ಸಾರಾಂಶ
ರಾಜ್ಯ ಬಜೆಟ್‌ನಲ್ಲಿ ಮುಸ್ಲಿಂ ಧರ್ಮಿಯರಿಗೆ ಹೆಚ್ಚಿನ ಆದ್ಯತೆ ನೀಡಿರುವುದನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.
ಕನ್ನಡಪ್ರಭ ವಾರ್ತೆ ಬಳ್ಳಾರಿ
ರಾಜ್ಯ ಬಜೆಟ್‌ನಲ್ಲಿ ಮುಸ್ಲಿಂ ಧರ್ಮಿಯರಿಗೆ ಹೆಚ್ಚಿನ ಆದ್ಯತೆ ನೀಡಿರುವುದನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.ನಾಲ್ಕು ಲಕ್ಷ ಕೋಟಿ ರು.ಗಳ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲ ಸಮುದಾಯಗಳಿಗೆ ಸಮನಾಗಿ ಹಂಚಿಕೆ ಮಾಡಿಲ್ಲ. ಮುಸ್ಲಿಮರ ತುಷ್ಟೀಕರಣಕ್ಕಾಗಿ ಬಜೆಟ್‌ನ ಶೇ. 20ರಷ್ಟು ಮುಸ್ಲಿಂ ಸಮುದಾಯಕ್ಕೆ ಮೀಸರಿಸಲಾಗಿದೆ. ಎಸ್ಸಿ-ಎಸ್ಟಿ ಸೇರಿದಂತೆ ಉಳಿದ ಸಮುದಾಯಗಳನ್ನು ಕಡೆಗಣಿಸಲಾಗಿದೆ. ಶಿಕ್ಷಣ, ಆರೋಗ್ಯ, ಕೃಷಿ ಮತ್ತಿತರ ಕ್ಷೇತ್ರಗಳನ್ನು ಸಹ ನಿರ್ಲಕ್ಷ್ಯಿಸಲಾಗಿದೆ. ಓಟ್ ಬ್ಯಾಂಕ್ ರಾಜಕಾರಣಕ್ಕಾಗಿ ಮುಸ್ಲಿಂ ಓಲೈಕೆಗೆ ಸಿಎಂ ಸಿದ್ದರಾಮಯ್ಯ ಮುಂದಾಗಿದ್ದಾರೆ ಎಂದು ಪ್ರತಿಭಟನಾಕಾರರು ದೂರಿದರು.
ರಾಜ್ಯ ಬಜೆಟ್‌ನಲ್ಲಿ ಬಳ್ಳಾರಿಯನ್ನು ಸಂಪೂರ್ಣ ಕಡೆಗಣಿಸಲಾಗಿದೆ. ಈ ಭಾಗದ ಯಾವುದೇ ಪ್ರಮುಖ ಯೋಜನೆಗಳ ಪ್ರಸ್ತಾಪವಾಗಿಲ್ಲ. ಈ ಹಿಂದೆ ಘೋಷಿತ ಯೋಜನೆಗಳಿಗೆ ಅನುದಾನ ನೀಡಿಲ್ಲ. ಕಳೆದ ಬಾರಿಯೂ ಬಳ್ಳಾರಿ ಜಿಲ್ಲೆಯನ್ನು ಕಡೆಗಣಿಸಲಾಗಿತ್ತು. ಈ ಬಾರಿಯೂ ನಿರ್ಲಕ್ಷ್ಯ ಮುಂದುವರಿದಿದೆ. ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯ ಕಾಂಗ್ರೆಸ್ ಶಾಸಕರಿದ್ದರೂ ಜಿಲ್ಲೆಗೆ ನ್ಯಾಯ ಸಿಕ್ಕಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.ನಗರದ ಗಡಗಿಚನ್ನಪ್ಪ ವೃತ್ತದಲ್ಲಿ ಕೆಲ ಹೊತ್ತು ಪ್ರತಿಭಟನಾಧರಣಿ ನಡೆಸಿದ ಪಕ್ಷದ ಕಾರ್ಯಕರ್ತರು, ಸಿಎಂ ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿದರಲ್ಲದೆ, ಸಿಎಂ ಸಿದ್ದರಾಮಯ್ಯ ಅವರು ಬಳ್ಳಾರಿಗೆ ಚಿಪ್ಪು ನೀಡಿದ್ದಾರೆ ಎಂದು ತೆಂಗಿನ ಚಿಪ್ಪು ಪ್ರದರ್ಶಿಸಿದರು.
ಮಾಜಿ ಶಾಸಕ ಜಿ. ಸೋಮಶೇಖರ ರೆಡ್ಡಿ, ಪಕ್ಷದ ಜಿಲ್ಲಾಧ್ಯಕ್ಷ ಅನಿಲ್‌ಕುಮಾರ್ ಮೋಕಾ, ಎಚ್. ಹನುಮಂತಪ್ಪ, ಡಾ. ಮಹಿಪಾಲ್, ಐನಾಥ ರೆಡ್ಡಿ ಸೇರಿದಂತೆ ಪಕ್ಷದ ಜಿಲ್ಲಾ ಪದಾಧಿಕಾರಿಗಳು ಹಾಗೂ ಸದಸ್ಯರು ಪ್ರತಿಭಟನೆಯಲ್ಲಿದ್ದರು.