ಹಾಲಿನ ದರ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ

| Published : Jul 02 2024, 01:31 AM IST

ಸಾರಾಂಶ

ನಂದಿನಿ ಹಾಲಿನ ದರ ಹೆಚ್ಚಳ ಮಾಡಿದ ಸಿದ್ದರಾಮಯ್ಯ ಸರ್ಕಾರ ಗ್ರಾಹಕರನ್ನು ದೋಚುತ್ತಿದೆ. ದಿನ ಬೆಳಗಾದರೆ ಈ ಲೂಟಿಕೋರ ಸರ್ಕಾರ ಯಾವ ಬೆಲೆ ಹೆಚ್ಚಳ ಮಾಡಿದೆ ಎಂದು ನೋಡುವಂತಾಗಿದೆ.

ಶಿರಸಿ: ನಂದಿನಿ ಹಾಲಿನ ದರ ಹೆಚ್ಚಳ ಖಂಡಿಸಿ, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಜಿಲ್ಲಾ ರೈತ ಮೋರ್ಚಾ ವತಿಯಿಂದ ನಗರದ ಸಹಾಯಕ ಆಯುಕ್ತರ ಕಚೇರಿ ಎದುರು ಪ್ರತಿಭಟನೆ ನಡೆಸಿ, ಸಹಾಯಕ ಆಯುಕ್ತರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.ಸಹಾಯಕ ಆಯುಕ್ತರ ಕಚೇರಿ ಎದುರು ಜಮಾಯಿಸಿದ ಬಿಜೆಪಿ ಕಾರ್ಯಕರ್ತರು, ಸರ್ಕಾರದ ವಿರುದ್ಧ ಘೋಷಣೆ ಕೂಗಿ, ನಂದಿನಿ ಹಾಲು ದರ ಇಳಕೆ ಮಾಡುವಂತೆ ಆಗ್ರಹಿಸಿದರು.ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ ಹೆಗಡೆ ಹರ್ತೆಬೈಲ್ ಮಾತನಾಡಿ, ನಂದಿನಿ ಹಾಲಿನ ದರ ಹೆಚ್ಚಳ ಮಾಡಿದ ಸಿದ್ದರಾಮಯ್ಯ ಸರ್ಕಾರ ಗ್ರಾಹಕರನ್ನು ದೋಚುತ್ತಿದೆ. ದಿನ ಬೆಳಗಾದರೆ ಈ ಲೂಟಿಕೋರ ಸರ್ಕಾರ ಯಾವ ಬೆಲೆ ಹೆಚ್ಚಳ ಮಾಡಿದೆ ಎಂದು ನೋಡುವಂತಾಗಿದೆ ಎಂದು ಆರೋಪಿಸಿದರು.ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ, ನೋಂದಣಿ ಮತ್ತು ಮುದ್ರಾಂಕ ಶುಲ್ಕ ಹೆಚ್ಚಳ ಹೀಗೆ ಬೆಲೆ ಏರಿಕೆಯನ್ನೇ ಸರ್ಕಾರದ ಕೆಲಸ ಎಂದು ಕಾಂಗ್ರೆಸ್ ಸರ್ಕಾರ ಭಾವಿಸಿದಂತಿದೆ. ಜು. ೩ರಂದು ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ನೇತೃತ್ವದಲ್ಲಿ ರಾಜ್ಯದ ಶಾಸಕರು, ವಿಧಾನ ಪರಿಷತ್ ಸದಸ್ಯರು ಮುಖ್ಯಮಂತ್ರಿ ಸಿದ್ದರಾಮಯ್ಯ ಮನೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಿದ್ದಾರೆ. ಬಿಜೆಪಿಯ ಗ್ರಾಹಕ ಪರ, ರೈತಪರ ಹಾಗೂ ಜನಪರ ಹೋರಾಟ ಈ ಭ್ರಷ್ಟ ಸರ್ಕಾರಕ್ಕೆ ಬಿಸಿ ಮುಟ್ಟಿಸಲಿದೆ. ಆಡಳಿತ ನಡೆಸಲು ಸಾಧ್ಯವಾಗದಿದ್ದರೆ ಅಧಿಕಾರ ಬಿಟ್ಟು ಇಳಿಯಬೇಕು ಎಂದು ಆಗ್ರಹಿಸಿದರು.ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ರಮೇಶ ನಾಯ್ಕ ಮಾತನಾಡಿ, ಹಾಲಿನ ಪ್ರೋತ್ಸಾಹಧನ ನೀಡಲೂ ರಾಜ್ಯ ಸರ್ಕಾರ ವಿಫಲವಾಗಿದೆ. ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳಿಗೆ ಪರಿಹಾರ ನೀಡದೆ ಅಮಾನವೀಯವಾಗಿ ಸರ್ಕಾರ ನಡೆದುಕೊಂಡಿದೆ. ಬಿತ್ತನೆ ಬೀಜ, ಪಶು ಆಹಾರದ ದರ ಹೆಚ್ಚಳ ಹೇಗೆ ರೈತರಿಗೆ ಅನ್ಯಾಯ ಮಾಡುತ್ತಿರುವ ಸರ್ಕಾರ ತೊಲಗಬೇಕು. ರೈತ ವಿದ್ಯಾನಿಧಿ ಹಾಗೂ ರೈತ ಶಕ್ತಿ ಯೋಜನೆಗಳನ್ನು ಈ ಸರ್ಕಾರ ನಿಲ್ಲಿಸಿದೆ ಎಂದು ಆರೋಪಿಸಿದರು.ಸಹಾಯಕ ಆಯುಕ್ತರ ಕಚೇರಿ ತಹಸೀಲ್ದಾರ್‌ ಶ್ರೀಕೃಷ್ಣ ಕಾಮ್ಕರ ಮನವಿ ಸ್ವೀಕರಿಸಿ, ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಕಳುಹಿಸುವ ಭರವಸೆ ನೀಡಿದರು.ಪ್ರತಿಭಟನೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಶಾಂತ ನಾಯ್ಕ ಕುಮಟಾ, ಜಿಲ್ಲಾ ರೈತ ಮೋರ್ಚಾ ಉಪಾಧ್ಯಕ್ಷ ಅನಂತಮೂರ್ತಿ ಹೆಗಡೆ, ನಗರ ಮಂಡಲ ಅಧ್ಯಕ್ಷ ಆನಂದ ಸಾಲೇರ, ಗ್ರಾಮೀಣ ಮಂಡಲ ಅಧ್ಯಕ್ಷೆ ಉಷಾ ಹೆಗಡೆ, ಸಹಕಾರ ಪ್ರಕೋಷ್ಠದ ಜಿಲ್ಲಾ ಸಂಚಾಲಕ ಆರ್.ವಿ. ಹೆಗಡೆ ಚಿಪಗಿ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಶ್ರೀರಾಮ ನಾಯ್ಕ, ಜಿಲ್ಲಾ ಕೋಶಾಧ್ಯಕ್ಷ ರಮಾಕಾಂತ್ ಭಟ್, ಪ್ರಮುಖರಾದ ಬಸಣ್ಣ ಕುರುಬರಗಟ್ಟಿ, ಗಣೇಶ ಸಣ್ಣಲಿಂಗಣ್ಣವರ್, ಆರ್.ಡಿ. ಹೆಗಡೆ ಜಾನ್ಮನೆ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.