ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ

| Published : Jun 18 2024, 12:46 AM IST

ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ
Share this Article
  • FB
  • TW
  • Linkdin
  • Email

ಸಾರಾಂಶ

ಮಡಿಕೇರಿ ನಗರಸಭೆ ಎದುರು ಜಮಾವಣೆಗೊಂಡ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ತಮ್ಮ ಅಸಮಾಧಾನ ಹೊರಹಾಕಿದರು.

ಕನ್ನಡಪ್ರಭ ವಾರ್ತೆ ಮಡಿಕೇರಿ

ರಾಜ್ಯ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವುದನ್ನು ಖಂಡಿಸಿ ಜಿಲ್ಲಾ ಬಿಜೆಪಿ ಕಾರ್ಯಕರ್ತರು ಮಡಿಕೇರಿಯಲ್ಲಿ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.

ಮಡಿಕೇರಿ ನಗರ ಸಭೆ ಎದುರು ಜಮಾವಣೆಗೊಂಡ ಬಿಜೆಪಿ ಪ್ರಮುಖರು ಮತ್ತು ಕಾರ್ಯಕರ್ತರು ನಗರಸಭೆಯಿಂದ ಜನರಲ್ ತಿಮ್ಮಯ್ಯ ವೃತ್ತದವರೆಗೆ ಕಾರಿಗೆ ಹಗ್ಗ ಕಟ್ಟಿ ಎಳೆಯುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.

ಇದೇ ಸಂದರ್ಭ ಮಾಜಿ ಶಾಸಕರಾದ ಅಪ್ಪಚ್ಚು ರಂಜನ್, ಕೆ ಜಿ ಬೋಪಯ್ಯ, ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ರವಿ ಕಾಳಪ್ಪ ಮತ್ತಿತರರು ಸೈಕಲ್ ತುಳಿಯುವ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತಮ್ಮ ಅಸಮಾಧಾನ ಹೊರಹಾಕಿದರು.

ಜನರಲ್ ತಿಮ್ಮಯ್ಯ ವೃತ್ತದಲ್ಲಿ ಅರ್ಧ ಗಂಟೆ ಕಾಲ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಕೂಡಲೇ ಬೆಲೆ ಏರಿಕೆಯನ್ನು ಹಿಂಪಡೆಯುವಂತೆ ಒತ್ತಾಯಿಸಿದರು.

ಈ ಸಂದರ್ಭ ಮಾತನಾಡಿದ ಮಡಿಕೇರಿ ಮಾಜಿ ಶಾಸಕ ಅಪ್ಪಚ್ಚು ರಂಜನ್ ಬಡವರ ಪರವಾಗಿ ಇದ್ದೇವೆ ಎನ್ನುವ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಹೆಚ್ಚಿಸುವ ಮೂಲಕ ಬಡವರಿಗೆ ದ್ರೋಹ ಬಗೆಯುತ್ತಿದೆ ಎಂದಿದ್ದಾರೆ. ಅಂತಾರಾಷ್ಟ್ರೀಯ ಮಟ್ಟದಲ್ಲಿಯೂ ಕಚ್ಚಾ ತೈಲ ಬೆಲೆ ತುಂಬಾ ಕಡಿಮೆ ಇದೆ. ಬೇರೆ ಬೇರೆ ರಾಜ್ಯಗಳಲ್ಲೂ ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆ ಇದೆ. ಆದರೆ ಸಿದ್ದರಾಮಯ್ಯ ಅವರು ಇಲ್ಲಿ ಅವುಗಳ ಬೆಲೆ ಜಾಸ್ತಿ ಮಾಡಿ ಜನರಿಗೆ ದ್ರೋಹ ಬಗೆಯುತ್ತಿದ್ದಾರೆ ಎಂದರು.

ಮಾಜಿ ಸ್ಪೀಕರ್ ಹಾಗೂ ವಿರಾಜಪೇಟೆ ಮಾಜಿ ಶಾಸಕ ಕೆ.ಜಿ. ಬೋಪಯ್ಯ ಮತನಾಡಿ, ಯಾರೂ ನಿರೀಕ್ಷಿಸದ ರೀತಿಯಲ್ಲಿ ಕಾಂಗ್ರೆಸ್ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಿಸಿ ಜನರಿಂದ ಲೂಟಿ ಹೊಡೆಯಲು ಮುಂದಾಗಿದೆ. ಹೀಗಾಗಿ ಕರ್ನಾಟಕ ರಾಜ್ಯಕ್ಕೆ ಜೂನ್ 15 ಕರಾಳ ದಿನ ಎಂದೇ ಹೇಳಬೇಕು ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿದರು.

ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಹಾಗೂ ವಿವಿಧ ಮೋರ್ಚಗಳ ಪದಾಧಿಕಾರಿಗಳು ಭಾಗಿಯಾಗಿದ್ದರು.