ಅನ್ನದಾತರಿಗೆ ಅನ್ಯಾಯ ಎಸಗಿದ ಕಾಂಗ್ರೆಸ್‌: ಕುಂಪಲ ಆರೋಪ

| Published : Feb 08 2024, 01:30 AM IST

ಅನ್ನದಾತರಿಗೆ ಅನ್ಯಾಯ ಎಸಗಿದ ಕಾಂಗ್ರೆಸ್‌: ಕುಂಪಲ ಆರೋಪ
Share this Article
  • FB
  • TW
  • Linkdin
  • Email

ಸಾರಾಂಶ

ರೈತರಿಗೆ ನೀಡಬೇಕಾದ ಬಾಕಿ ಹಣ ಉಳಿಸಿಕೊಂಡಿರುವುದನ್ನು ವಿರೋಧಿಸಿ ಬುಧವಾರ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಘಟಕ ವತಿಯಿಂದ ಪ್ರತಿಭಟನೆ ನಡೆಯಿತು.

ಕನ್ನಡಪ್ರಭ ವಾರ್ತೆ ಮಂಗಳೂರು

ರಾಜ್ಯದಲ್ಲಿ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಹಾಗೂ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅನೇಕ ರೈತಪರ ಯೋಜನೆಗಳು ಜಾರಿಗೊಂಡಿವೆ. ಆದರೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ರೈತರಿಗೆ ಪ್ರೋತ್ಸಾಹಕವಾಗಿದ್ದ ಯೋಜನೆಗಳನ್ನು ಸ್ಥಗಿತಗೊಳಿಸುವ ಮೂಲಕ ಅನ್ನದಾತರಿಗೆ ಅನ್ಯಾಯ ಎಸಗಿದೆ ಎಂದು ದ.ಕ.ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್‌ ಕುಂಪಲ ಆರೋಪಿಸಿದರು.ರಾಜ್ಯ ಕಾಂಗ್ರೆಸ್‌ ಸರ್ಕಾರ ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ ನೀಡದಿರುವುದರ ವಿರುದ್ಧ ಹಾಗೂ ರೈತರಿಗೆ ನೀಡಬೇಕಾದ ಬಾಕಿ ಹಣ ಉಳಿಸಿಕೊಂಡಿರುವುದನ್ನು ವಿರೋಧಿಸಿ ಬುಧವಾರ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಘಟಕ ವತಿಯಿಂದ ನಗರದ ಮಿನಿ ವಿಧಾನಸೌಧ ಮುಂಭಾಗ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ರಾಜ್ಯ ಸರ್ಕಾರ ರೈತರಿಗೆ, ಹೈನುಗಾರರಿಗೆ ವರದಾನವಾಗಿದ್ದ ಎಲ್ಲ ಯೋಜನೆಗಳನ್ನು ಸ್ಥಗಿತಗೊಳಿಸಿದ ಕಾರಣ ರೈತರು ಹಾಗೂ ಹೈನುಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಜ್ಯದಲ್ಲಿ 80 ರಿಂದ 85 ಲಕ್ಷ ಲೀ.ನಷ್ಟುಹಾಲು ಸಂಗ್ರಹಣೆಯಾಗುತ್ತಿತ್ತು. ಈಗ 10 ಲಕ್ಷ ಲೀ.ಇಳಿಕೆಯಾಗಿದೆ. ಮೇವಿನ ಕೊರತೆಯಿಂದ ಜಾನುವಾರುಗಳು ಸಾಯುತ್ತಿವೆ. ಸರ್ಕಾರ ಬರ ಪರಿಹಾರ ನೀಡಿಲ್ಲ. ಇದರಿಂದಾಗಿ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ ಎಂದರು.

