ಬರೆ ಎಳೆಯುವ ಮೂಲಕ ಜನವಿರೋಧಿ ಆಡಳಿತ ನಡೆಸುತ್ತಿದೆ ಎಂದು ಆರೋಪಿಸಿ ಸರ್ಕಾರದ ಬೆಲೆ ಏರಿಕೆ ನೀತಿ ಖಂಡಿಸಿ ಮಾಜಿ ಶಾಸಕ ಜಿ. ಸೋಮಶೇಖರ ರೆಡ್ಡಿ ನೇತೃತ್ವದಲ್ಲಿ ಸಾರ್ವಜನಿಕರಿಂದ ಭಿಕ್ಷೆ ಸಂಗ್ರಹಿಸುವ ಮೂಲಕ ವಿನೂತನವಾಗಿ ನಗರದಲ್ಲಿ ಗುರುವಾರ ಸಂಜೆ ಪ್ರತಿಭಟನೆ ನಡೆಸಲಾಯಿತು.
ಇಲ್ಲಿನ ಗಡಗಿಚನ್ನಪ್ಪ ವೃತ್ತದಲ್ಲಿ ಜಮಾಯಿಸಿದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರಲ್ಲದೆ, ಬೀದಿ ಬದಿಯ ವ್ಯಾಪಾರಿಗಳಿಂದ ಭಿಕ್ಷೆ ಬೇಡುವ ಮೂಲಕ ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದರು.ಇದೇ ವೇಳೆ ಮಾತನಾಡಿದ ಜಿ.ಸೋಮಶೇಖರ ರೆಡ್ಡಿ ಅವರು, ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಮತ್ತಷ್ಟು ಆರ್ಥಿಕ ಹೊರೆ ಹೊರಿಸುವ ನಿರ್ಧಾರ ರಾಜ್ಯ ಸರ್ಕಾರ ಕೈಗೊಂಡಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಒಂದಿಲ್ಲೊಂದು ರೀತಿಯಲ್ಲಿ ಬೆಲೆ ಏರಿಕೆ ಮಾಡಲಾಗುತ್ತಿದೆ. ಜನರಿಗೆ ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಆಮಿಷವೊಡ್ಡಿ ಅಧಿಕಾರಕ್ಕೆ ಬಂದ ಸರ್ಕಾರ ಇದೀಗ ವಿವಿಧ ಸೇವೆ ಹಾಗೂ ಅಗತ್ಯ ವಸ್ತುಗಳ ದರ ಹೆಚ್ಚಿಸುವ ಮೂಲಕ ಜನರ ಜೇಬಿಗೆ ಕತ್ತರಿ ಹಾಕುತ್ತಿದೆ. ಹಾಲು ಪ್ರತಿಯೊಂದು ಕುಟುಂಬದ ದಿನನಿತ್ಯದ ಅಗತ್ಯ ವಸ್ತುವಾಗಿದೆ. ಅದರಲ್ಲೂ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳು ಪ್ರತಿದಿನ ಹಾಲನ್ನು ಅವಲಂಬಿಸಿವೆ. ಇಂತಹ ಸಂದರ್ಭದಲ್ಲಿ ಹಾಲಿನ ದರ ಹೆಚ್ಚಿಸಿರುವುದು ಸಾಮಾನ್ಯ ಜನರ ಕುಟುಂಬ ನಿರ್ವಹಣೆಯ ಮೇಲೆ ಪರಿಣಾಮ ಬೀರಲಿದೆ. ಮಕ್ಕಳಿರುವ ಕುಟುಂಬಗಳು, ವೃದ್ಧರು ಹಾಗೂ ಆರ್ಥಿಕವಾಗಿ ದುರ್ಬಲ ವರ್ಗದ ಜನರಿಗೆ ಈ ದರ ಏರಿಕೆ ಹೊರೆಯಾಗಲಿದೆ ಎಂದು ತಿಳಿಸಿದರು.
ಬಸ್ ಪ್ರಯಾಣ ದರ ಹೆಚ್ಚಳದಿಂದ ವಿದ್ಯಾರ್ಥಿಗಳು,ನೌಕರರು, ಕಾರ್ಮಿಕರು, ವ್ಯಾಪಾರಿಗಳು ಸೇರಿದಂತೆ ಪ್ರತಿನಿತ್ಯ ಸಾರ್ವಜನಿಕ ಸಾರಿಗೆ ಅವಲಂಬಿಸಿರುವ ಲಕ್ಷಾಂತರ ಪ್ರಯಾಣಿಕರಿಗೆ ತೊಂದರೆಯಾಗಲಿದೆ. ಈಗಾಗಲೇ ದಿನನಿತ್ಯದ ಖರ್ಚು ನಿಭಾಯಿಸಲು ಪರದಾಡುತ್ತಿರುವ ಜನರಿಗೆ ಪ್ರಯಾಣ ವೆಚ್ಚ ಹೆಚ್ಚಳ ಮತ್ತಷ್ಟು ಹೊರೆಯಾಗಲಿದೆ. ಸರ್ಕಾರ ಜನರ ಸಂಕಷ್ಟ ಅರ್ಥಮಾಡಿಕೊಂಡು ಆಡಳಿತ ನಡೆಸಬೇಕೇ ಹೊರತು, ಜನರ ಮೇಲೆ ನಿರಂತರವಾಗಿ ಆರ್ಥಿಕ ಹೊರೆ ಹೇರುವುದು ಸರಿಯಲ್ಲ ಎಂದರು.ಜನಪರ ಆಡಳಿತ ನೀಡುವುದಾಗಿ ಭರವಸೆ ನೀಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ, ಇದೀಗ ಜನಸಾಮಾನ್ಯರ ಬದುಕನ್ನು ದುಸ್ತರಗೊಳಿಸುತ್ತಿದೆ. ಬೆಲೆ ಏರಿಕೆ ನಿಯಂತ್ರಿಸುವ ಬದಲು ವಿವಿಧ ಕ್ಷೇತ್ರಗಳಲ್ಲಿ ದರ ಹೆಚ್ಚಳಕ್ಕೆ ಮುಂದಾಗಿರುವುದು ಖಂಡನೀಯ. ಸರ್ಕಾರ ಕೂಡಲೇ ಜನವಿರೋಧಿ ನಿರ್ಧಾರ ಹಿಂಪಡೆಯಬೇಕು. ಹಾಲು ಮತ್ತು ಬಸ್ ಪ್ರಯಾಣ ದರ ಹೆಚ್ಚಳ ಮರುಪರಿಶೀಲಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕು ಎಂದು ಮಾಜಿ ಶಾಸಕ ಜಿ.ಸೋಮಶೇಖರ ರೆಡ್ಡಿ ತಿಳಿಸಿದರು.
ಪಕ್ಷದ ಮುಖಂಡರಾದ ಶ್ರೀನಿವಾಸ ಮೋತ್ಕರ್, ಗಣಪಾಲ ಐನಾಥರೆಡ್ಡಿ, ಅಡವಿಸ್ವಾಮಿ ಸೇರಿದಂತೆ ಯುವ ಮೋರ್ಚಾದ ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.