ಸಾರಾಂಶ
ಕನ್ನಡಪ್ರಭ ವಾರ್ತೆ ಮೈಸೂರು
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ನಗರದ ಗಾಂಧಿ ಚೌಕದಲ್ಲಿ ಗುರುವಾರ ಪ್ರತಿಭಟಿಸಿದರು.ನೂರಾರು ಮಂದಿ ಮಾನವ ಸರಪಳಿ ರಚಿಸಿ ಭ್ರಷ್ಟಚಾರಿ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ, ಬೆಲೆ ಏರಿಕೆ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ, ತೊಲಗಲಿ ತೊಲಗಲಿ ಕಾಂಗ್ರೆಸ್ ಸರ್ಕಾರ ತೊಲಗಲಿ ಸೇರಿದಂತೆ ಇನ್ನಿತರ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದ ಜನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತ ನೀಡಿದ್ದಾರೆ ಎಂಬ ಕಾರಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಜನರ ಮೇಲೆ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರ ಜನರ ಭಾವನೆಯನ್ನು ಅಗೌರವದಿಂದ ನೋಡುತ್ತಿದೆ. ಒಂದೆಡೆ ಅಭಿವೃದ್ಧಿ ಕಾರ್ಯಗಳು ನಿಂತು ಹೋಗಿದ್ದರೆ, ಇನ್ನೊಂದಡೆ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಭ್ರಷ್ಟಾಚಾರ ರಾಜ್ಯದಲ್ಲಿ ಮಿತಿ ಮೀರಿದೆ ಎಂದು ಅವರು ಆರೋಪಿಸಿದರು.9 ಅಗತ್ಯ ವಸ್ತುಗಳ ಬೆಲೆ ಏರಿಕೆ:
ಈ ವೇಳೆ ಶಾಸಕ ಟಿ.ಎಸ್. ಶ್ರೀವತ್ಸ ಮಾತನಾಡಿ, ಕಳೆದ ಒಂದು ವರ್ಷದಿಂದ ತಿಂಗಳಿಗೆ ಒಂದೊಂದರಂತೆ 9 ಅಗತ್ಯ ವಸ್ತುಗಳ ಮೇಲೆ ಬೆಲೆ ಏರಿಕೆ ಜನರ ಬದುಕಿಗೆ ಹೊರೆಯಾಗುತ್ತಿದೆ. ವಿದ್ಯುತ್ ದರವನ್ನು ಹೆಚ್ಚಿಸಿ ರೈತರ ಹೆಗಲಿಗೆ ಬರೆ ಎಳೆಯಲಾಗಿದೆ. ಗ್ಯಾರಂಟಿಗಾಗಿ ಪರಿಶಿಷ್ಟರ 11 ಸಾವಿರ ಕೋಟಿ ಅನುದಾನ ಬಳಕೆ ಮಾಡಿ ದ್ರೋಹವೆಸಗಲಾಗಿದೆ ಎಂದು ದೂರಿದರು.ಹಿಂದೂ ಕರಸೇವಕ ಬಂಧನ, ಸಕಾಲಕ್ಕೆ ಸಾಲ ನೀಡಿಲ್ಲ. ಆಸ್ತಿ ತೆರಿಗೆಯನ್ನು ಹೆಚ್ಚಿಸಿದೆ. ಶಕ್ತಿ ಯೋಜನೆಯ ಮೂಲಕ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದರೇ ಟಿಕೆಟ್ ದರ ಹೆಚ್ಚಿಸಿ ಗಂಡಂದಿನಿಂದ ವಸೂಲಿ ಮಾಡಲಾಗುತ್ತಿದೆ. ಈ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸಬೇಕು ಎಂದು ಅವರು ಆಗ್ರಹಿಸಿದರು.
ಜನ ಜೀವನ ಅಸ್ತವ್ಯಸ್ಥ:ಬಿಜೆಪಿ ನಗರಾಧ್ಯಕ್ಷರಾದ ಮಾಜಿ ಶಾಸಕ ಎಲ್. ನಾಗೇಂದ್ರ ಮಾತನಾಡಿ, ಇಂಧನದ ಬೆಲೆ ಏರಿಕೆಗೊಂಡರೇ ಕೇವಲ ಪೆಟ್ರೋಲ್- ಡೀಸೆಲ್ ಬೆಲೆ ಏರಿಕೆಯಾಗಲ್ಲ. ತರಕಾರಿಗಳು, ಆಹಾರ ಪದಾರ್ಥಗಳು, ಹೋಟೆಲ್ ತಿಂಡಿ ತಿನಿಸುಗಳ ಬೆಲೆಯೂ ದುಪ್ಪಟ್ಟಾಗಿ ಸಾರ್ವಜನಿಕರ ಜೀವನ ಅಸ್ತವ್ಯಸ್ಥವಾಗಲಿದೆ ಎಂದು ಆರೋಪಿಸಿದರು.
ರಾಜ್ಯದ ಕಾಲೇಜುಗಳಲ್ಲಿ ವಿದ್ಯಾರ್ಥಿನಿಯರು ನೆಮ್ಮದಿಯಿಂದ ಓಡಾಡಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಹಿಂದೂತ್ವ ಮೇಲಿನ ದ್ವೇಷ ರಾಜಕಾರಣದಿಂದ ಸರ್ಕಾರ ಈ ರೀತಿ ಮಾಡುತ್ತಿದೆ ಎಂದು ಅವರು ದೂರಿದರು.ಮಾಜಿ ಮೇಯರ್ ಗಳಾದ ಶಿವಕುಮಾರ್, ಸಂದೇಶ್ ಸ್ವಾಮಿ, ಮುಖಂಡರಾದ ಮಿರ್ಲೆ ಶ್ರೀನಿವಾಸ್ ಗೌಡ, ಜಗದೀಶ್, ಗೆಜ್ಜಗಳ್ಳಿ ಮಹೇಶ್, ಶೈಲೇಂದ್ರ, ಶಂಕರ್, ಜೋಗಿ ಮಂಜು, ಕೇಬಲ್ ಮಹೇಶ್, ಮಹೇಶ್ ರಾಜೇ ಅರಸ್, ಕಿರಣ್ ಗೌಡ, ಗಿರೀಶ್ ಗೌಡ ಮೊದಲಾದವರು ಇದ್ದರು.