ರಾಜ್ಯ ಸರ್ಕಾರಕ್ಕೆ ತನ್ನ ಗ್ಯಾರಂಟಿ ಯೋಜನೆಗಳನ್ನು ಒದಗಿಸಲು ಸಾಧ್ಯವಾಗುತ್ತಿಲ್ಲ. ನಾಗರಿಕರಿಗೆ ಕೇಂದ್ರ ಸರ್ಕಾರದ ಅಕ್ಕಿ ಮಾತ್ರ ಸಿಗುತ್ತಿದೆ. ಕೆಎಸ್‌ಆರ್‌ಟಿಸಿ ಬಸ್‌ಗಳ ವ್ಯವಸ್ಥೆ ಸಮರ್ಪಕವಾಗಿಲ್ಲ. ವಿದ್ಯುತ್‌ ದರ ನಾಲ್ಕು ಪಟ್ಟು ಹೆಚ್ಚು ಮಾಡಲಾಗಿದೆ. ಗೃಹಲಕ್ಷ್ಮಿ ಯೋಜನೆ ಹಣ ಬರುತ್ತಿಲ್ಲ. ವಿದ್ಯಾನಿಧಿ ಬಂದಿಲ್ಲ. ಸರ್ಕಾರಿ ನೌಕರರಿಗೆ ವೇತನ, ಅಂಗನವಾಡಿ, ಆಶಾ ಕಾರ್ಯಕರ್ತೆಯರ ಗೌರವಧನ ಸರಿಯಾಗಿ ಸಿಗುತ್ತಿಲ್ಲ. ಗ್ರಾಮ ಪಂಚಾಯತ್‌ನಿಂದ ಶಾಸಕರ ವರೆಗೆ ಯಾವುದೇ ಜನಪ್ರತಿನಿಧಿಗಳಿಗೆ ಅಭಿವೃದ್ಧಿ ಯೋಜನೆಗಳಿಗೆ ಅನುದಾನ ದೊರೆಯುತ್ತಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಬಿಜೆಪಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಸುದರ್ಶನ ಮೂಡುಬಿದಿರೆ ಮಾತನಾಡಿ, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾದ ಬಳಿಕ ರಾಜ್ಯದಲ್ಲಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೇಂದ್ರದ ಕಿಸಾನ್‌ ಸಮ್ಮಾನ್‌ ಯೋಜನೆ ಜತೆಗೆ ಹಿಂದಿನ ಬಿಜೆಪಿ ಸರ್ಕಾರ ನೀಡಿದ್ದ ಪ್ರೋತ್ಸಾಹಧನ ಸ್ಥಗಿತಗೊಂಡಿದೆ. ಗೋಹತ್ಯೆ ನಿಷೇಧ ಕಾನೂನು ವಾಪಸ್‌ ಪಡೆಯುವ ನಿರ್ಧಾರವಾಗಿದೆ. ಗೋಶಾಲೆಗಳ ಕಾಮಗಾರಿ ಸ್ಥಗಿತಗೊಂಡಿದೆ. ರಾಜ್ಯ ಸರ್ಕಾರ ತಕ್ಷಣ ಹಾಲಿನ ಪ್ರೋತ್ಸಾಹಧನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.ಮೇಯರ್‌ ಸುಧೀರ್‌ ಶೆಟ್ಟಿಕಣ್ಣೂರು, ಬಿಜೆಪಿ ಜಿಲ್ಲಾ ಸಹಪ್ರಭಾರಿ ರಾಜೇಶ್‌ ಕಾವೇರಿ, ವಿಧಾನ ಪರಿಷತ್‌ ಮಾಜಿ ಸದಸ್ಯ ಮೋನಪ್ಪ ಭಂಡಾರಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕಿಶೋರ್‌ಕುಮಾರ್‌ ಬೊಟ್ಯಾಡಿ, ಯತೀಶ್‌ ಆರ್ವಾರ್‌, ಪ್ರೇಮಾನಂದ ಶೆಟ್ಟಿ, ಪ್ರಮುಖರಾದ ನಿತಿನ್‌ಕುಮಾರ್‌, ರವಿಶಂಕರ ಮಿಜಾರು, ರವೀಂದ್ರ ಶೆಟ್ಟಿ ಉಳಿದೊಟ್ಟು, ತಿಲಕ್‌ರಾಜ್‌ ಕೃಷ್ಣಾಪುರ, ಉಪಮೇಯರ್‌ ಸುನೀತಾ, ಯುವಮೋರ್ಚಾ ಜಿಲ್ಲಾಧ್ಯಕ್ಷ ನಂದನ್‌ ಮಲ್ಯ, ಜಿಲ್ಲಾ ವಕ್ತಾರರಾದ ರಾಜಗೋಪಾಲ ರೈ, ಅರುಣ್‌ ಶೇಟ್‌, ಜಿಲ್ಲಾ ಮಾಧ್ಯಮ ಪ್ರಮುಖ್‌ ವಸಂತ ಪೂಜಾರಿ, ವಿವಿಧ ಮಂಡಲಗಳ ಅಧ್ಯಕ್ಷರು, ಪದಾಧಿಕಾರಿಗಳು ಭಾಗವಹಿಸಿದ್ದರು.