ಎಸ್ಸಿಎಸ್ಪಿ-ಟಿಎಸ್ಪಿ ಅನುದಾನ ಗ್ಯಾರಂಟಿ ಬಳಕೆಗೆ ಖಂಡಿಸಿ ಬಿಜೆಪಿ ಪ್ರತಿಭಟನೆ

| Published : Aug 14 2025, 01:00 AM IST

ಎಸ್ಸಿಎಸ್ಪಿ-ಟಿಎಸ್ಪಿ ಅನುದಾನ ಗ್ಯಾರಂಟಿ ಬಳಕೆಗೆ ಖಂಡಿಸಿ ಬಿಜೆಪಿ ಪ್ರತಿಭಟನೆ
Share this Article
  • FB
  • TW
  • Linkdin
  • Email

ಸಾರಾಂಶ

ದಲಿತ ಜನಾಂಗದ ಅಭಿವೃದ್ಧಿಗೆಂದು ಮೀಸಲಿಟ್ಟಿರುವ ಎಸ್ಸಿಎಸ್ಪಿ-ಟಿಎಸ್ಪಿ ಹಣವನ್ನು ರಾಜ್ಯದ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳುತ್ತಿದೆ.

ಕನ್ನಡಪ್ರಭ ವಾರ್ತೆ ಬಳ್ಳಾರಿ

ದಲಿತ ಜನಾಂಗದ ಅಭಿವೃದ್ಧಿಗೆಂದು ಮೀಸಲಿಟ್ಟಿರುವ ಎಸ್ಸಿಎಸ್ಪಿ-ಟಿಎಸ್ಪಿ ಹಣವನ್ನು ರಾಜ್ಯದ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿ ಬಿಜೆಪಿ ಎಸ್ಟಿ ಮೋರ್ಚಾ ನೇತೃತ್ವದಲ್ಲಿ ನಗರದಲ್ಲಿ ಬುಧವಾರ ಪಕ್ಷದ ನೂರಾರು ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ದಲಿತರ ಕಲ್ಯಾಣಕ್ಕೆಂದು ಮೀಸಲಿಟ್ಟಿರುವ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಲಾಗಿದೆ. ಈವರೆಗೆ ಸುಮಾರು ₹39 ಸಾವಿರ ಕೋಟಿಗೂ ಅಧಿಕ ಹಣ ಬಳಸಲಾಗಿದೆ. ಪರಿಶಿಷ್ಟ ಜಾತಿ ಹಾಗೂ ಪಂಗಡದ ಬಗ್ಗೆ ಸಿಎಂಗೆ ಯಾವುದೇ ಕಾಳಜಿ ಇಲ್ಲ. ಚುನಾವಣೆಯಲ್ಲಿ ಗೆಲ್ಲುವ ತನಕ ಮಾತ್ರ ಮುಖ್ಯಮಂತ್ರಿಗಳು ದಲಿತರ ಉದ್ಧಾರದ ಬಗ್ಗೆ ಮಾತನಾಡುತ್ತಾರೆಯೇ ವಿನಾ, ಬಳಿಕ ಅಧಿಕಾರದ ಅಮಲಿನಲ್ಲಿ ಮರೆತು ಬಿಡುತ್ತಾರೆ ಎಂದು ಪ್ರತಿಭಟನಾಕಾರರು ದೂರಿದರು.

ರಾಜ್ಯದ ಕಾಂಗ್ರೆಸ್ ಸರ್ಕಾರ ದಿವಾಳಿಯಾಗಿದೆ. ಆಡಳಿತ ನಡೆಸಲು ಇವರ ಬಳಿ ಹಣವಿಲ್ಲ.

ಹೀಗಾಗಿ ದಲಿತರಿಗೆ ಮೀಸಲಾಗಿರುವ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳುವ ಮೂಲಕ ದಿವಾಳಿತನ ಪ್ರದರ್ಶಿಸಿದೆ. ಮುಖ್ಯಮಂತ್ರಿಗಳು ಸರ್ಕಾರದಲ್ಲಿ ಹಣದ ಕೊರೆತಯಿಲ್ಲ. ಅಭಿವೃದ್ಧಿಗೆ ಹಿನ್ನಡೆಯಾಗಿಲ್ಲ ಎಂದು ಹೇಳುತ್ತಿದ್ದಾರೆ. ಆದರೆ, ಸರ್ಕಾರ ದಿವಾಳಿಯಾಗಿರುವುದು ಸ್ಪಷ್ಟವಾಗಿದೆ. ಖಜಾನೆ ಭರ್ತಿ ಮಾಡಿಕೊಳ್ಳಲು ಬೆಲೆ ಏರಿಕೆಗಳ ಮೂಲಕ ಹಣ ಹೊಂದಿಸಿಕೊಳ್ಳಲು ಸರ್ಕಾರ ಪರದಾಡುತ್ತಿರುವುದು ಸ್ಪಷ್ಟವಾಗಿದೆ ಎಂದು ದೂರಿದರಲ್ಲದೆ, ಎಸ್ಸಿಎಸ್ಪಿ-ಟಿಎಸ್ಪಿ ಹಣವನ್ನು ಯಾವುದೇ ಕಾರಣಕ್ಕೂ ಬಳಕೆ ಮಾಡಿಕೊಳ್ಳಬಾರದು. ಕೂಡಲೇ ಬಾಕಿ ಇರುವ ಎಸ್ಸಿಎಸ್ಪಿ-ಟಿಎಸ್ಪಿ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಪ್ರತಿಭಟನೆಯ ನೇತೃತ್ವ ವಹಿಸಿದ್ದ ಪಕ್ಷದ ಮುಖಂಡರಾದ ಮಾಜಿ ಶಾಸಕ ಜಿ.ಸೋಮಶೇಖ ರೆಡ್ಡಿ, ಎಸ್ಟಿ ಮೋರ್ಚಾ ರಾಜ್ಯಾಧ್ಯಕ್ಷ ಬಂಗಾರು ಹನುಮಂತು ಹಾಗೂ ಪಕ್ಷದ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಮೋಕಾ ಆಗ್ರಹಿಸಿದರು.

ಇಲ್ಲಿನ ಶ್ರೀಕನಕ ದುರ್ಗಮ್ಮ ದೇವಸ್ಥಾನದಿಂದ ಮೆರವಣಿಗೆ ಹೊರಟ ಪಕ್ಷದ ಕಾರ್ಯಕರ್ತರು ಪ್ರಮುಖ ಬೀದಿಗಳ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ, ಜಿಲ್ಲಾಡಳಿತದ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಮಾಜಿ ಸಂಸದ ಸಣ್ಣ ಪಕ್ಕೀರಪ್ಪ, ಗುಡಿಗಂಟಿ ಹನುಮಂತು, ಅಡವಿಸ್ವಾಮಿ, ಪುಷ್ಪಲತಾ ಸೇರಿದಂತೆ ಪಕ್ಷದ ವಿವಿಧ ಮೊರ್ಚಾಗಳ ಸದಸ್ಯರು, ಪಾಲಿಕೆ ಸದಸ್ಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.