ಹೊಸಪೇಟೆ: ಸಂಸದ ಈ.ತುಕಾರಾಂ ಕಳಪೆ ಕಾಮಗಾರಿ ಪ್ರಶ್ನಿಸಿದ ವ್ಯಕ್ತಿಯ ವಿರುದ್ಧ ಅವಹೇಳನಕಾರಿ ಆಗಿ ಮಾತನಾಡಿರುವುದನ್ನು ಖಂಡಿಸಿ ನಗರದಲ್ಲಿ ಶುಕ್ರವಾರ ಬಿಜೆಪಿ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು. ಸ್ಥಳೀಯ ಬಿಜೆಪಿ ಕಚೇರಿಯಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿದ ಕಾರ್ಯಕರ್ತರು, ಡಾ.ಪುನೀತ್ ರಾಜಕುಮಾರ್ ವೃತ್ತಕ್ಕೆ ತೆರಳಿ ಪ್ರತಿಭಟನೆ ನಡೆಸಿದರು. ಈ ವೇಳೆ ತುಕಾರಾಂ ಭಾವಚಿತ್ರ ತುಳಿದು ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ರೆಡ್ಡಿ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕಳಪೆ ಕಾಮಗಾರಿ ಪ್ರಶ್ನಿಸುವುದು ತಪ್ಪಲ್ಲ. ಪ್ರಶ್ನೆ ಮಾಡಿದ ಯುವಕನ ವಿರುದ್ಧ ಅವಹೇಳನಕಾರಿ ಮಾತನಾಡಿರುವುದು ಅಲ್ಲದೆ, ಯುವಕನ ವಿರುದ್ಧ ದೌರ್ಜನ್ಯ, ದಬ್ಬಾಳಿಕೆ ಮಾಡಿರುವುದು ತೀವ್ರ ಖಂಡನಿಯ. ಎಸ್‌ಸಿ, ಎಸ್‌ಟಿಯವರನ್ನು ದುರ್ಬಳಕೆ ಮಾಡಿಕೊಂಡು ಸಂಸದರಾಗಿರುವ ತುಕಾರಾಂ ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಎಸ್. ಕೃಷ್ಣನಾಯ್ಕ ಮಾತನಾಡಿ, ಕಳಪೆ ಕಾಮಗಾರಿ ಪ್ರಶ್ನಿಸಿದ ವ್ಯಕ್ತಿಯ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡುವ ಮೂಲಕ ಅಮಾಯಕ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿರುವುದು ತೀವ್ರ ಖಂಡನೀಯ ಎಂದರು.
ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಕಿಚಿಡಿ ಕೊಟ್ರೇಶ್ ಮಾತನಾಡಿ, ಕಳಪೆ ಕಾಮಗಾರಿ ಪ್ರಶ್ನಿಸಿದ್ದ ಯುವಕನ ವಿರುದ್ಧ ಅವಹೇಳನಕಾರಿ ಆಗಿ ಮಾತಾಡಿ, ಹಲ್ಲೆ ನಡೆಸಿರುವುದು ಖಂಡನೀಯ. ಇದು ಬಹಳ ದಿನ ನಡೆಯುವುದಿಲ್ಲ. ಇದರ ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸಂದೀಪ್ ಸಿಂಗ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಎಸ್. ರಾಘವೇಂದ್ರ, ಮುಖಂಡರಾದ ಸಚಿನ್, ಮಧುರಚನ್ನ ಶಾಸ್ತ್ರಿ, ರಾಘವೇಂದ್ರ, ಇಮ್ತಿಯಾಜ್, ಗೌಳಿ ರುದ್ರಪ್ಪ, ರೇಣುಕಾ, ವಿಜಯಲಕ್ಷ್ಮಿ, ಅನುರಾಧಾ ಸೇರಿದಂತೆ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.